ADVERTISEMENT

ನೀರಿನ ಸಮಸ್ಯೆ:ಡಿಸಿ, ಸಿಇಒ ಹೊಣೆ

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2012, 19:30 IST
Last Updated 22 ಫೆಬ್ರುವರಿ 2012, 19:30 IST

ಬೆಂಗಳೂರು: ರಾಜ್ಯದ ಯಾವುದೇ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದರೆ ಅದಕ್ಕೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಬುಧವಾರ ಇಲ್ಲಿ ಎಚ್ಚರಿಕೆ ನೀಡಿದರು.

ಗೃಹ ಕಚೇರಿ `ಕೃಷ್ಣಾ~ದಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಮ್ಮುಖದಲ್ಲಿ ಜಿಲ್ಲಾಧಿಕಾರಿಗಳು, ಮುಖ್ಯಕಾರ್ಯನಿರ್ವಹಣಾ ಅಧಿಕಾರಿಗಳೊಂದಿಗೆ ವಿಡಿಯೊ ಸಂವಾದ ನಡೆಸಿದ ಅವರು, ಕುಡಿಯುವ ನೀರಿನ ಸಮಸ್ಯೆಗಳಿಗೆ ಸ್ಪಂದಿಸಲು ತಕ್ಷಣ ಮೂರು ತಿಂಗಳ ಕ್ರಿಯಾ ಯೋಜನೆ ರೂಪಿಸುವಂತೆ ಸೂಚಿಸಿದರು.

ಅಧಿಕಾರಿಗಳು ಉದಾಸೀನ, ನಿರ್ಲಕ್ಷ್ಯ ಮಾಡದೆ ಕುಡಿಯುವ ನೀರಿನ ಬಗ್ಗೆ ದೂರುಗಳು ಬಂದಾಗ ತಕ್ಷಣ ಸ್ಪಂದಿಸಬೇಕು. ಪತ್ರಿಕೆಗಳಲ್ಲಿ ನೀರಿನ ಸಮಸ್ಯೆ ಬಗ್ಗೆ ವರದಿಯಾದರೆ, ಆ ಬಗ್ಗೆಯೂ ಗಮನಹರಿಸಬೇಕು. ಇಲ್ಲದಿದ್ದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಮಾರ್ಚ್, ಏಪ್ರಿಲ್‌ನಲ್ಲಿ ಸಮಸ್ಯೆ ಇಲ್ಲದಂತೆ ನೋಡಿಕೊಳ್ಳಬೇಕು. ಯಾವ ಯಾವ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಬಹುದು, ಎಷ್ಟು ಜನವಸತಿಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಬೇಕಾಗುತ್ತದೆ ಎಂಬ ಬಗ್ಗೆ ಕ್ರಿಯಾ ಯೋಜನೆ ರೂಪಿಸಿ, ಅದಕ್ಕೆ ಅನುಗುಣವಾಗಿ ಕಾರ್ಯೋನ್ಮುಖರಾಗಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಕುಡಿಯುವ ನೀರಿನ ಯೋಜನೆಗಳಿಗೆ ಹಣದ ಸಮಸ್ಯೆ ಇಲ್ಲ, ಎಷ್ಟು ಹಣ ಬೇಕಾದರೂ ನೀಡಲಾಗುವುದು. ಅಲ್ಲದೆ ಪ್ರಕೃತಿ ವಿಕೋಪ ನಿಧಿಯ ಹಣವನ್ನು ಕುಡಿಯುವ ನೀರಿನ ಕಾಮಗಾರಿಗಳಿಗೆ ಬಳಸಿಕೊಳ್ಳಲು ಅನುಮತಿ ನೀಡಲಾಗಿದೆ. ಶಾಸಕರ ಅಧ್ಯಕ್ಷತೆಯ ಕಾರ್ಯಪಡೆಯಲ್ಲಿ ಮಂಜೂರಾದ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಮಾರ್ಚ್ 20ರ ಒಳಗೆ ಮುಗಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಅಂತರ್‌ಜಿಲ್ಲಾ ಮೇವು ಸಾಗಾಣಿಕೆ ಮೇಲೆ ವಿಧಿಸಲಾಗಿದ್ದ ನಿರ್ಬಂಧವನ್ನು ತೆಗೆದು ಹಾಕಲಾಗಿದೆ. ಅಲ್ಲದೆ ಮೇವು ಖರೀದಿಗೆ ನಿಗದಿಪಡಿಸಿರುವ ದರ ಪರಿಷ್ಕರಣೆ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ. ಅಗತ್ಯವಿರುವ ಕಡೆ ಗೋಶಾಲೆಗಳನ್ನು ತೆರೆದು ಕುಡಿಯುವ ನೀರು, ಮೇವಿನ ಸಮಸ್ಯೆ ಇಲ್ಲದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ಬರ ಪರಿಹಾರ ಕಾರ್ಯಗಳಿಗೆ ಜಿಲ್ಲಾಧಿಕಾರಿಗಳ ಬಳಿ 132.67 ಕೋಟಿ ರೂಪಾಯಿ ಲಭ್ಯವಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ ಕೊಳವೆ ಬಾವಿಗಳಿಗಾಗಿ 9 ಕೋಟಿ ರೂಪಾಯಿ ನೀಡಿದೆ. ಇದಲ್ಲದೆ ಪ್ರಕೃತಿ ವಿಕೋಪ ನಿಧಿಯಲ್ಲಿ 84.05 ಕೋಟಿ ರೂಪಾಯಿ ಲಭ್ಯವಿದ್ದು ಇದನ್ನು ವಿನಿಯೋಗ ಮಾಡಲು ಅವಕಾಶವಿದೆ ಎಂದರು.

