ADVERTISEMENT

ಖಾಲಿ ಹುದ್ದೆ: ಭರ್ತಿಗೆ ಆದೇಶ

​ಪ್ರಜಾವಾಣಿ ವಾರ್ತೆ
Published 3 ಜೂನ್ 2013, 19:59 IST
Last Updated 3 ಜೂನ್ 2013, 19:59 IST

ಬೆಂಗಳೂರು: ರಾಜ್ಯ ಗ್ರಾಹಕರ ವ್ಯಾಜ್ಯ ಪರಿಹಾರ ಆಯೋಗದಲ್ಲಿ ಖಾಲಿ ಇರುವ ಸ್ಥಾನಗಳನ್ನು ನಾಲ್ಕು ವಾರಗಳಲ್ಲಿ ಭರ್ತಿ ಮಾಡುವಂತೆ ಹೈಕೋರ್ಟ್ ಸೋಮವಾರ ನಿರ್ದೇಶನ ನೀಡಿದೆ.

ಬೆಂಗಳೂರಿನ ಬಸವನಗೌಡ ಪಾಟೀಲ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ಎಚ್. ವಘೇಲಾ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ನೀಡಿತು.

ಆಯೋಗದಲ್ಲಿ ಖಾಲಿ ಇರುವ 28 ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸಂದರ್ಶನ ಕೂಡ ನಡೆದಿದೆ ಎಂದು ಅರ್ಜಿದಾರರ ಪರ ವಕೀಲೆ ಜೈನಾ ಕೊಠಾರಿ ಪೀಠಕ್ಕೆ ತಿಳಿಸಿದರು.

ಯಾವ ಹುದ್ದೆಗೆ ಯಾರನ್ನು ನೇಮಕ ಮಾಡಬೇಕು ಎಂಬ ಬಗ್ಗೆ ಆಯೋಗದಿಂದ ವರದಿ ಬಂದಿಲ್ಲ ಎಂದು ಸರ್ಕಾರದ ಪರ ವಕೀಲರು ವಿವರಿಸಿದರು.

ಖಾಲಿ ಇರುವ ಹುದ್ದೆಗಳಿಗೆ ಯಾರನ್ನು ನೇಮಕ ಮಾಡಬಹುದು ಎಂಬ ಬಗ್ಗೆ ಸರ್ಕಾರಕ್ಕೆ ಆಯೋಗವು ಇನ್ನೊಂದು ವಾರದಲ್ಲಿ ವರದಿ ಸಲ್ಲಿಸಬೇಕು. ಅದನ್ನು ಆಧರಿಸಿ ಸರ್ಕಾರವು, ಮೂರು ವಾರಗಳಲ್ಲಿ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ನ್ಯಾಯಪೀಠ ನಿರ್ದೇಶನ ನೀಡಿತು. ಅರ್ಜಿ ಇತ್ಯರ್ಥಪಡಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.