ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭಾನುವಾರ ಬೆಳಿಗ್ಗೆ ಭೇಟಿಮಾಡಿದ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಲೋಕಸಭಾ ಚುನಾವಣಾ ಪ್ರಚಾರ ಮತ್ತು ಪ್ರವಾಸ ಕಾರ್ಯಕ್ರಮಗಳ ಕುರಿತು ಚರ್ಚೆ ನಡೆಸಿದರು.
ಮುಖ್ಯಮಂತ್ರಿಯವರ ಅಧಿಕೃತ ನಿವಾಸ ಕಾವೇರಿಯಲ್ಲಿ ಉಭಯ ನಾಯಕರ ಭೇಟಿ ನಡೆದಿದೆ. ಇಬ್ಬರೂ ಒಂದು ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದ್ದು, ಮೂರು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ವಿಳಂಬ ಆಗುತ್ತಿರುವುದು ಮತ್ತು ಕೆಲವು ಕಡೆಗಳಲ್ಲಿ ಟಿಕೆಟ್ ಹಂಚಿಕೆಗೆ ಕಾರ್ಯಕರ್ತರಿಂದ ವಿರೋಧ ವ್ಯಕ್ತವಾಗುತ್ತಿರುವ ಕುರಿತು ಸಮಾಲೋಚನೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.
ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ರಾಜ್ಯದಾದ್ಯಂತ ಪ್ರವಾಸ ಕೈಗೊಳ್ಳುವ ಬಗ್ಗೆ ಇಬ್ಬರೂ ಚರ್ಚೆ ನಡೆಸಿದ್ದಾರೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ರಾಜ್ಯದ ಯಾವ ಯಾವ ಭಾಗಗಳಿಗೆ ಚುನಾವಣಾ ಪ್ರಚಾರಕ್ಕೆ ಆಹ್ವಾನಿಸಿದರೆ ಸೂಕ್ತ ಎಂಬ ವಿಚಾರವಾಗಿಯೂ ಸಮಾಲೋಚನೆ ನಡೆಸಿದ್ದಾರೆ.
ಉತ್ತರ ಕನ್ನಡ, ಧಾರವಾಡ ಮತ್ತು ಹಾವೇರಿ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ವಿಳಂಬ ಆಗುತ್ತಿರುವ ಬಗ್ಗೆಯೂ ಈ ಭೇಟಿ ವೇಳೆ ಚರ್ಚೆ ನಡೆದಿದೆ. ಮೂರು ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಸಂಬಂಧ ಹೈಕಮಾಂಡ್ ನಾಯಕರನ್ನು ಸಂಪರ್ಕಿಸಿ, ಚರ್ಚಿಸಲು ತೀರ್ಮಾನಿಸಿದ್ದಾರೆ. ಲೋಕಸಭಾ ಚುನಾವಣೆಗೆ ಪಕ್ಷ ಟಿಕೆಟ್ ನಿರಾಕರಿಸಿರುವುದರಿಂದ ಸಿಟ್ಟಿಗೆದ್ದಿರುವ ಕೇಂದ್ರದ ಮಾಜಿ ಸಚಿವ ಸಿ.ಕೆ.ಜಾಫರ್ ಷರೀಫ್ ಅವರನ್ನು ಮನವೊಲಿಸಲು ಮತ್ತೊಮ್ಮೆ ಪ್ರಯತ್ನಿಸುವ ನಿರ್ಧಾರವನ್ನೂ ಮಾಡಿದ್ದಾರೆ ಎಂದು ಗೊತ್ತಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.