ಕೇಂದ್ರದಿಂದ ರೂ 126 ಕೋಟಿ, ರಾಜ್ಯದಿಂದ ರೂ 46 ಕೋಟಿ ಸೇರಿದಂತೆ ಒಟ್ಟು 169 ಕೋಟಿ ರೂಪಾಯಿ ಹಣ ಬಿಡುಗಡೆಯಾಗಿದೆ. ಕಳೆದ ಡಿಸೆಂಬರ್‌ನಲ್ಲಿ ಬರ ಪರಿಹಾರ ಕಾರ್ಯಗಳಿಗೆ 2600 ಕೋಟಿ ರೂಪಾಯಿ ನೆರವು ನೀಡುವಂತೆ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿತ್ತು. ಮತ್ತೊಮ್ಮೆ ರಾಜ್ಯದ ನಿಯೋಗ ನವದೆಹಲಿಗೆ ತೆರಳಿ ಕೇಂದ್ರಕ್ಕೆ ಮನವಿ ಮಾಡುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಉತ್ತರಿಸಿದರು.

123 ತಾಲ್ಲೂಕುಗಳಲ್ಲಿ ಬರಗಾಲ ಪರಿಸ್ಥಿತಿ ಇದೆ. ಬರ ಪರಿಹಾರ ಕಾರ್ಯಗಳನ್ನು ಸೂಕ್ಷ್ಮವಾಗಿ ಗಮನಿಸಿ, ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು. ಪ್ರತಿ ವರ್ಷ ನೀರಿನ ಸಮಸ್ಯೆ ತಲೆದೋರುವ ಗ್ರಾಮಗಳಲ್ಲಿ ಶಾಶ್ವತ ಪರಿಹಾರಕ್ಕೆ ಕ್ರಿಯಾ ಯೋಜನೆ ರೂಪಿಸಬೇಕು. ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ತ್ವರಿತವಾಗಿ ಅನುಷ್ಠಾನಗೊಳಿಸಬೇಕು ಎಂದು ಸಲಹೆ ಮಾಡಿದರು.

ಮಹಾನಗರ ಪಾಲಿಕೆಗಳ ವ್ಯಾಪ್ತಿಯ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಪಾಲಿಕೆಗಳ ಆಯುಕ್ತರು, ಜಿಲ್ಲಾಧಿಕಾರಿಗಳೊಂದಿಗೆ ಗುರುವಾರ ಪ್ರತ್ಯೇಕವಾಗಿ ವಿಡಿಯೊ ಸಂವಾದ ನಡೆಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಎಸ್.ಸುರೇಶಕುಮಾರ್ ತಿಳಿಸಿದರು.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಬಿಡುಗಡೆಯಾಗಿರುವ ಹಣ ಸಮರ್ಪಕವಾಗಿ ಬಳಕೆಯಾಗಿಲ್ಲ. ಹಲವು ಜಿಲ್ಲೆಗಳಲ್ಲಿ ಶೇ 50ರಷ್ಟೂ ಪ್ರಗತಿಯಾಗಿಲ್ಲ. ಈ ಬಗ್ಗೆ ಗಮನಹರಿಸಿ ಹೆಚ್ಚಿನ ಜನರಿಗೆ ಉದ್ಯೋಗ ನೀಡಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಜಗದೀಶ ಶೆಟ್ಟರ್ ಸೂಚಿಸಿದರು.

ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕೆ.ಜೈರಾಜ್, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಅಶೋಕ್‌ಕುಮಾರ್ ಮನೋಳಿ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎಸ್.ಲಕ್ಷ್ಮಿನಾರಾಯಣ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಅಮಿತಾ ಪ್ರಸಾದ್, ಕಾರ್ಯದರ್ಶಿ ಶಾಲಿನಿ ರಜನೀಶ್, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಕಾರ್ಯದರ್ಶಿ ಬಿ.ಎ.ಹರೀಶ್ ಗೌಡ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.