ADVERTISEMENT

ಗಣಿ ಚರ್ಚೆಗೆ ನಕಾರ: ಕಾಂಗ್ರೆಸ್ ಧರಣಿ

​ಪ್ರಜಾವಾಣಿ ವಾರ್ತೆ
Published 1 ಫೆಬ್ರುವರಿ 2012, 19:30 IST
Last Updated 1 ಫೆಬ್ರುವರಿ 2012, 19:30 IST

ಬೆಂಗಳೂರು:  ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದ ಲೋಕಾಯುಕ್ತ ವರದಿಯಲ್ಲಿ ಹೆಸರಿಸಲಾದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಈ ಕುರಿತ ಚರ್ಚೆಗೆ ಅವಕಾಶ ಕೋರಿ ಮಂಡಿಸಿದ ನಿಲುವಳಿ ಸೂಚನೆಯನ್ನು ತಿರಸ್ಕರಿಸಿದ ಕ್ರಮವನ್ನು ಖಂಡಿಸಿ ಕಾಂಗ್ರೆಸ್ ಸದಸ್ಯರು ಬುಧವಾರ ವಿಧಾನ ಪರಿಷತ್ತಿನಲ್ಲಿ ಧರಣಿ ನಡೆಸಿದರು.

ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಸಲ್ಲಿಸಿದ್ದ ವರದಿಯ ಬಗ್ಗೆ ಲೋಕಾಯುಕ್ತ ಸಂಸ್ಥೆಯಿಂದಲೇ ಕೆಲವು ಸ್ಪಷ್ಟೀಕರಣಗಳನ್ನು ಸರ್ಕಾರ ಬಯಸಿದೆ. ಆದರೆ, ಇದುವರೆಗೂ ಪ್ರತಿಕ್ರಿಯೆ ಬಂದಿಲ್ಲ. ಇಂತಹ ಸನ್ನಿವೇಶದಲ್ಲಿ ತಾಂತ್ರಿಕ ದೃಷ್ಟಿಯಿಂದ ಸದನದಲ್ಲಿ ವರದಿ ಅನುಷ್ಠಾನದ ಬಗ್ಗೆ ಚರ್ಚೆ ನಡೆಸುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಸ್ಪಷ್ಟಪಡಿಸಿದರು.

ಈ ಕ್ರಮವನ್ನು ಪ್ರತಿಭಟಿಸಿ ಕಾಂಗ್ರೆಸ್ ಸದಸ್ಯರು ಸಭಾಪತಿಗಳ ಪೀಠದ ಮುಂಭಾಗಕ್ಕೆ ತೆರಳಿ ಧರಣಿ ನಡೆಸಿದರು. ಸಭಾಪತಿಗಳು ಮನವಿ ಮಾಡಿಕೊಂಡರೂ ಕಾಂಗ್ರೆಸ್ ಸದಸ್ಯರು ಧರಣಿ ಹಿಂತೆಗೆದುಕೊಳ್ಳಲಿಲ್ಲ. ಮಧ್ಯಾಹ್ನ 2 ಗಂಟೆ ವೇಳೆಗೆ ಸದನ ಮುಂದೂಡಲಾಯಿತು.

ADVERTISEMENT

ಕಾಂಗ್ರೆಸ್ ಸದಸ್ಯರು ಪಟ್ಟು ಸಡಿಲಿಸದೆ ಧರಣಿ ಮುಂದುವರಿಸಿದ್ದರಿಂದ ಸದನವನ್ನು ಭೋಜನ ವಿರಾಮದ ವೇಳೆಗೆ ಮುಂದೂಡಲಾಯಿತು. ಮಧ್ಯಾಹ್ನ ಮತ್ತೆ ಕಲಾಪ ಆರಂಭವಾದಾಗ ನಿಯಮ 68ರಡಿ ಚರ್ಚೆಗೆ ಅವಕಾಶ ನೀಡುವುದಾಗಿ ಸಭಾಪತಿಗಳು ಭರವಸೆ ನೀಡಿದ್ದರಿಂದ ಕಾಂಗ್ರೆಸ್ ಸದಸ್ಯರು ಧರಣಿ ಹಿಂತೆಗೆದುಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.