ADVERTISEMENT

ಕ್ಯಾಂಪಸ್‌ನಲ್ಲಿ ಮೊಬೈಲ್ ನಿಷೇಧಿಸಲು ಸಚಿವರ ಒತ್ತಾಯ

​ಪ್ರಜಾವಾಣಿ ವಾರ್ತೆ
Published 15 ಫೆಬ್ರುವರಿ 2011, 17:20 IST
Last Updated 15 ಫೆಬ್ರುವರಿ 2011, 17:20 IST

ಮೈಸೂರು: ‘ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳ ಕ್ಯಾಂಪಸ್‌ನಲ್ಲಿ ಮೊಬೈಲ್, ಗುಟ್ಕಾ ಮತ್ತು ಪ್ಲಾಸ್ಟಿಕ್ ಬಳಸುವುದನ್ನು ನಿಷೇಧಿಸಬೇಕು’ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ, ಪರಿಸರ ಹಾಗೂ ಮೀನುಗಾರಿಕೆ ಸಚಿವ ಜೆ.ಕೃಷ್ಣ ಪಾಲೇಮಾರ್ ಮಂಗಳವಾರ ಒತ್ತಾಯಿಸಿದರು.

ಮಾನಸಗಂಗೋತ್ರಿಯ ಸೆನೆಟ್ ಭವನದಲ್ಲಿ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ಫೆ.15 ಮತ್ತು 16 ರಂದು ಏರ್ಪಡಿಸಿರುವ ತೃತೀಯ ಸಮ್ಮೇಳನ ಹಾಗೂ ಮೈಸೂರು ವಿಶ್ವವಿದ್ಯಾನಿಲಯವು ಫೆ.15 ರಿಂದ  22 ರ ವರೆಗೆ ಆಯೋಜಿಸಿರುವ ‘ಸುವರ್ಣ ಮಾನಸ ವಸ್ತುಪ್ರದರ್ಶನ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳು ಮೊಬೈಲ್ ಬಳಕೆಯನ್ನು ಹೆಚ್ಚು ಮಾಡಿದ್ದಾರೆ. ಗುಟ್ಕಾ ಸಹ ತಿನ್ನುತ್ತಾರೆ. ಪ್ಲಾಸ್ಟಿಕ್ ಬ್ಯಾಗ್‌ಗಳ ಉಪಯೋಗವೂ ಇದೆ. ಇವುಗಳಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ. ಆದ್ದರಿಂದ ಇವುಗಳನ್ನು ನಿಯಂತ್ರಿಸುವತ್ತ ವಿಶ್ವವಿದ್ಯಾನಿಲಯಗಳು ಮತ್ತು ಶಿಕ್ಷಣ ಸಂಸ್ಥೆಗಳು ಮುಂದಾಗಬೇಕು’ ಎಂದು ಅವರು ಕರೆ ನೀಡಿದರು.

’ಮೈಸೂರಿನ ಮಾನಸಗಂಗೋತ್ರಿ ಕ್ಯಾಂಪಸ್‌ನಲ್ಲಿ ಪ್ರಾದೇಶಿಕ ವಿಜ್ಞಾನ ಕೇಂದ್ರವನ್ನು ಸ್ಥಾಪಿಸಲಾಗುವುದು.  ಅಲ್ಲದೇ ರಾಜ್ಯದ 16 ಕಡೆ ಪ್ರಾದೇಶಿಕ ವಿಜ್ಞಾನ ಉಪ ಕೇಂದ್ರಗಳನ್ನು ತೆರೆಯಲಾಗುವುದು’ ಎಂದರು.

ವೈದ್ಯಕೀಯ ಶಿಕ್ಷಣ ಸಚಿವ ಎಸ್.ಎ.ರಾಮದಾಸ್ ಮಾತನಾಡಿ ‘ನಗರದ ಲಲಿತ ಮಹಲ್ ಬಳಿ ಇರುವ 35 ಎಕರೆ ಪ್ರದೇಶದಲ್ಲಿ ಮಕ್ಕಳ ವಿಜ್ಞಾನ ಮತ್ತು ತಂತ್ರಜ್ಞಾನ ಪಾರ್ಕ್ ಸ್ಥಾಪಿಸಲಾಗುವುದು. ಇದಕ್ಕಾಗಿ ಪ್ರಸಕ್ತ ಬಜೆಟ್‌ನಲ್ಲಿ ಅವಕಾಶ ಮಾಡಿಕೊಳ್ಳಲಾಗುವುದು’ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ವತಿಯಿಂದ ಹೆಸರಾಂತ ಕೃಷಿ ವಿಜ್ಞಾನಿ ಪ್ರೊ.ಆರ್.ದ್ವಾರಕೀನಾಥ್ ಅವರನ್ನು ಸನ್ಮಾನಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.