ಬೆಂಗಳೂರು (ಪಿಟಿಐ): ಥಣಿಸಂದ್ರ ಗ್ರಾಮದ ಜಮೀನು ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೋಮವಾರ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ಮಂಗಳವಾರ ನಡೆಸಿದ ಹೈಕೋರ್ಟ್ ಲೋಕಾಯುಕ್ತ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದೆ.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಎನ್.ಕೇಶವನಾರಾಯಣ ನೇತೃತ್ವದ ನ್ಯಾಯಪೀಠವು ಲೋಕಾಯುಕ್ತಕ್ಕೆ ನೋಟಿಸ್ ಜಾರಿ ಮಾಡಿ, ವಿಚಾರಣೆಯನ್ನು ಏಪ್ರಿಲ್ 20ಕ್ಕೆ ಮುಂದೂಡಿತು.
ಪ್ರಕರಣದ ಹಿನ್ನೆಲೆ: ಥಣಿಸಂದ್ರ ಗ್ರಾಮದಲ್ಲಿನ 3.08 ಎಕರೆ ಭೂಮಿಯನ್ನು ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಮರಾಜನಗರ ಜಿಲ್ಲೆಯ ಸಂತೆಮರಳ್ಳಿಯ ಮಹದೇವಸ್ವಾಮಿ ಎಂಬುವರು ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು.
ಜನವರಿ 6ರಂದು ದೂರಿನ ವಿಚಾರಣೆ ನಡೆಸಿದ ಲೋಕಾಯುಕ್ತ ವಿಶೇಷ ನ್ಯಾಯಾಲಯ ಬೆಂಗಳೂರು ನಗರ ಲೋಕಾಯುಕ್ತ ಪೊಲೀಸರಿಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಆದೇಶಿಸಿತ್ತು.
ತನಿಖೆ ನಡೆಸಿದ ಲೋಕಾಯುಕ್ತ ಪೊಲೀಸರು ಸೋಮವಾರ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವ ಸಿ.ಚನ್ನಿಗಪ್ಪ, ಭೂಮಿಯ ಮಾಲೀಕರಾದ ಡಾ.ರವಿಪ್ರಕಾಶ್, ಎ.ವಿ.ಶ್ರೀರಾಂ ಮತ್ತಿತರರು ಅಕ್ರಮ ಎಸಗಿದ್ದಾರೆ ಎಂದು ವಿಶೇಷ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು.
ಆರೋಪಪಟ್ಟಿಯ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ತಮ್ಮನ್ನು ಬಂಧಿಸಬಹುದೆಂಬ ಭಯದಿಂದ ಸೋಮವಾರ ಹೈಕೋರ್ಟ್‌ಗೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.