ADVERTISEMENT

ಬಿಎಸ್‌ವೈ ವಿರುದ್ಧ ದೂರು: ವಿಚಾರಣೆ ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2012, 19:30 IST
Last Updated 18 ಫೆಬ್ರುವರಿ 2012, 19:30 IST

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಇತರರ ವಿರುದ್ಧ ವಕೀಲ ಸಿರಾಜಿನ್ ಬಾಷಾ ಸಲ್ಲಿಸಿರುವ ಎರಡು ಮತ್ತು ಮೂರನೇ ಖಾಸಗಿ ದೂರುಗಳ ವಿಚಾರಣೆಯನ್ನು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ (ಲೋಕಾಯುಕ್ತ) ವಿಶೇಷ ನ್ಯಾಯಾಲಯ ಮಾರ್ಚ್ 5ಕ್ಕೆ ಮುಂದೂಡಿದೆ. ಅಂದಿನಿಂದಲೇ ಎರಡೂ ಪ್ರಕರಣಗಳ ಸಾಕ್ಷಿಗಳ ವಿಚಾರಣೆ ಆರಂಭವಾಗುವ ಸಾಧ್ಯತೆ ಇದೆ.

ಶನಿವಾರ ಬೆಳಿಗ್ಗೆ ವಿಚಾರಣೆ ಆರಂಭವಾದಾಗ ಯಡಿಯೂರಪ್ಪ, ಅವರ ಪುತ್ರ ಹಾಗೂ ಸಂಸದ ಬಿ.ವೈ.ರಾಘವೇಂದ್ರ ಅವರ ಹಾಜರಿಗೆ ವಿನಾಯಿತಿ ಕೋರಿ ವಕೀಲರು ಅರ್ಜಿ ಸಲ್ಲಿಸಿದರು. ಉಳಿದಂತೆ ಎಲ್ಲ ಆರೋಪಿಗಳೂ ವಿಚಾರಣೆಗೆ ಹಾಜರಾಗಿದ್ದರು. ಮೊದಲನೇ ಆರೋಪಿಯೇ ಹಾಜರಿಲ್ಲದ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಮಾ.5ಕ್ಕೆ ಮುಂದೂಡುವುದಾಗಿ ನ್ಯಾಯಾಧೀಶ ಎನ್.ಕೆ.ಸುಧೀಂದ್ರ ರಾವ್ ಪ್ರಕಟಿಸಿದರು.

ಸಾಕ್ಷಿಗಳ ಪಟ್ಟಿಗೆ ಸೂಚನೆ: ಎರಡೂ ದೂರಿಗೆ ಸಂಬಂಧಿಸಿದಂತೆ ಹಲವು ಸಾಕ್ಷಿಗಳು ಮತ್ತು ಸಾಕ್ಷ್ಯಗಳನ್ನು ದೂರುದಾರರು ಉಲ್ಲೇಖಿಸಿದ್ದಾರೆ. ಎಲ್ಲ ಸಾಕ್ಷಿಗಳ ಪಟ್ಟಿಯನ್ನು ಸಿದ್ಧಪಡಿಸಿ ಮಾ.5ರೊಳಗೆ ಸಲ್ಲಿಸುವಂತೆ ಸಿರಾಜಿನ್ ಪರ ವಕೀಲರಿಗೆ ನ್ಯಾಯಾಧೀಶರು ಸೂಚಿಸಿದರು. ನಿಗದಿತ ಅವಧಿಯಲ್ಲಿ ಸಾಕ್ಷಿಗಳ ಪಟ್ಟಿ ನ್ಯಾಯಾಲಯಕ್ಕೆ ಸಲ್ಲಿಕೆಯಾದಲ್ಲಿ ಮುಂದಿನ ವಿಚಾರಣೆ ವೇಳೆಯೇ ಸಾಕ್ಷಿದಾರರ ಪಾಟಿಸವಾಲು ಆರಂಭವಾಗುವ ಸಾಧ್ಯತೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.