ADVERTISEMENT

‘ಕೇಂದ್ರ ಸಂಪುಟ ಸಭೆಯಲ್ಲಿ ವಿಚಾರ ಪ್ರಸ್ತಾಪಿಸುವೆ’

​ಪ್ರಜಾವಾಣಿ ವಾರ್ತೆ
Published 11 ಜುಲೈ 2017, 19:30 IST
Last Updated 11 ಜುಲೈ 2017, 19:30 IST
‘ಕೇಂದ್ರ ಸಂಪುಟ ಸಭೆಯಲ್ಲಿ ವಿಚಾರ ಪ್ರಸ್ತಾಪಿಸುವೆ’
‘ಕೇಂದ್ರ ಸಂಪುಟ ಸಭೆಯಲ್ಲಿ ವಿಚಾರ ಪ್ರಸ್ತಾಪಿಸುವೆ’   

ಮಂಗಳೂರು: ‘ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಕುರಿತು ಬುಧವಾರ ನಡೆಯುವ ಕೇಂದ್ರ ಸಂಪುಟ ಸಭೆಯಲ್ಲಿ ಪ್ರಸ್ತಾಪಿಸಿ, ಜಿಲ್ಲೆಯ ಸಚಿವರಿಬ್ಬರು ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿರುವುದನ್ನು ಮನವರಿಕೆ ಮಾಡಿಕೊಡುವೆ’ ಎಂದು ಕೇಂದ್ರ ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ವಿ.ಸದಾನಂದ ಗೌಡ ತಿಳಿಸಿದರು.

‘ಮೃತ ಶರತ್‌ ಮಡಿವಾಳ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದೇನೆ. ಆ ಬಳಿಕ ಜಿಲ್ಲಾಧಿಕಾರಿ ಮತ್ತು ಜಿಲ್ಲೆಯ ಪೊಲೀಸ್‌ ಅಧಿಕಾರಿಗಳ ಸಭೆ ನಡೆಸಿ ಇತ್ತೀಚಿನ ಘಟನೆಗಳ ಬಗ್ಗೆ ಮಾಹಿತಿ ಪಡೆದಿದ್ದೇನೆ. ಈ ಸಂಬಂಧ ವಿಸ್ತೃತವಾದ ವರದಿಯನ್ನು ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್‌ ಅವರಿಗೆ ಸಲ್ಲಿಸುವೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆಯುವ ಸಂಪುಟ ಸಭೆಯಲ್ಲೂ ಈ ಬಗ್ಗೆ ಪ್ರಸ್ತಾಪಿಸುವೆ’ ಎಂದು ಅವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಮತ್ತು ಸಚಿವ ಯು.ಟಿ.ಖಾದರ್‌ ಅವರ ಅಧಿಕಾರ ದಾಹಕ್ಕೆ ಜಿಲ್ಲೆ ಬಲಿಯಾಗುತ್ತಿದೆ. ಜಿಲ್ಲೆಯಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ. ರಮಾನಾಥ ರೈ ಮತ್ತು ಖಾದರ್‌ ನೇರವಾಗಿ ಘರ್ಷಣೆಗಳಿಗೆ ಪ್ರಚೋದನೆ ನೀಡುತ್ತಿದ್ದಾರೆ. ದುರಹಂಕಾರಿ ಆಡಳಿತ ವೈಖರಿಯೇ ಈಗಿನ ಪರಿಸ್ಥಿತಿಗೆ ಕಾರಣ ಎಂದು ವಾಗ್ದಾಳಿ ನಡೆಸಿದರು.

ADVERTISEMENT

‘ಕಾನೂನು ಮತ್ತು ಸುವ್ಯವಸ್ಥೆ ರಾಜ್ಯ ಸರ್ಕಾರದ ವ್ಯಾಪ್ತಿಯ ವಿಷಯ. ಆದರೆ, ಇಲ್ಲಿ ಸರ್ಕಾರದ ಭಾಗವಾಗಿರುವ ಸಚಿವರೇ ಕಾನೂನು ಮತ್ತು ಸುವ್ಯವಸ್ಥೆಯನ್ನು ಹದಗೆಡಿಸುತ್ತಿದ್ದಾರೆ. ಕೆಲವು ಪ್ರದೇಶಗಳಲ್ಲಿ ಮಾತ್ರ ಹಿಂಸೆಯ ಘಟನೆಗಳು ನಡೆದಿವೆ. ಆದರೆ, ಇಡೀ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸುವ ಮೂಲಕ ಪರಿಸ್ಥಿತಿಯ ದುರ್ಲಾಭ ಪಡೆಯಲು ಸಚಿವರಿಬ್ಬರು ಯತ್ನಿಸುತ್ತಿದ್ದಾರೆ. ಘರ್ಷಣೆ ನಡೆಯದ ಪ್ರದೇಶಗಳಲ್ಲಿ ನಿಷೇಧಾಜ್ಞೆಯನ್ನು ಅಂತ್ಯಗೊಳಿಸುವ ಕುರಿತು ಪರಿಶೀಲನೆ ನಡೆಸುವಂತೆ ಜಿಲ್ಲಾಧಿಕಾರಿಯವರಿಗೆ ತಿಳಿಸಿದ್ದೇನೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.