ADVERTISEMENT

ನಗರ ಪ್ರದೇಶಗಳ ವಿದ್ಯುತ್ ಪೂರೈಕೆಯಲ್ಲಿ ಸುಧಾರಣೆ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2011, 19:30 IST
Last Updated 3 ಅಕ್ಟೋಬರ್ 2011, 19:30 IST

ಬೆಂಗಳೂರು: ರಾಜ್ಯದಲ್ಲಿನ ನಗರ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ಸುಧಾರಣೆಯಾಗಿದೆ. ರಾಜಧಾನಿಯೂ ಸೇರಿದಂತೆ ನಗರ-ಪಟ್ಟಣ ಪ್ರದೇಶಗಳಲ್ಲಿ ಅನಿಯಮಿತ ಲೋಡ್‌ಶೆಡ್ಡಿಂಗ್ ರದ್ದುಪಡಿಸಲಾಗಿದ್ದು, ಸರಾಸರಿ 23 ಗಂಟೆ ಕಾಲ ವಿದ್ಯುತ್ ನೀಡಲಾಗುತ್ತಿದೆ.

ಇನ್ನು ಗ್ರಾಮೀಣ ಪ್ರದೇಶಗಳಲ್ಲಿ ತಲಾ ಎಂಟು ಗಂಟೆ ಕಾಲ ತ್ರಿಫೇಸ್ ಮತ್ತು ಸಿಂಗಲ್‌ಫೇಸ್ ವಿದ್ಯುತ್ ಪೂರೈಸಲಾಗುತ್ತಿದೆ. ಕೆಲವೆಡೆ ಮಳೆಯಾಗಿರುವುದರಿಂದ ಬೇಡಿಕೆಯಲ್ಲೂ ಇಳಿಮುಖವಾಗಿದೆ. ಭಾನುವಾರ 135 ದಶಲಕ್ಷ ಯೂನಿಟ್ ವಿದ್ಯುತ್ ಪೂರೈಕೆಯಾಗಿದೆ ಎಂದು ಇಂಧನ ಇಲಾಖೆಯ ಮೂಲಗಳು ತಿಳಿಸಿವೆ.

ಛತ್ತೀಸ್‌ಗಡದಿಂದ 200 ಮೆಗಾವಾಟ್ ವಿದ್ಯುತ್ ಪೂರೈಕೆಯಾಗುತ್ತಿದೆ. ಇದಲ್ಲದೆ ಪವರ್ ಟ್ರೇಡಿಂಗ್ ಕಾರ್ಪೊರೇಷನ್, ವಿದ್ಯುತ್ ವಿನಿಮಯ ಕೇಂದ್ರ, ಲ್ಯಾಂಕೊ ಸೇರಿದಂತೆ ವಿವಿಧೆಡೆಯಿಂದ ವಿದ್ಯುತ್ ಖರೀದಿಸಲಾಗುತ್ತಿದೆ. ಆದರೆ ಬೇಡಿಕೆ ಪ್ರಮಾಣ ಏಕಾಏಕಿ ಕಡಿಮೆಯಾಗಿದೆ.

ಆದರೆ ಖರೀದಿ ಸಂಬಂಧ ಈಗಾಗಲೇ ಒಪ್ಪಂದ ಮಾಡಿಕೊಂಡಿರುವುದರಿಂದ, ಈಗ ನಿಲ್ಲಿಸಲು ಬರುವುದಿಲ್ಲ ಎಂದು ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಿ.ರವಿಕುಮಾರ್ `ಪ್ರಜಾವಾಣಿ~ಗೆ ತಿಳಿಸಿದರು.

ಬಳ್ಳಾರಿ ಶಾಖೋತ್ಪನ್ನ ವಿದ್ಯುತ್ ಸ್ಥಾವರದ ಮೊದಲ ಘಟಕ ಮತ್ತು ರಾಯಚೂರು ಶಾಖೋತ್ಪನ್ನ ವಿದ್ಯುತ್ ಸ್ಥಾವರದ 7ನೇ ಘಟಕ ಪುನರಾರಂಭವಾಗಿರುವ ಹಿನ್ನೆಲೆಯಲ್ಲಿ ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಹೆಚ್ಚಾಗಿದೆ. ಹೀಗಾಗಿ ಜಲವಿದ್ಯುತ್ ಉತ್ಪಾದನೆಯನ್ನು ಕಡಿಮೆ ಮಾಡಲಾಗಿದ್ದು, ಭಾನುವಾರ 37.71 ದಶಲಕ್ಷ ಯೂನಿಟ್ ಮಾತ್ರ ಉತ್ಪಾದಿಸಲಾಗಿದೆ.

ಅಗತ್ಯವಿರುವ ವಿದ್ಯುತ್ ಲಭ್ಯವಾಗುತ್ತಿದ್ದು, ಹಬ್ಬದ ಹಿನ್ನೆಲೆಯಲ್ಲಿ ಬೇಡಿಕೆ ಹೆಚ್ಚಾದರೂ ಸಮಸ್ಯೆಯಾಗುವುದಿಲ್ಲ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.