ADVERTISEMENT

ಜಲಾಶಯ ನೀರಿನ ಮಟ್ಟ ಗಣನೀಯ ಕುಸಿತ

​ಪ್ರಜಾವಾಣಿ ವಾರ್ತೆ
Published 5 ಜುಲೈ 2012, 19:30 IST
Last Updated 5 ಜುಲೈ 2012, 19:30 IST
ಜಲಾಶಯ ನೀರಿನ ಮಟ್ಟ ಗಣನೀಯ ಕುಸಿತ
ಜಲಾಶಯ ನೀರಿನ ಮಟ್ಟ ಗಣನೀಯ ಕುಸಿತ   

ಬೆಂಗಳೂರು: ವಾಡಿಕೆಯಂತೆ ಮುಂಗಾರು ಮಳೆಯಾಗದ ಕಾರಣ ರಾಜ್ಯದ ಜಲಾಶಯಗಳಲ್ಲಿ ನೀರಿನ ಮಟ್ಟ ಗಣನೀಯವಾಗಿ ಕುಸಿದಿದೆ. ನಾಲ್ಕು ದಶಕಗಳಲ್ಲಿ ನೀರಿನ ಪ್ರಮಾಣ ಇಷ್ಟು ಕಡಿಮೆಯಾಗಿರುವುದು ಇದೇ ಮೊದಲು ಎಂದು ಜಲಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ ಆತಂಕ ವ್ಯಕ್ತಪಡಿಸಿದರು.

ಸರಿಯಾಗಿ ಮಳೆಯಾಗದ ಕಾರಣ ಪ್ರತಿ ವರ್ಷ ಜಲಾಶಯಗಳಲ್ಲಿನ ನೀರಿನ ಮಟ್ಟ ಕಡಿಮೆಯಾಗುತ್ತಲೇ ಇದೆ. ನಾಲ್ಕು ದಶಕಗಳಿಗೆ ಹೋಲಿಸಿದರೆ ಈ ವರ್ಷ ಮುಂಗಾರು ಆರಂಭದಲ್ಲೇ ಮಳೆ ಕಡಿಮೆಯಾಗಿದೆ. ಜಲಾಶಯಗಳಲ್ಲಿ ನೀರಿನ ಸಂಗ್ರಹ ಇಳಿಮುಖವಾಗಿರುವುದು ಆತಂಕದ ಸಂಗತಿ ಎಂದು ಗುರುವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಲಿಂಗನಮಕ್ಕಿ ಜಲಾಶಯದಲ್ಲಿ ನೀರಿನ ಸಂಗ್ರಹ ಕಡಿಮೆ ಇರುವುದರಿಂದ ಕೇವಲ ಒಂದೂವರೆ ತಿಂಗಳು ಮಾತ್ರ ವಿದ್ಯುತ್ ಉತ್ಪಾದನೆ ಮಾಡಬಹುದಾಗಿದೆ. ಇದರಿಂದಾಗಿ ಮುಂದಿನ ದಿನಗಳಲ್ಲಿ ವಿದ್ಯುತ್ ಅಭಾವ ಉಂಟಾಗುವ ಸಾಧ್ಯತೆ ಇದೆ.
 
ಜಲಾಶಯದ ಸುತ್ತಮುತ್ತಲ ಐದು ಕಿ. ಮೀ. ವ್ಯಾಪ್ತಿಯಲ್ಲಿ ಕೊಳವೆ ಬಾವಿ ಕೊರೆದು ಕುಡಿಯುವ ನೀರು ಒದಗಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯು, ಜಲಸಂಪನ್ಮೂಲ ಇಲಾಖೆಗೆ ಸೂಚನೆ ನೀಡಿದೆ. ಇದರಿಂದ ಗ್ರಾಮೀಣ ಭಾಗದ ಜನರಿಗೆ ಕುಡಿಯುವ ನೀರು ಒದಗಿಸಲು ಅನುಕೂಲವಾಗಲಿದೆ. ಆದರೆ ಈ ನೀರನ್ನು ಕೃಷಿ ಚಟುವಟಿಕೆಗಳಿಗೆ ಬಳಸಲು ನಿರ್ಬಂಧ ವಿಧಿಸಲಾಗಿದೆ ಎಂದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.