ಬೆಂಗಳೂರು: ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಹಿಂದುಳಿದ ಜಾತಿಗಳ ಒಕ್ಕೂಟದ ಅಧ್ಯಕ್ಷ ಜೆ.ಶ್ರೀನಿವಾಸನ್ ಮತ್ತು ಹಿರಿಯ ವಕೀಲ ಪ್ರೊ.ರವಿವರ್ಮ ಕುಮಾರ್ ಅವರಿಗೆ ಕೆಪಿಸಿಸಿ ವತಿಯಿಂದ ಡಿ.ದೇವರಾಜ ಅರಸು ಸ್ಮಾರಕ ಗೌರವ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.
ಸೋಮವಾರ ಪ್ರಶಸ್ತಿ ಪ್ರದಾನ ನಡೆಯಲಿದೆ.ಭಾನುವಾರ ಕೆಪಿಸಿಸಿ ಕಚೇರಿಯಲ್ಲಿ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಉಪಾಧ್ಯಕ್ಷ ಎ.ಕೃಷ್ಣಪ್ಪ ಮತ್ತು ವಿಧಾನ ಪರಿಷತ್‌ನ ಮಾಜಿ ಸದಸ್ಯ ಡಾ.ಎಲ್.ಹನುಮಂತಯ್ಯ, `ಇದೇ ಮೊದಲ ಬಾರಿಗೆ ಕೆಪಿಸಿಸಿ ವತಿಯಿಂದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಹೆಸರಿನಲ್ಲಿ ಪ್ರಶಸ್ತಿ ನೀಡಲಾಗುತ್ತಿದೆ. ಹಿಂದುಳಿದ ವರ್ಗಗಳ ಏಳ್ಗೆಗಾಗಿ ಮೂವರೂ ಸಲ್ಲಿಸಿರುವ ಸೇವೆ ಪರಿಗಣಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ~ ಎಂದರು.
ಕೆಪಿಸಿಸಿ ವತಿಯಿಂದ ಸೋಮವಾರ ಬೆಳಿಗ್ಗೆ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಮತ್ತು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನ್ಮದಿನಾಚರಣೆ ಸಮಾರಂಭ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲೇ ಮೂವರಿಗೂ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ, ಕೇಂದ್ರ ಸಚಿವರಾದ ಮಲ್ಲಿಕಾರ್ಜುನ ಖರ್ಗೆ, ಕೆ.ಎಚ್.ಮುನಿಯಪ್ಪ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಕೆ.ಹರಿಪ್ರಸಾದ್, ಮತ್ತಿತರರು ಸಮಾರಂಭದಲ್ಲಿ ಪಾಲ್ಗೊಳ್ಳುವರು ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.