ಬಳ್ಳಾರಿ: ಬಳ್ಳಾರಿ ಮೀಸಲು ಲೋಕಸಭಾ ಕ್ಷೇತ್ರದ ಸದಸ್ಯೆ ಜೆ.ಶಾಂತಾ ಅವರ ಸದಸ್ಯತ್ವವನ್ನು ಅಸಿಂಧುಗೊಳಿಸಿದ್ದ ರಾಜ್ಯ ಹೈಕೋರ್ಟ್, ನಾಲ್ಕು ವಾರದ ಒಳಗೆ ಮರು ಮತ ಎಣಿಕೆ ಮಾಡುವಂತೆ ಸೂಚಿಸಿರುವ ಹಿನ್ನೆಲೆಯಲ್ಲಿ, ಜುಲೈ 5ರಂದು ಮತ ಎಣಿಕೆ ನಡೆಯುವ ಸಾಧ್ಯತೆ ಇದೆ.
ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಎ.ಎ. ಬಿಸ್ವಾಸ್, ಜುಲೈ 5ರಂದು ಮರು ಮತ ಎಣಿಕೆಗೆ ಅನುಮತಿ ನೀಡುವಂತೆ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದ್ದಾರೆ. ಒಂದೆರಡು ದಿನಗಳಲ್ಲಿ ಈ ಕುರಿತು ಆಯೋಗ ಸೂಚನೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.
2009ರ ಏಪ್ರಿಲ್‌ನಲ್ಲಿ ನಡೆದಿದ್ದ ಬಳ್ಳಾರಿ ಲೋಕಸಭಾ ಕ್ಷೇತ್ರದ ಚುನಾವಣೆಯ ಮತ ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಪರ ಏಜೆಂಟ್ ಚಂದ್ರಗೌಡ ಸಲ್ಲಿಸಿದ್ದ ದೂರಿನ ವಿಚಾರಣೆ ನಡೆಸಿದ್ದ ಹೈಕೋರ್ಟ್, ಜೂನ್ 11ರಂದು ಈ ಆದೇಶ ನೀಡಿತ್ತು.
ಎಲ್ಲ ಎಲೆಕ್ಟ್ರಾನಿಕ್ ಮತ ಯಂತ್ರಗಳನ್ನು ಜಿಲ್ಲಾ ಖಜಾನೆ ಕಚೇರಿಯಲ್ಲಿ ಬಿಗಿ ಭದ್ರತೆಯಲ್ಲಿ ಇರಿಸಲಾಗಿದೆ. ಇದೀಗ ಮರು ಮತ ಎಣಿಕೆಗೆ ಅಗತ್ಯ ಕ್ರಮಗಳನ್ನೆಲ್ಲ ಕೈಗೊಳ್ಳಲಾಗಿದೆ. ಆಯೋಗದಿಂದ ಅನುಮತಿ ದೊರೆತಲ್ಲಿ ಜುಲೈ 5ರಂದು ಮರು ಎಣಿಕೆ ಮಾಡಲಾಗುವುದು ಎಂದು ಬಿಸ್ವಾಸ್ ತಿಳಿಸಿದ್ದಾರೆ.
ಚುನಾವಣೆಯಲ್ಲಿ ಜೆ.ಶಾಂತಾ ಅವರು ಸಮೀಪದ ಪ್ರತಿಸ್ಫರ್ಧಿ, ಕಾಂಗ್ರೆಸ್‌ನ ಎನ್.ವೈ. ಹನುಮಂತಪ್ಪ ವಿರುದ್ಧ 2,243 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.ಮರು ಮತ ಎಣಿಕೆ ಪ್ರಕ್ರಿಯೆ ಕೈಗೊಳ್ಳುವ ಹಿನ್ನೆಲೆಯಲ್ಲಿ ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಚುನಾವಣಾ ಸಿಬ್ಬಂದಿಯ ಸಭೆ ನಡೆದಿದ್ದು, ಸಭೆ ಮಂಗಳವಾರವೂ ಮುಂದುವರಿಯಲಿದೆ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.