ADVERTISEMENT

ಜೆಡಿಎಸ್ ಪಟ್ಟಿ: ನಾಲ್ವರು ನಿವೃತ್ತ ಪೊಲೀಸ್ ಅಧಿಕಾರಿಗಳು ಸ್ಪರ್ಧೆ

​ಪ್ರಜಾವಾಣಿ ವಾರ್ತೆ
Published 5 ಏಪ್ರಿಲ್ 2013, 19:59 IST
Last Updated 5 ಏಪ್ರಿಲ್ 2013, 19:59 IST

ಬೆಂಗಳೂರು: ಇಬ್ಬರು ಹಾಲಿ ಸಂಸದರು, ನಾಲ್ವರು ನಿವೃತ್ತ ಪೊಲೀಸ್ ಅಧಿಕಾರಿಗಳು, ಇಬ್ಬರು ಮಹಿಳೆಯರು ಒಳಗೊಂಡಂತೆ 122 ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಜೆಡಿಎಸ್ ಮೊದಲ ಹಂತದಲ್ಲಿ ಬಿಡುಗಡೆ ಮಾಡಿದೆ.

ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಶುಕ್ರವಾರ ಇಲ್ಲಿ ಪಟ್ಟಿ ಬಿಡುಗಡೆ ಮಾಡಿದ್ದು, ಉಳಿದ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಯುಗಾದಿ ವೇಳೆಗೆ ಬಿಡುಗಡೆಯಾಗುವ ಸಾಧ್ಯತೆ ಇದೆ.

ಸಂಸದರಾದ ಎಚ್.ಡಿ.ಕುಮಾರಸ್ವಾಮಿ (ರಾಮನಗರ), ಎನ್.ಚೆಲುವರಾಯಸ್ವಾಮಿ (ನಾಗಮಂಗಲ), ಮಾಜಿ ಸಂಸದ ಬಸನಗೌಡ ಪಾಟೀಲ ಯತ್ನಾಳ್ (ವಿಜಾಪುರ ನಗರ), ಬಿಜೆಪಿ ತೊರೆದು ಜೆಡಿಎಸ್ ಸೇರಿರುವ ಮಾಜಿ ಸಚಿವರಾದ ರಾಜು ಗೌಡ (ಸುರಪುರ), ಸಿ.ಚೆನ್ನಿಗಪ್ಪ (ದೊಡ್ಡಬಳ್ಳಾಪುರ), ಅವರ ಪುತ್ರ ಡಿ.ಸಿ.ಗೌರಿಶಂಕರ್ (ತುಮಕೂರು ಗ್ರಾಮಾಂತರ) ಪಟ್ಟಿಯಲ್ಲಿರುವ ಪ್ರಮುಖ ಅಭ್ಯರ್ಥಿಗಳಾಗಿದ್ದಾರೆ.

ಕುಮಾರಸ್ವಾಮಿ ಅವರ ಪತ್ನಿ ಮತ್ತು ಮಧುಗಿರಿ ಕ್ಷೇತ್ರದ ಹಾಲಿ ಶಾಸಕಿ ಅನಿತಾ ಕುಮಾರಸ್ವಾಮಿ, ಈ ಬಾರಿ ಕ್ಷೇತ್ರ ಬದಲಾಯಿಸಿ ಚನ್ನಪಟ್ಟಣದಲ್ಲಿ ಅದೃಷ್ಟ ಪರೀಕ್ಷೆಗೆ ಹೊರಟಿದ್ದಾರೆ.

ಈಚೆಗಷ್ಟೇ ಬಿಜೆಪಿ ತೊರೆದು ಜೆಡಿಎಸ್ ಸೇರಿದ ಎಚ್.ಎಸ್.ಶಂಕರಲಿಂಗೇಗೌಡ, ಜಿ.ಟಿ.ದೇವೇಗೌಡ, ಡಿ.ಸಿ.ತಮ್ಮಣ್ಣ ಅವರೂ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಕಳೆದ ಬಾರಿ ಕೊರಟಗೆರೆ ಕ್ಷೇತ್ರದಿಂದ ಸ್ಪರ್ಧಿಸಿದ್ದ ಚೆನ್ನಿಗಪ್ಪ ಈ ಸಲ ದೊಡ್ಡಬಳ್ಳಾಪುರದಿಂದ, ದೇವೇಗೌಡ ಅವರು ಹುಣಸೂರು ಬದಲು ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ.

