ADVERTISEMENT

ಚಿಕ್ಕಬಳ್ಳಾಪುರ: ಜೆಡಿಎಸ್ ಕಾರ್ಯಕರ್ತರ ವಿಜಯೋತ್ಸವ

​ಪ್ರಜಾವಾಣಿ ವಾರ್ತೆ
Published 23 ಮೇ 2018, 13:32 IST
Last Updated 23 ಮೇ 2018, 13:32 IST
ಚಿಕ್ಕಬಳ್ಳಾಪುರದಲ್ಲಿ ಪಕ್ಷದ ಕಚೇರಿ ಎದುರು ಪಟಾಕಿ ಸಿಡಿಸಿ ಸಂಭ್ರಮಿಸಿದ ಜೆಡಿಎಸ್ ಕಾರ್ಯಕರ್ತರು
ಚಿಕ್ಕಬಳ್ಳಾಪುರದಲ್ಲಿ ಪಕ್ಷದ ಕಚೇರಿ ಎದುರು ಪಟಾಕಿ ಸಿಡಿಸಿ ಸಂಭ್ರಮಿಸಿದ ಜೆಡಿಎಸ್ ಕಾರ್ಯಕರ್ತರು   

ಚಿಕ್ಕಬಳ್ಳಾಪುರ: ಜೆಡಿಎಸ್ - ಕಾಂಗ್ರೆಸ್ ಮೈತ್ರಿ ಸರ್ಕಾರದ ಚುಕ್ಕಾಣಿ ಹಿಡಿದ ಜೆಡಿಎಸ್ ವರಿಷ್ಠ ಎಚ್.ಡಿ.ಕುಮಾರಸ್ವಾಮಿ ಅವರು ಬುಧವಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ಜಿಲ್ಲೆಯ ಜೆಡಿಎಸ್ ಪಾಳೆಯಗಳಲ್ಲಿ ಸಂತಸ ಮನೆ ಮಾಡಿತ್ತು. ಜೆಡಿಎಸ್ ಕಾರ್ಯಕರ್ತರು ಪ್ರಮುಖ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ನಗರದಲ್ಲಿರುವ ಜೆಡಿಎಸ್ ಕಚೇರಿಯಲ್ಲಿ ಬುಧವಾರ ಬೆಳಿಗ್ಗೆಯಿಂದಲೇ ಹಬ್ಬದ ವಾತಾವರಣ ಮನೆ ಮಾಡಿತ್ತು. ಜೆಡಿಎಸ್ ಕಾರ್ಯಕರ್ತರು ಸಾವಿರಾರು ಲಾಡುಗಳನ್ನು ಹಂಚಿ, ಅನ್ನ ಸಂತರ್ಪಣೆ ವ್ಯವಸ್ಥೆ ಕೂಡ ಮಾಡಿದರು. ಸಂಜೆ ಬಿ.ಬಿ.ರಸ್ತೆಯಲ್ಲಿರುವ ಕಚೇರಿ ಎದುರು ಮುಖಂಡರು, ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜೆಡಿಎಸ್ ಮುಖಂಡ ಕೆ.ಪಿ.ಬಚ್ಚೇಗೌಡ, ‘ನಮ್ಮ ನೆಚ್ಚಿನ ನಾಯಕರಾದ ಎಚ್.ಡಿ.ಕುಮಾರಸ್ವಾಮಿ ಅವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದಾರೆ. ನಾಡಿನ ಜನತೆಯ ಎಲ್ಲರ ಆಶೀರ್ವಾದ ಅವರ ಮೇಲಿದೆ. ವರುಣ ಕೂಡ ಆ ಶುಭಗಳಿಗೆಗೆ ಸಾಕ್ಷಿಯಾಗಿ ಹರಿಸಿದ್ದಾನೆ’ ಎಂದು ಸಂತಸ ವ್ಯಕ್ತಪಡಿಸಿದರು.

ADVERTISEMENT

‘ಕುಮಾರಸ್ವಾಮಿ ಅವರು ಐದು ವರ್ಷಗಳ ಕಾಲ ದಕ್ಷ, ಪ್ರಾಮಾಣಿಕ ಆಡಳಿತ ನೀಡುತ್ತಾರೆ ಎಂಬ ಭರವಸೆ ಇಟ್ಟುಕೊಂಡಿದ್ದೇವೆ. ಖಂಡಿತ ಅವರು ರಾಷ್ಟ್ರ ಮೆಚ್ಚುವ ಆಡಳಿತ ನೀಡುತ್ತಾರೆ. ಈ ಹಿಂದೆ ಅವರು 20 ತಿಂಗಳ ಅವಧಿಯಲ್ಲಿ ಜನಸ್ನೇಹಿ ಆಡಳಿತ ಕೊಟ್ಟಿದ್ದರು. ಈಗಲೂ ಅವರು ಅಂತಹ ಆಡಳಿತ ಕೊಡುತ್ತಾರೆ ಎಂಬ ನಂಬಿಕೆ ಇದೆ’ ಎಂದು ಹೇಳಿದರು.

‘ಕುಮಾರಸ್ವಾಮಿ ಅವರು ಯಾವತ್ತೂ ವಿಧಾನಸೌಧದ ಮೂರನೇ ಮಹಡಿಯಲ್ಲಿ ಕುಳಿತು ಆಡಳಿತ ಮಾಡಿದವರಲ್ಲ. ಜನರ ನಡುವೆ ಇದ್ದು ಅವರ ಸಮಸ್ಯೆಗಳನ್ನು ನೈಜವಾಗಿ ಅರಿತು ಕಷ್ಟಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತ ಬಂದಿದ್ದಾರೆ. ಈ ಮೈತ್ರಿ ಸರ್ಕಾರದಲ್ಲಿ ಯಾವುದೇ ಅಪಸ್ವರಗಳಿಗೆ ಅವಕಾಶ ನೀಡದೆ ಉತ್ತಮ ಆಡಳಿತ ನೀಡುತ್ತಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.