ADVERTISEMENT

ಪರೀಕ್ಷೆ ವೇಳೆ ವಿದ್ಯುತ್ ಕಡಿತ ಇಲ್ಲ- ಶೋಭಾ

​ಪ್ರಜಾವಾಣಿ ವಾರ್ತೆ
Published 13 ಮಾರ್ಚ್ 2012, 19:30 IST
Last Updated 13 ಮಾರ್ಚ್ 2012, 19:30 IST

ನವದೆಹಲಿ: ಶಾಲಾ ಪರೀಕ್ಷೆ ಸಮಯದಲ್ಲಿ ವಿದ್ಯುತ್ ಪೂರೈಕೆ ಕಡಿತ ಮಾಡದಿರಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ರಾಜ್ಯದ ಜಲಾಶಯಗಳಲ್ಲಿ ನೀರಿನ ಸಂಗ್ರಹ ಉತ್ತಮವಾಗಿದ್ದು, ವಿದ್ಯುತ್ ಉತ್ಪಾದನೆಗೆ ಯಾವುದೇ ತೊಂದರೆ ಆಗದ ಹಿನ್ನೆಲೆಯಲ್ಲಿ ಪೂರೈಕೆ ಕಡಿತ ಮಾಡುವುದಿಲ್ಲ ಎಂದು ಇಂಧನ ಸಚಿವೆ ಶೋಭಾ ಕರಂದ್ಲಾಜೆ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ರಾಜ್ಯದ ವಿದ್ಯುತ್ ಪರಿಸ್ಥಿತಿ ಸುಧಾರಿಸುತ್ತಿದೆ. ಬೇಡಿಕೆ ಮತ್ತು ಪೂರೈಕೆ ನಡುವಿನ ಅಂತರ ತುಂಬಿಕೊಳ್ಳಲು ವಿದ್ಯುತ್ ಖರೀದಿಸಲಾಗುತ್ತಿದೆ. ಶಾಲಾ ಪರೀಕ್ಷೆಗಳು ನಡೆಯಲಿರುವ ಏಪ್ರಿಲ್ ತಿಂಗಳಲ್ಲಿ ವಿದ್ಯುತ್ ವ್ಯತ್ಯಯ ಮಾಡುವುದಿಲ್ಲ. ಗ್ರಾಮೀಣ ಪ್ರದೇಶಕ್ಕೆ ಪ್ರತಿನಿತ್ಯ ಆರು ಗಂಟೆ ಮೂರು ಫೇಸ್ ಹಾಗೂ ಉಳಿದ ಸಮಯದಲ್ಲಿ ಒಂದು ಫೇಸ್ ವಿದ್ಯುತ್ ಪೂರೈಸಲಾಗುತ್ತಿದೆ ಎಂದು ಅವರು ವಿವರಿಸಿದರು.

ADVERTISEMENT

ರಾಜ್ಯ 7500 ಮೆ.ವಾ. ವಿದ್ಯುತ್ ಉತ್ಪಾದಿಸುತ್ತಿದೆ. ಕೊರತೆ ಆಗುತ್ತಿರುವ ಸುಮಾರು 1200 ಮೆ.ವಾ ವಿದ್ಯುತ್ ಖರೀದಿ ಮಾಡಲಾಗುತ್ತಿದೆ ಎಂದರು.

ಫೆಬ್ರುವರಿ 25ರಂದು ಕಾರ್ಯಾರಂಭ ಮಾಡಬೇಕಿದ್ದ ಬಳ್ಳಾರಿ ಉಷ್ಣ ವಿದ್ಯುತ್ ಸ್ಥಾವರದ 2ನೇ ಘಟಕವನ್ನು ಮಾರ್ಚ್ 25ರಂದು ಆರಂಭಿಸಲಾಗುತ್ತಿದೆ. ಸಕಾಲಕ್ಕೆ ಕಲ್ಲಿದ್ದಲು ಪೂರೈಕೆ ಆಗದ ಹಿನ್ನೆಲೆಯಲ್ಲಿ ಒಂದು ತಿಂಗಳು ಮುಂದಕ್ಕೆ ಹಾಕಲಾಗಿದೆ. ಅಗತ್ಯ ಕಲ್ಲಿದ್ದಲು ಪೂರೈಸುವ ಭರವಸೆಯನ್ನು ಕಲ್ಲಿದ್ದಲು ಸಚಿವಾಲಯದ ಅಧಿಕಾರಿಗಳು ನೀಡಿದ್ದಾರೆಂದು ಸ್ಪಷ್ಟಪಡಿಸಿದರು.

ಬಳ್ಳಾರಿ 2ನೇ ಘಟಕಕ್ಕೆ ವರ್ಷಕ್ಕೆ 250 ಲಕ್ಷ ಟನ್ ಕಲ್ಲಿದ್ದಲು ಅಗತ್ಯವಿದೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.