ADVERTISEMENT

ಗೃಹ ಸಚಿವಾಲಯದಿಂದ ಶಿಫಾರಸು ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2018, 19:30 IST
Last Updated 20 ಮಾರ್ಚ್ 2018, 19:30 IST

ನವದೆಹಲಿ: ಲಿಂಗಾಯತ ಮತ್ತು ವೀರಶೈವ ಲಿಂಗಾಯತ ಸಮುದಾಯಕ್ಕೆ ಪ್ರತ್ಯೇಕ ಅಲ್ಪಸಂಖ್ಯಾತ ಧರ್ಮದ ಮಾನ್ಯತೆ ನೀಡುವಂತೆ ಕರ್ನಾಟಕ ಸರ್ಕಾರ ಕಳುಹಿಸಿರುವ ಶಿಫಾರಸು ಕೇಂದ್ರ ಗೃಹ ಸಚಿವಾಲಯಕ್ಕೆ ಪರಿಶೀಲನೆಗೆ ಬರಲಿದೆ.

ಕರ್ನಾಟಕ ಸರ್ಕಾರ ಕಳಿಸಿರುವ ಶಿಫಾರಸು ತಲುಪಿದ ನಂತರ ಕೇಂದ್ರ ಗೃಹ ಸಚಿವಾಲಯ ಅದನ್ನು ಕೂಲಂಕಷವಾಗಿ ಪರಿಶೀಲಿಸಲಿದೆ ಎಂದು ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ಮಂಗಳವಾರ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ನಂತರ ಹೆಚ್ಚುವರಿ ಪರಿಶೀಲನೆ ಮತ್ತು ಸಲಹೆಗಳಿಗಾಗಿ ಪ್ರಸ್ತಾವನೆಯನ್ನು ರಿಜಿಸ್ಟ್ರಾರ್‌ ಜನರಲ್‌ ಮತ್ತು ಜನಗಣತಿ ಆಯುಕ್ತರ ಕಚೇರಿಗೆ ರವಾನಿಸಲಾಗುವುದು ಎಂದು ಸಚಿವಾಲಯದ ಮತ್ತೊಬ್ಬ ಅಧಿಕಾರಿ ತಿಳಿಸಿದ್ದಾರೆ.

ADVERTISEMENT

ನಿಲುವು ಸ್ಪಷ್ಟಪಡಿಸಲು ಸವಾಲು: ಲಿಂಗಾಯತ ಸಮುದಾಯಕ್ಕೆ ಸ್ವತಂತ್ರ ಧರ್ಮದ ಸ್ಥಾನಮಾನ ನೀಡುವ ಬಗ್ಗೆ ನಿಲುವು ಸ್ಪಷ್ಟಪಡಿಸುವಂತೆ ಕಾಂಗ್ರೆಸ್‌ ಮಂಗಳವಾರ ಬಿಜೆಪಿಗೆ ಸವಾಲು ಹಾಕಿದೆ.

ಬಿಜೆಪಿಯ ನಿಲುವು ಪ್ರತ್ಯೇಕ ಧರ್ಮದ ಪರವೋ ಅಥವಾ ವಿರುದ್ಧವೋ ಎಂಬುವುದನ್ನು ಬಹಿರಂಗಪಡಿಸಬೇಕು ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಮತ್ತು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಅವರನ್ನು ಕಾಂಗ್ರೆಸ್‌ ಕೇಳಿದೆ.

ಸ್ವತಂತ್ರ ಧರ್ಮದ ವಿಚಾರವನ್ನು ರಾಜಕೀಯಕ್ಕೆ ತಳುಕು ಹಾಕುವುದು ಸರಿಯಲ್ಲ ಎಂದು ಕಾಂಗ್ರೆಸ್‌ ವಕ್ತಾರ ರಣದೀಪ್‌ ಸುರ್ಜೆವಾಲಾ ಮಂಗಳವಾರ ಅಭಿಪ್ರಾಯಪಟ್ಟಿದ್ದಾರೆ.

ಕರ್ನಾಟಕ ಸರ್ಕಾರ ಎಲ್ಲ ಸಾಧಕ–ಬಾಧಕ ಪರಿಶೀಲಿಸಿ ತೀರ್ಮಾನ ತೆಗೆದುಕೊಂಡಿದೆ. ಜೈನ ಧರ್ಮದಂತೆ ಲಿಂಗಾಯತ ಸಮುದಾಯ ಕೂಡ ಸ್ವತಂತ್ರ ಧರ್ಮವಾಗುವ ಎಲ್ಲ ಅರ್ಹತೆ ಹೊಂದಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.