ADVERTISEMENT

ಪಿಯು ಉಪನ್ಯಾಸಕರ ನೇಮಕ: ಬಿ.ಇಡಿ ಕಡ್ಡಾಯವಲ್ಲ

​ಪ್ರಜಾವಾಣಿ ವಾರ್ತೆ
Published 8 ಮಾರ್ಚ್ 2012, 19:30 IST
Last Updated 8 ಮಾರ್ಚ್ 2012, 19:30 IST

ಬೆಂಗಳೂರು: ರಾಜ್ಯದಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ನೇಮಕಕ್ಕೆ ಬಿ.ಇಡಿ ಕಡ್ಡಾಯಗೊಳಿಸಿದ್ದನ್ನು ರದ್ದುಪಡಿಸಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಉಪನ್ಯಾಸಕರ ನೇರ ನೇಮಕಕ್ಕೆ ಕಳೆದ ಸೆಪ್ಟೆಂಬರ್‌ನಲ್ಲಿ ರೂಪಿಸಿರುವ ವಿಶೇಷ ನೇಮಕಾತಿ ನಿಯಮಗಳಲ್ಲಿ ಸ್ನಾತಕೋತ್ತರ ಪದವಿ ಜೊತೆಗೆ ಬಿ.ಇಡಿ ವಿದ್ಯಾರ್ಹತೆಯನ್ನು ಕಡ್ಡಾಯಗೊಳಿಸಲಾಗಿತ್ತು.  ಸ್ನಾತಕೋತ್ತರ ಪದವಿಯೊಂದಿಗೆ ಬಿ.ಇಡಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಸಾಕಷ್ಟು ಸಂಖ್ಯೆಯಲ್ಲಿ ಇಲ್ಲದೆ ಇರುವುದರಿಂದ ಹಾಗೂ ಏಕಾಏಕಿ ಬಿ.ಇಡಿ ಕಡ್ಡಾಯ ಮಾಡಿರುವುದರಿಂದ ಸ್ನಾತಕೋತ್ತರ ಪದವೀಧರರಿಗೆ ಅನ್ಯಾಯವಾಗಲಿದೆ ಎಂದು `ಪ್ರಜಾವಾಣಿ~ ವಿಶೇಷ ವರದಿ ಪ್ರಕಟಿಸಿತ್ತು. ಈ ಹಿನ್ನೆಲೆಯಲ್ಲಿ ವಿಶೇಷ ನೇಮಕಾತಿ ನಿಯಮಗಳಿಗೆ ತಿದ್ದುಪಡಿ ತಂದು ಬಿ.ಇಡಿ ವಿದ್ಯಾರ್ಹತೆಯನ್ನು  ಕೈಬಿಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ.
 
ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ 1765 ಉಪನ್ಯಾಸಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಆದಷ್ಟು ಬೇಗ ಅರ್ಜಿ ಆಹ್ವಾನಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ `ಪ್ರಜಾವಾಣಿ~ಗೆ ತಿಳಿಸಿದರು.
ಕಲೆ, ವಿಜ್ಞಾನ, ವಾಣಿಜ್ಯ ಈ ಮೂರು ವಿಭಾಗಗಳ ಸ್ನಾತಕೋತ್ತರ ಪದವೀಧರರಿಗೂ ಈ ತಿದ್ದುಪಡಿ ಅನ್ವಯಿಸಲಿದೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.