ADVERTISEMENT

ತಮಿಳುನಾಡಿಗೆ ಹರಿದ ಕಾವೇರಿ ನೀರು

ಕೋರ್ಟ್ ಆದೇಶ ಪಾಲಿಸಿದ ಸರ್ಕಾರ

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2012, 20:02 IST
Last Updated 6 ಡಿಸೆಂಬರ್ 2012, 20:02 IST

ಮೈಸೂರು: ತಮಿಳುನಾಡಿಗೆ ತಾತ್ಕಾಲಿಕವಾಗಿ ನಿತ್ಯ 10 ಸಾವಿರ ಕ್ಯೂಸೆಕ್ ಕಾವೇರಿ ನೀರು ಬಿಡಬೇಕು ಎಂಬ ಸುಪ್ರೀಂ ಕೋರ್ಟ್ ನಿರ್ದೇಶನವನ್ನು ರಾಜ್ಯ ಸರ್ಕಾರ ಪಾಲಿಸಿದ್ದು, ಗುರುವಾರ ತಡರಾತ್ರಿ ಸಮೀಪದ ಕೃಷ್ಣರಾಜಸಾಗರ (ಕೆಆರ್‌ಎಸ್) ಜಲಾಶಯದಿಂದ ನೀರು ಹರಿಸಲಾಯಿತು.
ಪ್ಲಸ್ 80 ಅಡಿ ಮಟ್ಟದ ನಾಲ್ಕು ಗೇಟ್‌ಗಳಿಂದ ತಲಾ 2500 ಕ್ಯೂಸೆಕ್ ನೀರು ಹರಿ ಬಿಡಲಾಗಿದೆ ಎಂದು ತಿಳಿದು ಬಂದಿದೆ. ರಾತ್ರಿ 11ರ ಸುಮಾರಿಗೆ ನೀರು ಹರಿಸಲಾಗಿದೆ. ನೀರು ಬಿಡುಗಡೆಗೆ ರೈತರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ನೀರು ಬಿಡುಗಡೆ ವಿಚಾರವನ್ನು ಮಂಡ್ಯದ ಜಿಲ್ಲಾಧಿಕಾರಿ ಹಾಗೂ ನೀರಾವರಿ ಇಲಾಖೆ ಅಧಿಕಾರಿಗಳು ಖಚಿತಪಡಿಸಿಲ್ಲ.

ಕಳೆದ ಬಾರಿ ನೀರು ಬಿಡುಗಡೆಗೆ ಸುಪ್ರೀಂ ಕೋರ್ಟ್ ಆದೇಶ ನೀಡಿದಾಗಲೂ ಮಧ್ಯರಾತ್ರಿ ನೀರು ಹರಿಸಲಾಗಿತ್ತು.ತಮಿಳುನಾಡಿಗೆ ನೀರು ಬಿಡಬಾರದು ಎಂದು ಆಗ್ರಹಿಸಿ ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಮಂಡ್ಯ ಜಿಲ್ಲೆಯ ವಿವಿಧೆಡೆ ರಸ್ತೆ ತಡೆ ನಡೆಸಲಾಯಿತು.

ಇದರಿಂದ ಕೆಲಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು. ಮಂಡ್ಯ, ಮದ್ದೂರು, ಶ್ರೀರಂಗಪಟ್ಟಣ ಸೇರಿದಂತೆ ವಿವಿಧೆಡೆ ರಸ್ತೆ ತಡೆ ನಡೆಸಿ, ಘೋಷಣೆಗಳನ್ನು ಕೂಗಿದರು. ನೀರು ಬಿಡಬಾರದು ಎಂದು ಜಿಲ್ಲಾ ರೈತ ಹಿತರಕ್ಷಣಾ ಸಮಿತಿಯ ನೇತೃತ್ವದಲ್ಲಿ ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಗುರುವಾರ ಅರ್ಧ ಗಂಟೆಗೂ ಹೆಚ್ಚು ಕಾಲ ರಸ್ತೆ ತಡೆ ಮಾಡಲಾಯಿತು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.