ADVERTISEMENT

ಕೌಶಲ ವೃದ್ಧಿಗೆ ಹೊಸ ಯೋಜನೆ

​ಪ್ರಜಾವಾಣಿ ವಾರ್ತೆ
Published 6 ಜನವರಿ 2012, 19:30 IST
Last Updated 6 ಜನವರಿ 2012, 19:30 IST
ಕೌಶಲ ವೃದ್ಧಿಗೆ ಹೊಸ ಯೋಜನೆ
ಕೌಶಲ ವೃದ್ಧಿಗೆ ಹೊಸ ಯೋಜನೆ   

ಚಿತ್ರದುರ್ಗ: ವಿದ್ಯಾರ್ಥಿಗಳಲ್ಲಿ ಕೌಶಲ ವೃದ್ಧಿಸುವ ಕಾರ್ಯಕ್ಕೆ ಶಿಕ್ಷಣ ಇಲಾಖೆ ಯೋಜನೆ ರೂಪಿಸುತ್ತಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಶುಕ್ರವಾರ ಆರಂಭವಾದ ಪ್ರೌಢಶಾಲಾ ವಿದ್ಯಾರ್ಥಿಗಳ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಕೌಶಲ ವೃದ್ಧಿಸುವ ಶಿಕ್ಷಣ ನೀಡುವ ಯತ್ನವನ್ನು ಇಲಾಖೆ ಆರಂಭಿಸಿದೆ. ಆ ಮೂಲಕ ವಿದ್ಯಾರ್ಥಿಗಳು ಭವಿಷ್ಯದ ಸವಾಲುಗಳನ್ನು ಎದುರಿಸಬೇಕು ಮತ್ತು ಸ್ವಾವಲಂಬಿಯಾಗಿ ಬದುಕು ರೂಪಿಸಿಕೊಳ್ಳಬೇಕು ಎನ್ನುವ ಉದ್ದೇಶ ಇಲಾಖೆಗಿದೆ. ಮುಂದಿನ ವರ್ಷ 9ನೇ ತರಗತಿ ವಿದ್ಯಾರ್ಥಿಗಳಿಗೆ ಕೌಶಲ ವೃದ್ಧಿಗೆ ಹೊಸ ಯೋಜನೆ ರೂಪಿಸಲಾಗಿದೆ ಎಂದು ಅವರು ತಿಳಿಸಿದರು.

`ಪ್ರತಿಭಾ ಕಾರಂಜಿ~ ಸಂಸ್ಕೃತಿ ಜಾಗೃತಿ ಮೂಡಿಸುವ ಅಭಿಯಾನ. ಮಕ್ಕಳ ಮೂಲಕ ಜಾನಪದ ಸೇರಿದಂತೆ ಭಾರತೀಯ ಸಂಸ್ಕೃತಿ ಮತ್ತು ಪರಂಪರೆಯನ್ನು ರಕ್ಷಿಸಿ ಬೆಳೆಸಬೇಕು ಎಂದರು.

ಅಂಕಗಳು ವಿದ್ಯಾರ್ಥಿಯ ಯಶಸ್ಸಿನ ಅಳತೆಗೋಲಾಗಬಾರದು. ಮಕ್ಕಳಲ್ಲಿ ಪ್ರತಿಭೆ, ಅಸಾಧಾರಣ ಕೌಶಲ, ಸಾಮರ್ಥ್ಯಗಳನ್ನು ಗುರುತಿಸಿ ಪ್ರೋತ್ಸಾಹಿಸುವುದೇ ಶಿಕ್ಷಣ. 3 ಲಕ್ಷಕ್ಕೂ ಹೆಚ್ಚು ಅಧ್ಯಾಪಕರು ಮಕ್ಕಳ ಪ್ರತಿಭೆ ಗುರುತಿಸುವ ಕೈಂಕರ್ಯದಲ್ಲಿ ತೊಡಗಿದ್ದಾರೆ ಎಂದರು.

ಸರ್ಕಾರಿ ಶಾಲೆಗಳ ಗುಣಮಟ್ಟದ ಬಗ್ಗೆ ದೂರುಗಳು ಕೇಳಿಬರುತ್ತವೆ. ಆದರೆ, ಈ ಶಾಲೆಗಳು ಯಾವುದೇ ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಿಗಿಂತ ಕಡಿಮೆ ಇಲ್ಲ. ಶೇ. 80ರಷ್ಟು ಮಕ್ಕಳು ಇಂದು ಸರ್ಕಾರಿ ಶಾಲೆಗಳಲ್ಲಿಯೇ ಓದುತ್ತಿದ್ದಾರೆ ಎಂದು ಪ್ರತಿಪಾದಿಸಿದರು.

ಎಸ್ಸೆಸ್ಸೆಲ್ಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ಜಿಲ್ಲಾ ಉಸ್ತುವಾರಿ ಸಚಿವ ಆನಂದ ವಸಂತ ಅಸ್ನೋಟಿಕರ್ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.