ನಿವೃತ್ತ ಪೊಲೀಸ್ ಅಧಿಕಾರಿಗಳಾದ ಎಂ.ಸಿ.ನಾರಾಯಣಗೌಡ, ಸುಭಾಷ್ ಭರಣಿ, ಅಬ್ದುಲ್ ಅಜೀಂ, ಚೆಲುವರಾಜು ನಾಯ್ಕ ಅವರಿಗೆ ಟಿಕೆಟ್ ನೀಡಲಾಗಿದೆ. ಕೆಜೆಪಿ ತೊರೆದು ಜೆಡಿಎಸ್ ಸೇರಿದ ಪರಿಮಳಾ ನಾಗಪ್ಪ ಅವರು ಹನೂರು ಕ್ಷೇತ್ರದಿಂದಲೇ ಸ್ಪರ್ಧಿಸಲಿದ್ದಾರೆ.

ಈಗ ಪ್ರಕಟವಾಗಿರುವ ಕ್ಷೇತ್ರಗಳಲ್ಲಿ ಹಾಲಿ ಇರುವ ಜೆಡಿಎಸ್ ಶಾಸಕರಿಗೆ ಟಿಕೆಟ್ ನೀಡಲಾಗಿದೆ. ಗುಲ್ಬರ್ಗ ದಕ್ಷಿಣ ಕ್ಷೇತ್ರದ ಹಾಲಿ ಶಾಸಕಿ ಅರುಣಾ ಪಾಟೀಲ ಮನವಿಯಂತೆ ಅವರ ಪುತ್ರ ದತ್ತಾತ್ರೇಯ ಪಾಟೀಲ ಅವರಿಗೆ ಟಿಕೆಟ್ ನೀಡಲಾಗಿದೆ. ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ಮಧು ಬಂಗಾರಪ್ಪ ಸೊರಬದಿಂದ ಕಣಕ್ಕೆ ಇಳಿಯಲಿದ್ದಾರೆ.

ಮೊದಲ ಪಟ್ಟಿಯಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ರೇವಣ್ಣ, ಜೆಡಿಎಸ್ ವಕ್ತಾರ ವೈ.ಎಸ್.ವಿ.ದತ್ತ ಅವರ ಹೆಸರಿಲ್ಲ. ಹಾಸನ ಜಿಲ್ಲೆಯ ಕ್ಷೇತ್ರಗಳ ಪಟ್ಟಿಯನ್ನು ಮೊದಲ ಹಂತದಲ್ಲಿ ಪ್ರಕಟಿಸಿಲ್ಲ. ಕೆಲವು ಕ್ಷೇತ್ರಗಳಲ್ಲಿ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಮನವೊಲಿಸುವ ಪ್ರಯತ್ನ ನಡೆದಿದೆ.

ಜೆಡಿಎಸ್‌ಗೆ: ಬಿಜೆಪಿಗೆ ರಾಜೀನಾಮೆ ನೀಡಿರುವ ಲಿಂಗಸುಗೂರು ಕ್ಷೇತ್ರದ ಮಾಜಿ ಶಾಸಕ ಮಾನಪ್ಪ ವಜ್ಜಲ ಶನಿವಾರ ಅಧಿಕೃತವಾಗಿ ಜೆಡಿಎಸ್ ಸೇರಲಿದ್ದಾರೆ. ಆ ಕ್ಷೇತ್ರದಿಂದ ಸ್ಪರ್ಧಿಸಲು ಜೆಡಿಎಸ್ ಟಿಕೆಟ್ ನೀಡಿದೆ.

ಭವಾನಿ ಸ್ಪರ್ಧೆ?

ಬೇಲೂರು ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ನಾಯಕ ಎಚ್.ಡಿ. ರೇವಣ್ಣ ಅವರ ಪತ್ನಿ ಭವಾನಿ ಅವರು ಕಣಕ್ಕೆ ಇಳಿಯುವ ಸಾಧ್ಯತೆ ಇದೆ.
ಭವಾನಿ ಅವರು ಕಣಕ್ಕೆ ಇಳಿಯಲು ಉತ್ಸುಕರಾಗಿದ್ದಾರೆ. ಆದರೆ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರಿಂದ ಇದಕ್ಕೆ ಪೂರಕ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. ಎಲ್ಲವೂ ಗೌಡರ ಒಪ್ಪಿಗೆ ಅವಲಂಬಿಸಿದೆ ಎಂದು ಗೊತ್ತಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.