ADVERTISEMENT

ಚುನಾವಣಾ ಅಧಿಕಾರಿಗಳಿಂದ ಅತಿರೇಕದ ವರ್ತನೆ: ಆರೋಪ

ವಿಧಾನ ಪರಿಷತ್‌ನ ಸರ್ಕಾರದ ಮುಖ್ಯ ಸಚೇತಕ ಐವನ್ ಡಿಸೋಜ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2018, 19:30 IST
Last Updated 16 ಏಪ್ರಿಲ್ 2018, 19:30 IST

ಮಂಗಳೂರು: ‘ಚುನಾವಣಾ ಅಧಿಕಾರಿಗಳು ಅತಿರೇಕದಿಂದ ವರ್ತಿಸುತ್ತಿದ್ದಾರೆ. ಮಾದರಿ ನೀತಿಸಂಹಿತೆಯನ್ನು ಸರಿಯಾಗಿ ಅರ್ಥ ಮಾಡಿಕೊಳ್ಳದೇ ಜನರಿಗೆ ತೊಂದರೆ ಕೊಡುತ್ತಿದ್ದಾರೆ’ ಎಂದು ವಿಧಾನ ಪರಿಷತ್‌ನ ಸರ್ಕಾರದ ಮುಖ್ಯ ಸಚೇತಕ ಐವನ್ ಡಿಸೋಜ ಆರೋಪಿಸಿದರು.

ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚುನಾವಣಾ ಅಧಿಕಾರಿಗಳು ತಮ್ಮ ಮಿತಿಯನ್ನು ಮೀರಿ ಕ್ರಮ ಕೈಗೊಳ್ಳುತ್ತಿದ್ದಾರೆ. ಮತದಾರರಿಗೆ ಆಮಿಷ ಒಡ್ಡುವುದನ್ನು ತಡೆಯುವ ಬದಲಿಗೆ ಜನರ ದೈನಂದಿನ ಜೀವನಕ್ಕೆ ಅಡ್ಡಿ ಮಾಡುತ್ತಿದ್ದಾರೆ’ ಎಂದರು.

ತುರ್ತು ಪರಿಸ್ಥಿತಿಯಲ್ಲಿ ಚುನಾವಣೆ ನಡೆಯುತ್ತಿಲ್ಲ. ಇಲ್ಲಿ ಪ್ರಜಾಪ್ರಭುತ್ವ ಇದೆ. ಅದನ್ನು ಅಧಿಕಾರಿಗಳು ಅರ್ಥ ಮಾಡಿಕೊಳ್ಳಬೇಕಿದೆ. ಆದರೆ, ಕಾನೂನನ್ನು ತಮ್ಮ ಇಚ್ಛೆಗೆ ತಕ್ಕಂತೆ ಅರ್ಥೈಸುವ ಅಧಿಕಾರಿಗಳು, ಸಾಮಾಜಿಕ, ಧಾರ್ಮಿಕ ಮತ್ತು ಕೌಟುಂಬಿಕ ಕಾರ್ಯಕ್ರಮಗಳಿಗೆ ಅಡ್ಡಿಪಡಿಸುತ್ತಿದ್ದಾರೆ. ಮೊದಲೇ ನಿಗದಿಯಾಗಿದ್ದ ಮದುವೆ ಕಾರ್ಯಕ್ರಮಗಳಿಗೂ ತೊಂದರೆ ಮಾಡುತ್ತಿದ್ದಾರೆ ಎಂದು ದೂರಿದರು.

ADVERTISEMENT

ಅಧಿಕಾರಿಗಳಿಂದ ಆಗುತ್ತಿರುವ ತೊಂದರೆ ಕುರಿತು ಜಿಲ್ಲಾಧಿಕಾರಿಯವರ ಗಮನಕ್ಕೆ ತರಲಾಗುವುದು. ರಾಜ್ಯದ ಮುಖ್ಯ ಚುನಾವಣಾಧಿಕಾರಿ ಸಂಜೀವ್‌ಕುಮಾರ್‌ ಅವರಿಗೂ ಮನವಿ ಸಲ್ಲಿಸಲಾಗುವುದು. ನೀತಿಸಂಹಿತೆಯ ಹೆಸರಿನಲ್ಲಿ ಜನಜೀವನಕ್ಕೆ ತೊಂದರೆ ಮಾಡುವ ರೀತಿಯಲ್ಲಿ ವರ್ತಿಸದಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲು ಕೋರಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.