ADVERTISEMENT

ನಿಯಮ ಉಲ್ಲಂಘಿಸಿದರೆ ಕ್ರಮ

​ಪ್ರಜಾವಾಣಿ ವಾರ್ತೆ
Published 20 ಜೂನ್ 2011, 19:30 IST
Last Updated 20 ಜೂನ್ 2011, 19:30 IST

ಬೆಂಗಳೂರು: ಮಲ ಹೊರುವವರ ರಕ್ಷಣೆಗಾಗಿ ಇರುವ ಕಾಯ್ದೆಯನ್ನು ಉಲ್ಲಂಘಿಸಿ ಕಾರ್ಮಿಕರನ್ನು ದುಡಿಸಿಕೊಳ್ಳುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ರಾಜ್ಯ ಸರ್ಕಾರಕ್ಕೆ ಆದೇಶಿಸುವಂತೆ ರಾಜ್ಯ ಕಾನೂನು ಸೇವಾ ಪ್ರಾಧಿಕಾರವು ಹೈಕೋರ್ಟ್‌ಗೆ ಸೋಮವಾರ ಮನವಿ ಮಾಡಿಕೊಂಡಿದೆ.

`ತಲೆಯ ಮೇಲೆ ಮಲ ಹೊರುವ ಪದ್ಧತಿ~ ಮತ್ತು ಯಂತ್ರಗಳ ಸಹಾಯವಿಲ್ಲದೇ ಒಳಚರಂಡಿ ಶುಚಿಗೊಳಿಸುವುದರ ವಿರುದ್ಧ ಹಿರಿಯ ವಕೀಲ ಆರ್.ಎನ್.ನರಸಿಂಹಮೂರ್ತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಗೆ ಸಂಬಂಧಿಸಿದಂತೆ ಪ್ರಾಧಿಕಾರವು ಕೆಲವೊಂದು ಶಿಫಾರಸುಗಳನ್ನು ಮಾಡಿ ಕೋರ್ಟ್ ಮುಂದಿಟ್ಟಿದೆ.

ಈ ಸಮಸ್ಯೆಯನ್ನು ನಿವಾರಿಸುವ ಸಂಬಂಧ ವಿಚಾರಣೆ ನಡೆಸಿ ವರದಿ ನೀಡುವಂತೆ ಕೋರ್ಟ್ ಈ ಹಿಂದೆ ನೀಡಿದ್ದ ಆದೇಶದ ಮೇರೆಗೆ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿಶ್ವನಾಥ ಅಂಗಡಿ ಅವರು ಈ ಶಿಫಾರಸುಗಳನ್ನು ಮುಖ್ಯ ನ್ಯಾಯಮೂರ್ತಿ ಜೆ.ಎಸ್.ಕೇಹರ್ ನೇತೃತ್ವದ ವಿಭಾಗೀಯ ಪೀಠದ ಮುಂದಿಟ್ಟರು.

ಪ್ರಾಧಿಕಾರ ಮಾಡಿರುವ ಶಿಫಾರಸುಗಳು: ಗುತ್ತಿಗೆ ಆಧಾರದ ಮೇಲೆ ಈ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳುವ ಬದಲು ಅವರ ನೇಮಕಾತಿಯನ್ನು ಕಾಯಂ ಮಾಡಿಕೊಳ್ಳುವ ಸಂಬಂಧ ನಿರ್ದೇಶನ ನೀಡಬೇಕು. ಸಿಬ್ಬಂದಿಯನ್ನು ಹೊರಗುತ್ತಿಗೆಗೆ ನೀಡುವುದು ಇತ್ಯಾದಿ ಕ್ರಮ ತೊಲಗಿಸುವಂತೆ ಸರ್ಕಾರಕ್ಕೆ ತಿಳಿಸಬೇಕು ಎಂದು ಪ್ರಾಧಿಕಾರ ತಿಳಿಸಿದೆ.

ಅಂತೆಯೇ, ಒಳಚರಂಡಿ ಶುಚಿಗೊಳಿಸುವವರ ರಕ್ಷಣೆಗೆ ಸರಿಯಾದ ಸಲಕರಣೆ ಒದಗಿಸುವುದು, ಸಲಕರಣೆ ಖರೀದಿಸಲು ಸಂಬಂಧಿತ ಇಲಾಖೆಗಳಿಗೆ ಸಾಕಷ್ಟು ಹಣ ಬಿಡುಗಡೆ ಮಾಡುವುದು, ಈ ಸಿಬ್ಬಂದಿಯ ಆರೋಗ್ಯ ತಪಾಸಣೆಯನ್ನು ಕನಿಷ್ಠ ಆರು ತಿಂಗಳಿಗೊಮ್ಮೆ ನಡೆಸುವುದು, ಬೆಂಗಳೂರು, ರಾಯಚೂರು, ಗುಲ್ಬರ್ಗ, ಬಳ್ಳಾರಿ ಮುಂತಾದ ಜಿಲ್ಲೆಗಳಲ್ಲಿ ಜನಸಂಖ್ಯೆ 20 ಲಕ್ಷಕ್ಕೂ ಅಧಿಕವಿದ್ದು, ಇಂತಹ ಜಿಲ್ಲೆಗಳಲ್ಲಿ ಶೇ 100ರಷ್ಟು ಒಳಚರಂಡಿ ವ್ಯವಸ್ಥೆ ಕಡ್ಡಾಯ ಮಾಡುವುದು, ಜನಸಾಂದ್ರತೆ ಹೆಚ್ಚಾಗಿ ಇರುವ ಪ್ರದೇಶಗಳಲ್ಲಿ ಮ್ಯಾನ್‌ಹೋಲ್‌ಗಳನ್ನು ಸೀಲು ಮಾಡಲು ಸಂಬಂಧಿತ ಇಲಾಖೆಗೆ ಆದೇಶಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದೂ ತಿಳಿಸಲಾಗಿದೆ.

ಈ ಶಿಫಾರಸುಗಳ ಬಗ್ಗೆ ನ್ಯಾಯಮೂರ್ತಿಗಳು ಸಂಬಂಧಿತ ಅಧಿಕಾರಿಗಳ ಗಮನ ಸೆಳೆಯಬಯಸಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಹಾಗೂ ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಗಳ ಅಧ್ಯಕ್ಷರು ಜುಲೈ 11ರಂದು ಹಾಜರು ಇರುವಂತೆ ಅವರು ನಿರ್ದೇಶಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.