ADVERTISEMENT

ಬಿಎಸ್‌ವೈ ಪ್ರಕರಣ: ಏ.12ಕ್ಕೆ ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 16 ಮಾರ್ಚ್ 2012, 19:30 IST
Last Updated 16 ಮಾರ್ಚ್ 2012, 19:30 IST

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಇತರರ ವಿರುದ್ಧ ವಕೀಲ ಸಿರಾಜಿನ್ ಬಾಷಾ ಸಲ್ಲಿಸಿರುವ ನಾಲ್ಕನೇ ಖಾಸಗಿ ದೂರಿನ ವಿಚಾರಣೆಯನ್ನು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ (ಲೋಕಾಯುಕ್ತ) ವಿಶೇಷ ನ್ಯಾಯಾಲಯ ಏಪ್ರಿಲ್ 12ಕ್ಕೆ ಮುಂದೂಡಿದೆ.

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಆವರಣದಲ್ಲಿರುವ ವಿಶೇಷ ನ್ಯಾಯಾಲಯದಲ್ಲಿ ನ್ಯಾಯಾಧೀಶ ಎನ್.ಕೆ.ಸುಧೀಂದ್ರ ರಾವ್ ಅವರು ಶುಕ್ರವಾರ ಪ್ರಕರಣದ ವಿಚಾರಣೆ ನಡೆಸಿದರು. ಯಡಿಯೂರಪ್ಪ, ಅವರ ಪುತ್ರ ಬಿ.ವೈ. ವಿಜಯೇಂದ್ರ ಮತ್ತಿತರರು ನ್ಯಾಯಾಲಯಕ್ಕೆ ಹಾಜರಾಗಿದ್ದರು.

 ಹೈಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನು ಆದೇಶದ ಪ್ರತಿಯನ್ನು ಸಲ್ಲಿಸಿದ ಅವರು, ನ್ಯಾಯಾಲಯಕ್ಕೆ ಜಾಮೀನು ಮತ್ತು ಭದ್ರತೆ ಒದಗಿಸುವ ಪ್ರಕ್ರಿಯೆ ಪೂರೈಸಿದರು.

ಪ್ರಕರಣದ ಇತರೆ ಆರೋಪಿಗಳಾದ ತ್ರಿಶೂಲ್ ಡೆವಲಪರ್ಸ್‌ನ ಪ್ರಕಾಶ್ ಶೆಟ್ಟಿ ಮತ್ತು ಧವಳಗಿರಿ ಡೆವಲಪರ್ಸ್‌ನ ಷೇರುದಾರ ಬಿ.ಎಸ್.ಅಶೋಕ್‌ಕುಮಾರ್ ಅವರಿಗೆ ವಿಶೇಷ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿತು.

ಗಡುವು ವಿಸ್ತರಣೆ: ಕೈಗಾರಿಕಾ ಸಚಿವ ಮುರುಗೇಶ ಆರ್.ನಿರಾಣಿ ವಿರುದ್ಧ ಉದ್ಯಮಿ ಆಲಂ ಪಾಷಾ ಸಲ್ಲಿಸಿರುವ ಖಾಸಗಿ ದೂರಿನಲ್ಲಿರುವ ಆರೋಪಗಳ ಕುರಿತು ತನಿಖೆ ನಡೆಸಿ ಅಂತಿಮ ವರದಿ ಸಲ್ಲಿಸಲು ಲೋಕಾಯುಕ್ತ ಪೊಲೀಸರಿಗೆ ನೀಡಿದ್ದ ಗಡುವನ್ನು ಏಪ್ರಿಲ್ 7ರವರೆಗೆ ವಿಸ್ತರಿಸಲಾಗಿದೆ. ಲೋಕಾಯುಕ್ತ ಪೊಲೀಸರು ಸಲ್ಲಿಸಿದ ಮನವಿಯನ್ನು ಮಾನ್ಯ ಮಾಡಿದ ನ್ಯಾಯಾಧೀಶರು ಗಡುವು ವಿಸ್ತರಿಸಿ ಶುಕ್ರವಾರ ಆದೇಶ ಹೊರಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.