ADVERTISEMENT

ಕೈಗಾರಿಕಾ ಪ್ರಗತಿ ಕುಂಠಿತ: ಬಗಲಿ ಆಕ್ಷೇಪ

​ಪ್ರಜಾವಾಣಿ ವಾರ್ತೆ
Published 26 ಮಾರ್ಚ್ 2012, 19:30 IST
Last Updated 26 ಮಾರ್ಚ್ 2012, 19:30 IST

ಬೆಂಗಳೂರು: ರಾಜ್ಯದಲ್ಲಿ ಕೈಗಾರಿಕಾ ಪ್ರಗತಿ ಕುಂಠಿತಗೊಂಡಿದೆ. ಸುಳ್ಳು ಅಂಕಿ ಅಂಶಗಳನ್ನು ನೀಡಿ ದಾರಿ ತಪ್ಪಿಸುತ್ತಿರುವ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಕ್ಷಮೆ ಯಾಚಿಸಬೇಕು ಎಂದು ಆಡಳಿತ ಪಕ್ಷದ ಶಾಸಕ ಡಾ.ಸಾರ್ವಭೌಮ ಬಗಲಿ ಸೋಮವಾರ ವಿಧಾನಸಭೆಯಲ್ಲಿ ಒತ್ತಾಯಿಸಿದರು.

ಹಿಂದೆ ರಾಜ್ಯದಲ್ಲಿ ಕೈಗಾರಿಕಾ ಬೆಳವಣಿಗೆ ದರ ಶೇ 10.8ರಷ್ಟಿತ್ತು. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗ ಶೇ 5.1ರಷ್ಟಿತ್ತು. ಆದರೆ ಈಗ ಶೇ 3.6ಕ್ಕೆ ಇಳಿದಿದೆ. ತಪ್ಪು ಉತ್ತರ ನೀಡುತ್ತಿರುವ ನಿರಾಣಿ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿ, ಏರಿದ ಧ್ವನಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.

ಇದಕ್ಕೆ ಧ್ವನಿಗೂಡಿಸಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, `ನಿಮ್ಮ ಪಕ್ಷದವರೇ ಆದ ಬಗಲಿ ತಮ್ಮ ನೋವನ್ನು ತೋಡಿಕೊಳ್ಳುತ್ತಿದ್ದಾರೆ. ಅವರಿಗೆ ಸೂಕ್ತ ಉತ್ತರ ಕೊಡಿ~ ಎಂದು ಆಗ್ರಹಿಸಿದರು. ಆಗ ಎದ್ದುನಿಂತ ಕಾನೂನು ಸಚಿವ ಎಸ್. ಸುರೇಶ್‌ಕುಮಾರ್, `ನೀವು ಶಾಸಕರನ್ನು ಪ್ರಚೋದಿಸಲು ಹೋಗಬೇಡಿ~ ಎಂದು ಚುಚ್ಚಿದರು. ಕೈಗಾರಿಕಾ ಅಭಿವೃದ್ಧಿಯಲ್ಲಿ ರಾಜ್ಯ 6ನೇ ಸ್ಥಾನದಲ್ಲಿದೆ. ಬೆಳವಣಿಗೆ ದರ ಕಡಿಮೆಯಾಗಿಲ್ಲ. ಶೇ 5.3ರಷ್ಟಿದೆ. ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ನಿರಾಣಿ ತಿಳಿಸಿದರು.

2010ರಲ್ಲಿ ನಡೆದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ 389 ಕಂಪೆನಿಗಳೊಂದಿಗೆ ಒಪ್ಪಂದ ಮಾಡಿಕೊಂಡಿದ್ದು, 3.92 ಲಕ್ಷ ಕೋಟಿ ರೂಪಾಯಿ ಬಂಡವಾಳ ನಿರೀಕ್ಷಿಸಲಾಗಿದೆ.

ಈಗಾಗಲೇ 26 ಕೈಗಾರಿಕಾ ಯೋಜನೆಗಳು ಅನುಷ್ಠಾನಗೊಂಡಿದ್ದು, 4,411 ಕೋಟಿ ರೂಪಾಯಿ ಬಂಡವಾಳ ಹೂಡಿಕೆಯಾಗಿದೆ. 9,167 ಜನರಿಗೆ ಉದ್ಯೋಗಾವಕಾಶ ದೊರೆತಿದೆ. 168 ಯೋಜನೆಗಳ ಅನುಷ್ಠಾನ ವಿವಿಧ ಹಂತದಲ್ಲಿದ್ದು, 3-4 ವರ್ಷಗಳಲ್ಲಿ ಪೂರ್ಣಗೊಳ್ಳಲಿವೆ ಎಂದರು.


ಈ ವರ್ಷದ ಜೂನ್ 7, 8ರಂದು ಮತ್ತೆ ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಯಲಿದ್ದು, ಆರು ಲಕ್ಷ ಕೋಟಿ ಬಂಡವಾಳ ಹೂಡಿಕೆಯಾಗುವ ನಿರೀಕ್ಷೆ ಇದೆ. 10 ಲಕ್ಷ ಜನರಿಗೆ ಉದ್ಯೋಗಾವಕಾಶ ದೊರೆಯಲಿದೆ ಎಂದು ತಿಳಿಸಿದರು.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT