ದಾವಣಗೆರೆ: ರಾಜ್ಯದ ದೈಹಿಕ ಶಿಕ್ಷಕರಿಗೆ ವೃಂದ ಮತ್ತು ನೇಮಕಾತಿ ನಿಯಮಗಳನ್ನು ಒಂದು ತಿಂಗಳೊಳಗೆ ಜಾರಿಗೆ ತರುವ ಕುರಿತು ಸರ್ಕಾರ ಚಿಂತನೆ ನಡೆಸಿದೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಡಾ.ಎ.ಎಚ್. ಶಿವಯೋಗಿಸ್ವಾಮಿ ಹೇಳಿದರು.
ನಗರದಲ್ಲಿ ಸೋಮವಾರ ನಡೆದ, ಹಿರಿಯ ಪ್ರಾಥಮಿಕ ಶಾಲೆಗಳ ಮತ್ತು ಪ್ರೌಢಶಾಲೆಗಳ ಜಿಲ್ಲಾಮಟ್ಟದ ಕ್ರೀಡಾಕೂಟ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ವೃಂದ ಮತ್ತು ನೇಮಕಾತಿ ನಿಯಮ ಇಲ್ಲದ ಕಾರಣ ದೈಹಿಕ ಶಿಕ್ಷಕರು ಬಡ್ತಿ, ಇನ್‌ಕ್ರಿಮೆಂಟ್ ಮುಂತಾದ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಈ ಬೇಡಿಕೆಯ ಬಗ್ಗೆ ವೈದ್ಯನಾಥನ್ ಸಮಿತಿ ನೀಡಿರುವ ವರದಿಯನ್ನು ಅನುಷ್ಠಾನಗೊಳಿಸಲು ಸರ್ಕಾರ ಪರಿಶೀಲಿಸುತ್ತಿದೆ ಎಂದು ಮಾಹಿತಿ ನೀಡಿದರು.
ಈ ಕುರಿತು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಈಚೆಗೆ, ಕರ್ನಾಟಕ ರಾಜ್ಯ ದೈಹಿಕ ಶಿಕ್ಷಕರ ಸಂಘದ ಪದಾಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ. ಅನುಷ್ಠಾನಕ್ಕೆ ಸಂಬಂಧಿಸಿದ ವರದಿ ಪ್ರಸ್ತುತ ಇಲಾಖೆಯ ಪ್ರಧಾನ ಕಾರ್ಯದರ್ಶಿ ಪರಿಶೀಲನೆಯಲ್ಲಿದೆ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.