ADVERTISEMENT

ಪ್ರಮಾಣ ಸ್ವೀಕಾರಕ್ಕೆ ಅಮೃತ ಗಳಿಗೆ ನಿಗದಿ

​ಪ್ರಜಾವಾಣಿ ವಾರ್ತೆ
Published 22 ಮೇ 2018, 19:24 IST
Last Updated 22 ಮೇ 2018, 19:24 IST
ಎಚ್.ಡಿ.ಕುಮಾರಸ್ವಾಮಿ ಬುಧವಾರ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಇದಕ್ಕಾಗಿ ಮಂಗಳವಾರ ಅಂತಿಮ ಹಂತದ ಸಿದ್ಧತೆಗಳನ್ನು ನಡೆಸಿದ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ, ನಗರ ಪೊಲೀಸ್ ಆಯುಕ್ತ ಟಿ.ಸುನೀಲ್ ಕುಮಾರ್ ಪ್ರಜಾವಾಣಿ ಚಿತ್ರ
ಎಚ್.ಡಿ.ಕುಮಾರಸ್ವಾಮಿ ಬುಧವಾರ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಇದಕ್ಕಾಗಿ ಮಂಗಳವಾರ ಅಂತಿಮ ಹಂತದ ಸಿದ್ಧತೆಗಳನ್ನು ನಡೆಸಿದ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ, ನಗರ ಪೊಲೀಸ್ ಆಯುಕ್ತ ಟಿ.ಸುನೀಲ್ ಕುಮಾರ್ ಪ್ರಜಾವಾಣಿ ಚಿತ್ರ   

ಬೆಂಗಳೂರು: ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಬುಧವಾರ ಸಂಜೆ 4.30ಕ್ಕೆ ಪ್ರಮಾಣ ವಚನ ಸ್ವೀಕರಿಸಲು ವಿಧಾನಸೌಧ ಸಜ್ಜಾಗಿದೆ.

ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ಅವರ ಉಸ್ತುವಾರಿಯಲ್ಲಿ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಅಗತ್ಯವಿರುವ ವ್ಯವಸ್ಥೆ ಮಾಡಲಾಗಿದೆ. ವಿಶಾಲ ವೇದಿಕೆ ಸಿದ್ಧಪಡಿಸಲಾಗಿದೆ. 300 ಗಣ್ಯರು ಕುಳಿತುಕೊಳ್ಳಲು ಆಸನದ ವ್ಯವಸ್ಥೆ ಮಾಡಲಾಗಿದೆ.

ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಪುದುಚೆರಿ ಮುಖ್ಯಮಂತ್ರಿ ನಾರಾಯಣಸ್ವಾಮಿ, ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌, ಪಂಜಾಬ್‌ ಮುಖ್ಯಮಂತ್ರಿ ಅಮರೀಂದರ್‌ ಸಿಂಗ್‌ ಭಾಗವಹಿಸಲಿದ್ದಾರೆ.

ADVERTISEMENT

ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್‌  ಮಂಗಳವಾರ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ, ಶುಭ ಕೋರಿದರು. ನಾಳೆಯ ಕಾರ್ಯಕ್ರಮದಲ್ಲಿ ಅವರು ಹಾಜರಿರುವುದಿಲ್ಲ. ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿಯವರು ಬರುವುದು ಖಚಿತವಾಗಿಲ್ಲ ಎಂದೂ ಮೂಲಗಳು ಹೇಳಿವೆ.

ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಜೆಡಿಎಸ್‌ ಮತ್ತು ಕಾಂಗ್ರೆಸ್‌ ಕಾರ್ಯಕರ್ತರು ಬರುವುದರಿಂದ, ವಿಧಾನಸೌಧದ ಸುತ್ತಮುತ್ತ ಬಿಗಿ ಬಂದೋಬಸ್ತ್‌ ಮಾಡಲಾಗಿದೆ.

ಮುಹೂರ್ತ ನಿಗದಿ: ಅಮೃತ ಗಳಿಗೆಯಲ್ಲಿ ಕುಮಾರಸ್ವಾಮಿ ಮತ್ತು ಜಿ.ಪರಮೇಶ್ವರ ಪ್ರಮಾಣ ವಚನ ಸ್ವೀಕರಿಸುವರು. ದೇವೇಗೌಡರ ಕುಟುಂಬದ ಜ್ಯೋತಿಷಿಗಳ ಸಲಹೆಯಂತೆ ಈ ಮುಹೂರ್ತ ನಿಗದಿ ಮಾಡಲಾಗಿದೆ. ಮೈತ್ರಿ ಸರ್ಕಾರವನ್ನು ಐದು ವರ್ಷಗಳ ಕಾಲ ಸುಭದ್ರವಾಗಿ ಮತ್ತು ಸಮಸ್ಯೆ ಎದುರಾಗದಂತೆ ಮುನ್ನಡೆಸಲು ಈ ಮುಹೂರ್ತವನ್ನು ನಿಗದಿ ಮಾಡಲಾಗಿದೆ ಎಂದು ಮೂಲಗಳು ಹೇಳಿವೆ.

ಪ್ರಮಾಣ ವಚನ ಸ್ವೀಕಾರದ ಬಳಿಕ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಗಣ್ಯರಿಗೆ ಚಹಾ ಕೂಟ ಏರ್ಪಡಿಸಲಾಗಿದೆ. ಬಳಿಕ ಕುಮಾರಸ್ವಾಮಿ ಸಂಪುಟ ಸಭೆ ನಡೆಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.