ADVERTISEMENT

ಚಂದ್ರೇಗೌಡರಿಗೆ ನೋಟಿಸ್ ಜಾರಿ

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2011, 19:30 IST
Last Updated 4 ಸೆಪ್ಟೆಂಬರ್ 2011, 19:30 IST

ಬೆಂಗಳೂರು: ಕೊಪ್ಪಳ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲೇ ಎದುರಿಸಬೇಕೆಂಬ ಹೇಳಿಕೆ ನೀಡಿರುವ ಬಗ್ಗೆ ವಿವರಣೆ ಕೋರಿ ಸಂಸದ ಡಿ.ಬಿ.ಚಂದ್ರೇಗೌಡ ಅವರಿಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ ನೋಟಿಸ್ ಜಾರಿ ಮಾಡಿದ್ದಾರೆ.

`ಹಾಲಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡರ ನೇತೃತ್ವದಲ್ಲಿ ಚುನಾವಣೆ ಎದುರಿಸಿದರೆ ಗೆಲ್ಲುವ ವಿಶ್ವಾಸವಿಲ್ಲ. ಯಡಿಯೂರಪ್ಪ ನಾಯಕತ್ವ ಇದ್ದರೆ ಮಾತ್ರ ಗೆಲುವು ಸುಲಭವಾಗಲಿದೆ~ ಎಂದು ಚಂದ್ರೇಗೌಡ ಶನಿವಾರ ಹೇಳಿಕೆ ನೀಡಿದ್ದರು. ಈ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಈಶ್ವರಪ್ಪ, ಈ ಬಗ್ಗೆ ವಿವರಣೆ ನೀಡುವಂತೆ ಭಾನುವಾರ ನೋಟಿಸ್ ನೀಡಿದ್ದಾರೆ.

ಈ ಕುರಿತು `ಪ್ರಜಾವಾಣಿ~ಗೆ ಪ್ರತಿಕ್ರಿಯಿಸಿದ ಈಶ್ವರಪ್ಪ, `ಚಂದ್ರೇಗೌಡರ ಹೇಳಿಕೆಯಿಂದ ಸದಾನಂದ ಗೌಡ ಮತ್ತು ಬಿಜೆಪಿಗೆ ಅವಮಾನ ಆಗಿದೆ. ಯಾರ ನಾಯಕತ್ವದಲ್ಲಿ ಚುನಾವಣೆ ಎದುರಿಸಬೇಕು ಎಂಬುದನ್ನು ನಿರ್ಧರಿಸಲು ಪಕ್ಷವಿದೆ. ಸದಾನಂದ ಗೌಡರ ನೇತೃತ್ವದಲ್ಲಿ ಚುನಾವಣೆಗೆ ಹೋಗಬಾರದು ಎಂಬ ಹೇಳಿಕೆ ನೀಡಲು ಅವರಿಗೆ ಯಾರು ಅಧಿಕಾರ ಕೊಟ್ಟಿದ್ದಾರೆ ಎಂಬುದನ್ನು ವಿವರಿಸುವಂತೆ ಪತ್ರದಲ್ಲಿ ಸೂಚಿಸಿದ್ದೇನೆ~ ಎಂದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.