ADVERTISEMENT

ಬಲವಂತದ ಸಾಲ ವಸೂಲಾತಿ ಬೇಡ

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2012, 19:30 IST
Last Updated 15 ಏಪ್ರಿಲ್ 2012, 19:30 IST

ಶಿವಮೊಗ್ಗ:  ಬರ ಪೀಡಿತ ಪ್ರದೇಶಗಳಲ್ಲಿ ಬಲವಂತದ ಸಾಲ ವಸೂಲಿ ಕ್ರಮ ಅನುಸರಿಸದಂತೆ ಸಂಬಂಧಪಟ್ಟ ಇಲಾಖೆಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ತಿಳಿಸಿದರು.

ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬರ ಪೀಡಿತ ಪ್ರದೇಶಗಳಲ್ಲಿ ಕುಡಿಯುವ ನೀರಿಗಾಗಿ ತುರ್ತಾಗಿ ಹೊಸ ಕೊಳವೆ ಬಾವಿ ತೆರೆಯಲು ಹಾಗೂ ದುರಸ್ತಿ ಕಾರ್ಯಕ್ಕೆ ರೂ 48 ಕೋಟಿ ಬಿಡುಗಡೆ ಮಾಡಲಾಗಿದೆ. ಅಲ್ಲದೆ ಬರ ಪೀಡಿತ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ತಲಾ ರೂ 30 ಲಕ್ಷ ಅನುದಾನ ನೀಡಲಾಗಿದೆ.

ಮತ್ತೆ ಹೆಚ್ಚುವರಿಯಾಗಿ ತಲಾ ರೂ 30 ಲಕ್ಷ ಅನುದಾನ ಬಿಡುಗಡೆ ಮಾಡಲಾಗುವುದು ಎಂದರು.
 ಸಚಿವರ ಮೂರು ತಂಡ ಬರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ವರದಿ ನೀಡಿದೆ. ಹಾಗೆಯೇ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೂಡ ಬರಪೀಡಿತ ಪ್ರದೇಶಗಳ ಪ್ರವಾಸ ನಡೆಸಿ ಸರ್ಕಾರಕ್ಕೆ ವರದಿ ನೀಡಿದ್ದಾರೆ. ಇವುಗಳ ಆಧಾರದ ಮೇಲೆ ಆ ಪ್ರದೇಶಗಳಲ್ಲಿ ಪರಿಹಾರ ಕಾರ್ಯ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

19ರಂದು ಸರ್ವ ಪಕ್ಷ ಸಭೆ: ರಾಜ್ಯದಲ್ಲಿ ಬರ ಸ್ಥಿತಿ ಕುರಿತಂತೆ ಕೇಂದ್ರ ಸರ್ಕಾರದ ಗಮನ ಸೆಳೆಯಲು ನವದೆಹಲಿಗೆ ಸರ್ವಪಕ್ಷಗಳ ನಿಯೋಗ ತೆಗೆದುಕೊಂಡು ಹೋಗುವ ಸಂಬಂಧ ಇದೇ 19 ರಂದು ಬೆಂಗಳೂರಿನಲ್ಲಿ ಸರ್ವಪಕ್ಷಗಳ ಸಭೆ ಕರೆಯಲಾಗಿದೆ. ಸಭೆಯಲ್ಲಿ  ಬರ ಸ್ಥಿತಿ, ಅಡಿಕೆ, ತೊಗರಿ ಹಾಗೂ ರೇಷ್ಮೆ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಲಾಗುತ್ತದೆ. ಅಂದೇ ನವದೆಹಲಿಗೆ ಹೋಗುವ ದಿನಾಂಕವನ್ನೂ ನಿರ್ಧರಿಸಲಾಗುತ್ತದೆ ಎಂದು ಅವರು ವಿವರಿಸಿದರು.

ಬರ ಪರಿಹಾರ ಕಾರ್ಯಕ್ಕೆ ಕೇಂದ್ರ ಸರ್ಕಾರಕ್ಕೆ ರೂ 2,606 ಕೋಟಿ ಅನುದಾನ ಬಿಡುಗಡೆಗೆ ಮನವಿ ಮಾಡಲಾಗಿತ್ತು. ಆದರೆ, ಇದುವರೆಗೂ ಅಲ್ಲಿಂದ ರೂ 80 ಕೋಟಿ ಮಾತ್ರ ಬಂದಿದ್ದು, ಉಳಿದ ಅನುದಾನ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.