ADVERTISEMENT

‘ಚಿಕ್ಕೋಡಿ ಜಿಲ್ಲೆಯನ್ನಾಗಿ ಮಾಡಿ’

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2018, 19:30 IST
Last Updated 23 ಫೆಬ್ರುವರಿ 2018, 19:30 IST
ಶಶಿಕಲಾ ಜೊಲ್ಲೆ
ಶಶಿಕಲಾ ಜೊಲ್ಲೆ   

ಬೆಂಗಳೂರು: ‘ಚಿಕ್ಕೋಡಿ ಜಿಲ್ಲಾ ರಚನೆಗೆ ಸಂಬಂಧಿಸಿದಂತೆ ಸರ್ಕಾರ ಶೀಘ್ರ ನಿರ್ಧಾರ ಕೈಗೊಳ್ಳಬೇಕು’ ಎಂದು ಬಿಜೆಪಿಯ ಶಶಿಕಲಾ ಜೊಲ್ಲೆ ವಿಧಾನಸಭೆಯಲ್ಲಿ ಶುಕ್ರವಾರ ಒತ್ತಾಯಿಸಿದರು.

‘ರಾಜ್ಯದಲ್ಲೇ ಬೆಳಗಾವಿ ಅತಿ ದೊಡ್ಡ ಜಿಲ್ಲೆಯಾಗಿದೆ. ಅಥಣಿಯ ಕೊನೆ ಹಳ್ಳಿಯಿಂದ ಬೆಳಗಾವಿಗೆ 200 ಕಿಲೋ ಮೀಟರ್‌ಗೂ ಹೆಚ್ಚು ದೂರವಿದೆ. ಹೀಗಾಗಿ, ಜನಸಾಮಾನ್ಯರಿಗೆ ತೊಂದರೆಯಾಗುತ್ತಿದೆ. ಈ ಹಿಂದೆ ಜೆ.ಎಚ್‌. ಪಟೇಲ್‌ ಅವರು ಮುಖ್ಯಮಂತ್ರಿಯಾಗಿದ್ದಾಗ ಚಿಕ್ಕೋಡಿ ಜಿಲ್ಲೆ ರಚನೆಗೆ ಭರವಸೆ ನೀಡಿದ್ದರು. ಆದರೆ, ಇದುವರೆಗೆ ಸಾಧ್ಯವಾಗಿಲ್ಲ’ ಎಂದರು.

‘ಚಿಕ್ಕೋಡಿಯನ್ನು ಜಿಲ್ಲೆ ಮಾಡುವಂತೆ ನಾಗರಿಕರು ಹಲವು ಬಾರಿ ಧರಣಿಗಳನ್ನು ನಡೆಸಿದ್ದಾರೆ. ಈಗ ಫೆ.5ರಿಂದ ಮತ್ತೆ ಜನರು ಧರಣಿ ನಡೆಸುತ್ತಿದ್ದಾರೆ. ಜಿಲ್ಲಾ ಹೋರಾಟ ಸಮಿತಿ ಮನವಿಗೆ ಸರ್ಕಾರ ಸ್ಪಂದಿಸಿ ಬಹುದಿನಗಳ ಬೇಡಿಕೆಯನ್ನು ಶೀಘ್ರ ಈಡೇರಿಸಬೇಕು’ ಎಂದು ಒತ್ತಾಯಿಸಿದರು.
***
‘ಜಿಲ್ಲೆ ರಚನೆ ಘೋಷಿಸದಿದ್ದರೆ ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಟ’
ಚಿಕ್ಕೋಡಿ: ‘ಪ್ರತ್ಯೇಕ ಜಿಲ್ಲೆ ಘೋಷಣೆಗಾಗಿ ನಡೆಸುತ್ತಿರುವ ಹೋರಾಟಕ್ಕೆ ಸರ್ಕಾರ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ರಚನೆಯ ಬೇಡಿಕೆ ಪ್ರತಿಧ್ವನಿಸಲಿದೆ’ ಎಂದು ವಿಧಾನ ಪರಿಷತ್ ಸದಸ್ಯ
ಮಹಾಂತೇಶ ಕವಟಗಿಮಠ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ADVERTISEMENT

ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿ ಶುಕ್ರವಾರ ಕರೆ ನೀಡಿದ್ದ ‘ಚಿಕ್ಕೋಡಿ ಬಂದ್‌’ ವೇಳೆ ಪ್ರತಿಭಟನಾ ರ‍್ಯಾಲಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.

‘ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಬೆಳಗಾವಿಗೆ ಬರುತ್ತಿದ್ದು, ಈ ಸಂದರ್ಭದಲ್ಲಿ ಚಿಕ್ಕೋಡಿ ಮತ್ತು ಗೋಕಾಕ್‌ ಅನ್ನು ಹೊಸ ಜಿಲ್ಲೆಗಳನ್ನಾಗಿ ಘೋಷಿಸಬೇಕು’ ಎಂದು ಅವರು ಒತ್ತಾಯಿಸಿದರು.

‘ಬೆಂಗಳೂರು, ಮೈಸೂರು ಭಾಗದಲ್ಲಿ ಈ ರೀತಿಯ ಹೋರಾಟಗಳು ನಡೆದಿದ್ದರೆ ಸರ್ಕಾರ ತಕ್ಷಣ ಸ್ಪಂದಿಸುತ್ತಿತ್ತು’ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.