ADVERTISEMENT

ಪರಿಷತ್ ಚುನಾವಣೆ: 22 ನಾಮಪತ್ರ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2013, 19:59 IST
Last Updated 5 ಆಗಸ್ಟ್ 2013, 19:59 IST

ಬೆಂಗಳೂರು: ಇದೇ 22ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಸೋಮವಾರ 22 ನಾಮಪತ್ರ ಸಲ್ಲಿಕೆಯಾಗಿವೆ.

ಚಿತ್ರದುರ್ಗ: 12 ನಾಮಪತ್ರ ಸಲ್ಲಿಕೆ
ಚಿತ್ರದುರ್ಗ:
ವಿಧಾನಸಭೆಗೆ ಆಯ್ಕೆಯಾಗಿರುವ ಜಿ.ಎಚ್.ತಿಪ್ಪಾರೆಡ್ಡಿ ಅವರು ತೆರವು ಮಾಡಿದ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ನಡೆಯುತ್ತಿರುವ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೋಮವಾರ ಕೊನೆಯ ದಿನವಾಗಿದ್ದು, ಏಳು ಅಭ್ಯರ್ಥಿಗಳು 12 ನಾಮಪತ್ರಗಳನ್ನು ಸಲ್ಲಿಸಿದ್ದಾರೆ.

ಕಾಂಗ್ರೆಸ್‌ನಿಂದ ಎಂ.ಎ.ಸೇತುರಾಮ್, ಎಚ್.ಎ.ಷಣ್ಮುಖಪ್ಪ, ಬಿಜೆಪಿಯಿಂದ ಎಚ್.ಟಿ.ನಾಗರೆಡ್ಡಿ, ಟಿ.ಜಿ.ನರೇಂದ್ರನಾಥ, ಕೆ.ಎಸ್.ನವೀನ್, ಜೆಡಿಎಸ್ ಬೆಂಬಲಿತ ಕೆ.ಸಿ. ವೀರೇಂದ್ರ ಹಾಗೂ ಪಕ್ಷೇತರರಾಗಿ ಜಿ.ರಘು  ನಾಮಪತ್ರ ಸಲ್ಲಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವಿ.ಪಿ.ಇಕ್ಕೇರಿ ತಿಳಿಸಿದ್ದಾರೆ.

ನಾಮಪತ್ರ ಸಲ್ಲಿಕೆ ವೇಳೆ ಐವರಿಗಿಂತ ಹೆಚ್ಚು ಮಂದಿ ಇರಬಾರದು ಎಂಬ ನೀತಿ ಸಂಹಿತೆಯನ್ನು ಕಾಂಗ್ರೆಸ್ ಕಾರ್ಯಕರ್ತರು ಉಲ್ಲಂಘಿಸಿದರು.

ಹೆಚ್ಚಿನ ಸಂಖ್ಯೆಯಿದ್ದ ಕಾರ್ಯಕರ್ತರನ್ನು ಹೊರಗೆ ಹೋಗುವಂತೆ ಚುನಾವಣಾಧಿಕಾರಿ ವಿ.ಪಿ.ಇಕ್ಕೇರಿ ಆದೇಶಿಸಿದರು. ಆದರೆ ಕಾರ್ಯಕರ್ತರು ಆದೇಶ ಪಾಲಿಸಲಿಲ್ಲ.

ಮೈಸೂರು: ಆರು ನಾಮಪತ್ರ
ಮೈಸೂರು:
ಮೈಸೂರು-ಚಾಮರಾಜನಗರ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಸ್ಥಾನಕ್ಕೆ ನಡೆಯುವ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಸೋಮವಾರ ಆಡಳಿತಾರೂಢ ಕಾಂಗ್ರೆಸ್, ಬಿಜೆಪಿ ಮತ್ತು ಕೆಜೆಪಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು.

ಮೈಸೂರು ಜಿಲ್ಲಾ (ಗ್ರಾಮಾಂತರ) ಕಾಂಗ್ರೆಸ್ ಸಮಿತಿ ಅಧ್ಯಕ್ಷ ಆರ್. ಧರ್ಮಸೇನಾ, ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಯಶಸ್ವಿನಿ ಸೋಮಶೇಖರ್, ಕೆಜೆಪಿ ನಗರಾಧ್ಯಕ್ಷ ಯು.ಎಸ್. ಶೇಖರ್ ಹಾಗೂ ಪಕ್ಷೇತರ ಅಭ್ಯರ್ಥಿಗಳಾಗಿ ಗೌಸಿಯನಗರದ ಅಯೂಬ್ ಖಾನ್, ಗೌರಿಶಂಕರನಗರದ ಎಸ್.ಪಿ. ಮಂಜುನಾಥ್ ಉಮೇದುವಾರಿಕೆ ಸಲ್ಲಿಸಿದರು. ಜೆಡಿಎಸ್‌ನಿಂದ ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ.

ಸಜ್ಜನರ, ಶೆಟ್ಟರ್ ನಾಮಪತ್ರ ಸಲ್ಲಿಕೆ
ಧಾರವಾಡ:
ಇದೇ 22ರಂದು ನಡೆಯಲಿರುವ ವಿಧಾನ ಪರಿಷತ್ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಗರಾಜ ಛಬ್ಬಿ, ಬಿಜೆಪಿಯಿಂದ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ತಮ್ಮ ಪ್ರದೀಪ ಶೆಟ್ಟರ್, ಕೆಜೆಪಿಯಿಂದ ವಿಧಾನ ಪರಿಷತ್ ಮಾಜಿ ಸದಸ್ಯ ಶಿವರಾಜ ಸಜ್ಜನರ, ಪಕ್ಷೇತರ ಅಭ್ಯರ್ಥಿ ಬಸವರಾಜ ಹಾದಿ ಸೋಮವಾರ ನಾಮಪತ್ರಗಳನ್ನು ಸಲ್ಲಿಸಿದರು.

ಕಾಂಗ್ರೆಸ್, ಬಿಜೆಪಿ ಹಾಗೂ ಕೆಜೆಪಿ ಅಭ್ಯರ್ಥಿಗಳು ಎರಡು ನಾಮಪತ್ರಗಳನ್ನು ಸಲ್ಲಿಸಿದರೆ, ಪಕ್ಷೇತರ ಅಭ್ಯರ್ಥಿ ಒಂದು ನಾಮಪತ್ರವನ್ನು ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಸಮೀರ್ ಶುಕ್ಲಾ ಅವರಿಗೆ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.