ADVERTISEMENT

ಬಿಎಸ್‌ವೈ, ಕೃಷ್ಣಯ್ಯ ಶೆಟ್ಟಿ ನ್ಯಾಯಾಂಗ ಬಂಧನ ವಿಸ್ತರಣೆ

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2011, 6:40 IST
Last Updated 22 ಅಕ್ಟೋಬರ್ 2011, 6:40 IST

ಬೆಂಗಳೂರು: ಭೂಹಗರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಲೋಕಾಯುಕ್ತ ವಿಶೇಷ ಕೋರ್ಟ್ ಶನಿವಾರ ನವೆಂಬರ್ 3ರ ವರೆಗೆ ವಿಸ್ತರಿಸಿದೆ.

ಯಡಿಯೂರಪ್ಪ ಹಾಗೂ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಅವರ ನ್ಯಾಯಾಂಗ ಬಂಧನದ ಅವಧಿಯು ಶನಿವಾರ ಅಂತ್ಯಗೊಂಡ ಹಿನ್ನೆಲೆಯಲ್ಲಿ ಇಬ್ಬರನ್ನು ಲೋಕಾಯುಕ್ತ ವಿಶೇಷ ಕೋರ್ಟ್ ಎದುರು ವಿಚಾರಣೆಗೆ ಹಾಜರುಪಡಿಸಬೇಕಾಗಿತ್ತು. ಆದರೆ ಯಡಿಯೂರಪ್ಪ ಅವರು ಅನಾರೋಗ್ಯದ ಕಾರಣ ನೀಡಿ ಗೈರು ಹಾಜರಾದ ಕಾರಣ ಕೃಷ್ಣಯ್ಯ ಶೆಟ್ಟಿ ಅವರನ್ನು ಮಾತ್ರ ಜೈಲು ಅಧಿಕಾರಿಗಳು ಕೋರ್ಟ್‌ಗೆ ಹಾಜರುಪಡಿಸಿದರು.

ಅಲ್ಲದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇತರೆ ಆರೋಪಿಗಳಾಗಿರುವ ಯಡಿಯೂರಪ್ಪ ಅವರ ಪುತ್ರರು, ಅಳಿಯ ಸೇರಿದಂತೆ ಒಂದನೇಯ ಪ್ರಕರಣದ 14 ಆರೋಪಿಗಳು ಹಾಗೂ ಎರಡನೇಯ ಪ್ರಕರಣದ 8 ಆರೋಪಿಗಳು ವಿಚಾರಣೆಗಾಗಿ ಕೋರ್ಟ್‌ಗೆ ಹಾಜರಾಗಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಎನ್.ಕೆ.ಸುಧೀಂದ್ರ ರಾವ್ ಅವರು ಯಡಿಯೂರಪ್ಪ ಹಾಗೂ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಿ ಆದೇಶ ನೀಡಿದರು.

ವಕೀಲರಾದ ಸಿರಾಜಿನ್ ಬಾಷಾ ಅವರು ಸಲ್ಲಿಸಿರುವ ಎರಡು ಮತ್ತು ಮೂರನೇ ಖಾಸಗಿ ದೂರುಗಳಿಗೆ ಸಂಬಂಧಿಸಿದಂತೆ ಅಕ್ಟೋಬರ್ 15 ರಂದು ಯಡಿಯೂರಪ್ಪ ಮತ್ತು ಕೃಷ್ಣಯ್ಯ ಶೆಟ್ಟಿ ಅವರಿಗೆ ಜಾಮೀನು ನೀಡಲು ನಿರಾಕರಿಸಿದ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ (ಲೋಕಾಯುಕ್ತ) ವಿಶೇಷ ನ್ಯಾಯಾಲಯವು ಇಬ್ಬರನ್ನು ಅಕ್ಟೋಬರ್ 22ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ, ಉಳಿದ ಎಲ್ಲ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ನೀಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.