ADVERTISEMENT

ಬಸ್ ನಿಲ್ದಾಣಗಳಲ್ಲಿ ₹ 1ಕ್ಕೆ ಶುದ್ಧ ಕುಡಿಯುವ ನೀರು

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2017, 19:30 IST
Last Updated 14 ಅಕ್ಟೋಬರ್ 2017, 19:30 IST

ಬೆಂಗಳೂರು: ಒಂದು ರೂಪಾಯಿಗೆ ಒಂದು ಲೀಟರ್ ಕುಡಿಯುವ ನೀರು ಒದಗಿಸಲು ರಾಜ್ಯದ ಎಲ್ಲಾ ಬಸ್ ನಿಲ್ದಾಣಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ತೆರೆಯಲಾಗುವುದು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಎಸ್.ಆರ್‌. ಉಮಾಶಂಕರ ತಿಳಿಸಿದರು.

ಮೊದಲ ಹಂತದಲ್ಲಿ ಮಂಡ್ಯ, ನಾಗಮಂಗಲ, ಮಳವಳ್ಳಿ, ಶ್ರೀರಂಗಪಟ್ಟಣ, ಮೇಲುಕೋಟೆ, ಕೆ.ಆರ್. ಪೇಟೆ, ದಾವಣಗೆರೆ, ಹರಪನಹಳ್ಳಿ, ಹರಿಹರ, ಹೊನ್ನಾಳಿ, ಜಗಳೂರು, ಶಿವಮೊಗ್ಗ, ಭದ್ರಾವತಿ, ಹಿರಿಯೂರು, ಪುತ್ತೂರು, ಧರ್ಮಸ್ಥಳ, ಸುಬ್ರಹ್ಮಣ್ಯ ಹಾಗೂ ಕುಂದಾಪುರದಲ್ಲಿ ಘಟಕ ಆರಂಭವಾಗಲಿವೆ ಎಂದು ಅವರು ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದರು.

ಮಾರ್ಚ್ ವೇಳೆಗೆ ರಾಜ್ಯದ ಎಲ್ಲಾ ನಿಲ್ದಾಣಗಳಲ್ಲೂ ಶುದ್ಧ ಕುಡಿಯುವ ನೀರು ದೊರಕಲಿದೆ. ಪ್ರಯಾಣಿಕರು ಒಂದು ರೂಪಾಯಿ ನಾಣ್ಯ ಹಾಕಿ ಒಂದು ಲೀಟರ್ ನೀರು ಪಡೆಯಬಹುದು. ಈ ಯೋಜನೆ ಅನುಷ್ಠಾನಕ್ಕೆ ಭಾರತ್‌ ಪೆಟ್ರೋಲಿಯಂ ಕಾರ್ಪೋರೇಷನ್‌ ಲಿಮಿಟೆಡ್‌ (ಬಿಪಿಸಿಎಲ್‌) ಜೊತೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.

ADVERTISEMENT

ಇದಕ್ಕೂ ಮೊದಲು ಕೇರಳದ ಆಲೆಪ್ಪಿ ಮತ್ತು ಶ್ರೀಹರಿ ಕೋಟಾಗೆ ಡೈಮಂಡ್‌ ಕ್ಲಾಸ್‌ ಬಸ್‌ ಸಂಚಾರಕ್ಕೆ ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್‌ ಮತ್ತು ಸಾರಿಗೆ ಸಚಿವ ಎಚ್‌.ಎಂ. ರೇವಣ್ಣ ಚಾಲನೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.