ADVERTISEMENT

ನಾಳೆಯ ಬಂದ್‌ಗೆ ಸಂಘಟನೆಗಳ ಬೆಂಬಲ

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2012, 19:30 IST
Last Updated 4 ಅಕ್ಟೋಬರ್ 2012, 19:30 IST

ಬೆಂಗಳೂರು: `ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆಯನ್ನು ವಿರೋಧಿಸಿ ಕನ್ನಡ ಒಕ್ಕೂಟ ಶನಿವಾರ (ಅ.6) ಕರೆ ನೀಡಿರುವ ಕರ್ನಾಟಕ ಬಂದ್‌ಗೆ ರಾಜ್ಯದ ಎಲ್ಲ ಕನ್ನಡಪರ ಸಂಘಟನೆಗಳು ಬೆಂಬಲ ಸೂಚಿಸಿವೆ~ ಎಂದು ಒಕ್ಕೂಟದ ಸಂಚಾಲಕ ವಾಟಾಳ್ ನಾಗರಾಜ್ ತಿಳಿಸಿದರು.

ನಗರದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ರಾಜ್ಯ ಸಾರಿಗೆ ಸಂಸ್ಥೆಯ ಕನ್ನಡ ಕ್ರಿಯಾ ಸಮಿತಿ, ರಾಜ್ಯ ಸಾರಿಗೆ ನಿಗಮಗಳ ಕಾರ್ಮಿಕರ ಸಂಘಗಳ ಜಂಟಿ ಸಮಿತಿ, ರಾಜ್ಯ ಲಾರಿ ಮಾಲೀಕರ ಸಂಘ, ವಕೀಲರ ಸಂಘ, ರಾಜ್ಯ ಸರ್ಕಾರಿ ನೌಕರರ ಸಂಘ, ರಾಜ್ಯ ಚಲನಚಿತ್ರ ವಾಣಿಜ್ಯ ಮಂಡಳಿ, ಕನ್ನಡ ಸೇನೆ, ಕರ್ನಾಟಕ ರಕ್ಷಣಾ ವೇದಿಕೆ, ದಲಿತ ಸಂಘರ್ಷ ಸಮಿತಿ ಸೇರಿದಂತೆ 500ಕ್ಕೂ ಹೆಚ್ಚು ಸಂಘಟನೆಗಳು ಬಂದ್‌ಗೆ ಬೆಂಬಲ ವ್ಯಕ್ತಪಡಿಸಿವೆ. ಉತ್ತರ ಕರ್ನಾಟಕ ಭಾಗದಲ್ಲೂ ಬೆಂಬಲ ವ್ಯಕ್ತವಾಗಿದೆ ಎಂದರು.

`ಬಂದ್ ನಂತರ ರಾಜ್ಯದ ವಿವಿಧ ಕಡೆ ಜೈಲ್‌ಭರೋ ಚಳವಳಿ ಹಮ್ಮಿಕೊಳ್ಳಲಾಗುವುದು. ಆನಂತರ ದೆಹಲಿಯಲ್ಲಿ ಧರಣಿ ನಡೆಸುವ ಬಗ್ಗೆಯೂ ಚರ್ಚಿಸಲಾಗಿದೆ  ಎಂದು ತಿಳಿಸಿದರು.

`ಪತ್ರಿಕೆ, ಹಾಲು ವಿತರಣೆ, ಆಸ್ಪತ್ರೆಗಳು, ಔಷಧ ಅಂಗಡಿಗಳ ಸೇವೆಗೆ ಬಂದ್‌ನಿಂದ ಯಾವುದೇ ತೊಂದರೆಯಾಗುವುದಿಲ್ಲ. ಅಗತ್ಯ ತುರ್ತುಸೇವೆಗಳಿಗೆ ಬಂದ್‌ನಿಂದ ಯಾವುದೇ ಅಡ್ಡಿ ಉಂಟಾಗುವುದಿಲ್ಲ~ ಎಂದರು.

`ತಮಿಳುನಾಡಿಗೆ ನಿರಂತರವಾಗಿ  ನೀರು ಬಿಡುತ್ತಿರುವುದರಿಂದ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಕುಡಿಯುವ ನೀರಿನ ಅಭಾವ ಸೃಷ್ಟಿಯಾಗಲಿದೆ. ರಾಜ್ಯ ಸರ್ಕಾರ ಕೂಡಲೇ ನೀರು ಬಿಡುವುದನ್ನು ನಿಲ್ಲಿಸಿ ರಾಜ್ಯದ ಜನತೆಯ ಹಿತಕಾಯಬೇಕು~ ಎಂದರು.

`ರಾಜ್ಯದಿಂದ ಚುನಾಯಿತರಾಗಿರುವ ಎಲ್ಲ ಸಂಸದರೂ ರಾಜೀನಾಮೆ ನೀಡಿ ಹೋರಾಟಕ್ಕೆ ಮುಂದಾಗಬೇಕು. ರಾಜ್ಯಕ್ಕೆ ಅನ್ಯಾಯವಾಗಿರುವ ಬಗ್ಗೆ ವಿವರಣೆ ನೀಡಿ, ತೀರ್ಪನ್ನು ಮರುಪರಿಶೀಲಿಸುವಂತೆ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಬೇಕು. ಇಲ್ಲವೇ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ಸರ್ಕಾರವನ್ನು ವಿಸರ್ಜಿಸಿ ಹೋರಾಟದಲ್ಲಿ ಪಾಲ್ಗೊಳ್ಳಬೇಕು~ ಎಂದೂ ಆಗ್ರಹಿಸಿದರು.

ಶಾಲಾ- ಕಾಲೇಜು ರಜೆ: ಜಿಲ್ಲಾಧಿಕಾರಿ ತೀರ್ಮಾನಕ್ಕೆ

ಬೆಂಗಳೂರು: ಕನ್ನಡಪರ ಸಂಘಟನೆಗಳು ಇದೇ 6ರಂದು `ಕರ್ನಾಟಕ ಬಂದ್~ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ಆಧರಿಸಿ ಶಾಲಾ - ಕಾಲೇಜುಗಳಿಗೆ ರಜೆ ನೀಡುವ ಕುರಿತು ಆಯಾ ಜಿಲ್ಲಾಧಿಕಾರಿಗಳು ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.

ಸರ್ಕಾರ ಅಧಿಕೃತವಾಗಿ ರಜೆ ಘೋಷಿಸಿಲ್ಲ. ದಿನದ ಪರಿಸ್ಥಿತಿಯನ್ನು ಆಧರಿಸಿ ಸ್ಥಳೀಯ ತೀರ್ಮಾನ ತೆಗೆದುಕೊಳ್ಳುವ ಅಧಿಕಾರವನ್ನು ಅಧಿಕಾರಿಗಳಿಗೆ ನೀಡಲಾಗಿದೆ ಎಂದು ಗುರುವಾರ ಇಲ್ಲಿ ಸುದ್ದಿಗಾರರಿಗೆ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.