ADVERTISEMENT

ಬಯಲುಸೀಮೆ ಆರು ಜಿಲ್ಲೆಗಳಿಗೆ ಕುಡಿಯುವ ನೀರು

​ಪ್ರಜಾವಾಣಿ ವಾರ್ತೆ
Published 2 ಫೆಬ್ರುವರಿ 2012, 19:30 IST
Last Updated 2 ಫೆಬ್ರುವರಿ 2012, 19:30 IST

ಬೆಂಗಳೂರು: ನೀರಿನ ಅಭಾವ ಎದುರಿಸುತ್ತಿರುವ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿತ್ರದುರ್ಗ, ರಾಮನಗರ ಜಿಲ್ಲೆಗಳಿಗೆ ಶಾಶ್ವತ ನೀರಾವರಿ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ 3 ಹಂತದ ಯೋಜನೆ ರೂಪಿಸಲು ನಿರ್ಧರಿಸಲಾಗಿದೆ.

 ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರ ಅಧ್ಯಕ್ಷತೆಯಲ್ಲಿ ಗುರುವಾರ ವಿಧಾನಸೌಧದಲ್ಲಿ ನಡೆದ ಆರು ಜಿಲ್ಲೆಗಳ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದ್ದು, ಈ ಸಾಲಿನ ಬಜೆಟ್‌ನಲ್ಲಿ 3 ಹಂತದ ಯೋಜನೆಯನ್ನು ಘೋಷಿಸುವ ಸಾಧ್ಯತೆ ಇದೆ.

ನೀರಿನ ಅಭಾವಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಅಲ್ಪಾವಧಿ, ಮಧ್ಯಮಾವಧಿ ಮತ್ತು ದೀರ್ಘಾವಧಿ ಯೋಜನೆ ರೂಪಿಸಲಾಗುತ್ತದೆ. ಅಲ್ಪಾವಧಿಯಲ್ಲಿ ಜಲಸಂವರ್ಧನೆ, ಜಲಾನಯನ, ಅಂತರ್ಜಲ ವೃದ್ಧಿ ಕಾರ್ಯಕ್ರಮಗಳನ್ನು ಕೈಗೆತ್ತಿಕೊಳ್ಳಲಾಗುತ್ತದೆ.

ಮಧ್ಯಮಾವಧಿಯಲ್ಲಿ ಎತ್ತಿನ ಹೊಳೆ ಯೋಜನೆಯನ್ನು ಹಾಗೂ ದೀರ್ಘಾವಧಿಯಲ್ಲಿ ಪರಮಶಿವಯ್ಯ ವರದಿ ಜಾರಿಗೆ ಯೋಜನೆ ರೂಪಿಸಲಾಗುತ್ತದೆ. ಒಂದು ತಿಂಗಳಲ್ಲಿ ಇದಕ್ಕೆ ಸಂಬಂಧಿಸಿದ ರೂಪುರೇಷೆಗಳನ್ನು ಸಿದ್ಧಪಡಿಸುವ ನಿರೀಕ್ಷೆ ಇದೆ. ಅದಾದ ನಂತರ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆಯಲಾಗುತ್ತದೆ ಎಂದು ಮೂಲ ತಿಳಿಸಿವೆ.

ಸಕಲೇಶಪುರ ಬಳಿಯ ಎತ್ತಿನಹೊಳೆಯಿಂದ 24 ಟಿಎಂಸಿ ನೀರು ಲಭ್ಯವಾಗಲಿದ್ದು, ಇದನ್ನು ಬಳಸಿಕೊಳ್ಳಲು ಮೊದಲ ಹಂತದಲ್ಲಿ ಎತ್ತಿನ ಹೊಳೆ ಯೋಜನೆಯನ್ನು ಜಾರಿಗೊಳಿಸಲಾಗುತ್ತದೆ.

ಯೋಜನೆ ಜಾರಿ ಸಂಬಂಧ ಡಿ.ವಿ.ಸದಾನಂದಗೌಡ, ಕೇಂದ್ರ ಸಚಿವರಾದ ಎಂ.ವೀರಪ್ಪ ಮೊಯಿಲಿ, ಕೆ.ಎಚ್.ಮುನಿಯಪ್ಪ ಅವರನ್ನು ಒಳಗೊಂಡ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗುತ್ತದೆ. ಇದಲ್ಲದೆ ತಾಂತ್ರಿಕ ಸಮಿತಿಯೊಂದನ್ನೂ ರಚಿಸಲಾಗುತ್ತದೆ.

 ಗೊಂದಲ ಬೇಡ: ಪಶ್ಚಿಮಾಭಿಮುಖವಾಗಿ ಹರಿಯುವ ನದಿಗಳ ಹೆಚ್ಚುವರಿ ನೀರನ್ನು ಬಳಸಿಕೊಳ್ಳುವ ಸಂಬಂಧ ಪರಮಶಿವಯ್ಯ ಸಮಿತಿ ವರದಿ ನೀಡಿದೆ. ಇದು ನೇತ್ರಾವತಿ ತಿರುವು ಯೋಜನೆ ಅಲ್ಲ.ಈ ಬಗ್ಗೆ ಅನಗತ್ಯವಾಗಿ ಗೊಂದಲ ಸೃಷ್ಟಿಸುವುದು ಬೇಡ ಎಂದು ಶಾಸಕರು ಮುಖ್ಯಮಂತ್ರಿಗೆ ಮನವರಿಕೆ ಮಾಡಿಕೊಟ್ಟರು. ಇದಕ್ಕೆ ಮುಖ್ಯಮಂತ್ರಿಗಳು ಸಹಮತ ಸೂಚಿಸಿದರು.

 ಎತ್ತಿನಹೊಳೆ ಯೋಜನೆ ಜಾರಿ ಸಂಬಂಧ ಕಳೆದ ಬಜೆಟ್‌ನಲ್ಲಿ ರೂ 200 ಕೋಟಿ ಹಣ ನೀಡಲಾಗಿದೆ. ಅದನ್ನು ಕರ್ನಾಟಕ ನೀರಾವರಿ ನಿಗಮಕ್ಕೆ ವರ್ಗಾಯಿಸಲು ಮತ್ತು ವಿಸ್ತೃತ ಯೋಜನಾ ವರದಿ ತಯಾರಿಸುವಂತೆ ಸೂಚನೆ ನೀಡಲು ನಿರ್ಧರಿಸಲಾಗಿದೆ.

ಕೇಂದ್ರ ಸಚಿವರಾದ ಎಂ.ವೀರಪ್ಪ ಮೊಯಿಲಿ, ಕೆ.ಎಚ್.ಮುನಿಯಪ್ಪ, ರಾಜ್ಯದ ಸಚಿವರಾದ ಬಸವರಾಜ ಬೊಮ್ಮಾಯಿ, ಬಿ.ಎನ್.ಬಚ್ಚೇಗೌಡ, ಸಿ.ಪಿ.ಯೋಗೇಶ್ವರ್, ವರ್ತೂರು ಪ್ರಕಾಶ್, ಶಾಸಕರಾದ ವಿ.ಮುನಿಯಪ್ಪ, ವಿ.ಆರ್.ಸುದರ್ಶನ್, ಡಾ.ಎಂ.ಸಿ.ಸುಧಾಕರ್, ಟಿ.ಬಿ.ಜಯಚಂದ್ರ, ಗೂಳಿಹಟ್ಟಿ ಶೇಖರ್ ಸೇರಿದಂತೆ ಆರು ಜಿಲ್ಲೆಗಳ ವ್ಯಾಪ್ತಿಯ ಸಚಿವರು, ಶಾಸಕರು ಸಭೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.