ADVERTISEMENT

ಚುನಾವಣೆ ಘೋಷಣೆ ಬಳಿಕ ನಾಯಕತ್ವ ಪ್ರಕಟ- ಜೋಶಿ

​ಪ್ರಜಾವಾಣಿ ವಾರ್ತೆ
Published 3 ನವೆಂಬರ್ 2012, 19:30 IST
Last Updated 3 ನವೆಂಬರ್ 2012, 19:30 IST

ಕೊಪ್ಪಳ: ವಿಧಾನಸಭೆಗೆ ಚುನಾವಣೆ ಘೋಷಣೆಯಾದ ನಂತರವಷ್ಟೇ ಯಾರ ನಾಯಕತ್ವದಲ್ಲಿ ಚುನಾವಣೆ ಎದುರಿಸಲಾಗುವುದು ಎಂಬುದನ್ನು ಬಹಿರಂಗಪಡಿಸಲಾಗುವುದು ಎಂದು ಸಂಸದ ಹಾಗೂ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರಹ್ಲಾದ ಜೋಶಿ ಹೇಳಿದರು.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಶನಿವಾರ ಮಾತನಾಡಿದ ಅವರು, ಸದ್ಯ ಚುನಾವಣೆ ದೃಷ್ಟಿಯಲ್ಲಿ ಇಟ್ಟುಕೊಂಡು ಪಕ್ಷದ ಸಂಘಟನೆಗೆ ಒತ್ತು ನೀಡಲಾಗುತ್ತಿದೆ. ಚುನಾವಣೆ ಘೋಷಣೆಗೊಂಡ ನಂತರವಷ್ಟೇ ಯಾರ ನೇತೃತ್ವದಲ್ಲಿ ಚುನಾವಣೆಯನ್ನು ಎದುರಿಸಲಾಗುತ್ತದೆ ಎಂಬುದನ್ನು ಘೋಷಿಸಲಾಗುವುದು ಎಂದರು.

ಆದರೆ, ನಾಯಕತ್ವದಲ್ಲಿ ಗೊಂದಲ ಇದೆ. ಈ ಗೊಂದಲಕ್ಕೂ ಶೀಘ್ರದಲ್ಲಿಯೇ ತೆರೆ ಎಳೆಯಲಾಗುವುದು ಎಂದರು.
 ಬಿ.ಎಸ್.ಯಡಿಯೂರಪ್ಪ ಅವರಿಗೆ ಸಂಬಂಧಪಟ್ಟ ಯಾವುದೇ ಪ್ರಶ್ನೆಗಳಿಗೆ ಉತ್ತರಿಸಲು ನಿರಾಕರಿಸಿದ ಅವರು, ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡದಂತೆ ರಾಷ್ಟ್ರೀಯ ನಾಯಕರು ತಾಕೀತು ಮಾಡಿದ್ದಾರೆ ಎಂದರು
2004ರಲ್ಲಿ ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದಾಗ ನಡೆದ ಚುನಾವಣೆಯ ಫಲಿತಾಂಶ ಏನು ಎಂಬುದು ಜನತೆಗೆ ಗೊತ್ತಿದೆ. ಎಸ್.ಎಂ.ಕೃಷ್ಣ ಅವರ ರಾಜ್ಯ ರಾಜಕಾರಣಕ್ಕೆ ಬಂದಿದ್ದರೂ ಯಾವುದೇ ಪರಿಣಾಮ ಆಗುವುದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ತಾವು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ. ಆದರೆ, ಕೆ.ಎಸ್.ಈಶ್ವರಪ್ಪ ಅವರು ಉಪ ಮುಖ್ಯಮಂತ್ರಿಯಾಗಿರುವ ಹಿನ್ನೆಲೆಯಲ್ಲಿ ತಾತ್ಕಾಲಿಕ ವ್ಯವಸ್ಥೆಯಾಗಿ ಪಕ್ಷದ ಅಧ್ಯಕ್ಷ ನೇಮಕವಾಗಬೇಕು. ಪಕ್ಷದ ರಾಷ್ಟ್ರೀಯ ನಾಯಕತ್ವವೇ ಈ ವಿಷಯದಲ್ಲಿ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಮತ್ತೊಂದು ಪ್ರಶ್ನೆಗೆ ಉತ್ತರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.