ADVERTISEMENT

‘ಸಾಲ ಮನ್ನಾ; ಇದುವರೆಗೆ ಒಂದು ರೂಪಾಯಿಯೂ ಬಿಡುಗಡೆ ಆಗಿಲ್ಲ’

​ಪ್ರಜಾವಾಣಿ ವಾರ್ತೆ
Published 11 ನವೆಂಬರ್ 2018, 6:20 IST
Last Updated 11 ನವೆಂಬರ್ 2018, 6:20 IST
ಬಿ.ಎಸ್‌.ಯಡಿಯೂರಪ್ಪ
ಬಿ.ಎಸ್‌.ಯಡಿಯೂರಪ್ಪ   

ಕಲಬುರ್ಗಿ: ‘ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ರೈತರ ಸಾಲ ಮನ್ನಾ ಮಾಡಿದ್ದೇವೆ ಎಂದು ಹೇಳುತ್ತಾರೆ. ಆದರೆ, ಇದುವರೆಗೆ ಒಂದು ರೂಪಾಯಿಯೂ ಬಿಡುಗಡೆಯಾಗಿಲ್ಲ’ ಎಂದು ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಆರೋಪಿಸಿದರು.

‘2017–18ರಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ರೈತರ ₹50 ಸಾವಿರವರೆಗಿನ ಸಾಲ ಮನ್ನಾ ಮಾಡಲಾಗಿತ್ತು. ಆ ಪೈಕಿ ಇನ್ನೂ ₹547 ಕೋಟಿ ಬಾಕಿ ಇದೆ. 2018–19ರಲ್ಲಿ ₹1 ಲಕ್ಷವರೆಗಿನ ಸಾಲ ಮನ್ನಾ ಮಾಡಲಾಗಿದೆ. ಆದರೆ, ಇದುವರೆಗೆ ಹಣ ಬಿಡುಗಡೆ ಮಾಡಿಲ್ಲ. ರಾಜ್ಯದ ಆರ್ಥಿಕ ಪ್ರಗತಿ ಶೇ 64ರಷ್ಟು ಆಗಬೇಕಾಗಿದ್ದು, ಶೇ 32 ಆಗಿದೆ’ ಎಂದು ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ದೂರಿದರು.

‘ಬಜೆಟ್‌ನಲ್ಲಿ ಘೋಷಿಸಿರುವ ಯೋಜನೆಗಳಿಗೆ ಟೆಂಡರ್ ಪ್ರಕ್ರಿಯೆ ಶುರುವಾಗಿಲ್ಲ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಬಿಡುಗಡೆಯಾಗಿಲ್ಲ. ನಗರಾಭಿವೃದ್ಧಿ ಇಲಾಖೆಯ ಸ್ಮಾರ್ಟ್ ಸಿಟಿ ಯೋಜನೆಗೆ ಕೇಂದ್ರ ಸರ್ಕಾರದಿಂದ ಮಂಜೂರಾಗಿರುವ ಅನುದಾನ ಬಳಕೆಯಾಗಿಲ್ಲ. ಸ್ವಚ್ಛ ಭಾರತ್, ಕೌಶಲ ಅಭಿವೃದ್ಧಿ, ಸಮಾಜ ಕಲ್ಯಾಣ, ಕೈಗಾರಿಕಾ ಕ್ಷೇತ್ರದ ಅಭಿವೃದ್ಧಿ ಶೇ 25ರಷ್ಟು ಮಾತ್ರ ಇದೆ. ಈ ಅಂಕಿ–ಅಂಶಗಳನ್ನು ಮರೆಮಾಚಿ ಕೇಂದ್ರ ಸರ್ಕಾರದ ಬಗ್ಗೆ ಟೀಕೆ ಮಾಡುವುದು ಖಂಡನೀಯ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

‘ಉಪ ಚುನಾವಣೆ ಸೋಲಿನ ಹೊಣೆಯನ್ನು ನಾನೇ ಹೊತ್ತುಕೊಳ್ಳುತ್ತೇನೆ. ನಮಗೆ ಹಿನ್ನಡೆಯಾಗಿರುವುದು ನಿಜ. ಸೋಲಿನ ಬಗ್ಗೆ ಚರ್ಚಿಸಲು ಬೆಂಗಳೂರಿನಲ್ಲಿ ನ.13ರಂದು ಸಭೆ ಹಮ್ಮಿಕೊಂಡಿದ್ದೇವೆ. ರಾಮನಗರದಲ್ಲಿ ಡಿಕೆಶಿ ಸಹೋದರರು ಬಿಜೆಪಿ ಅಭ್ಯರ್ಥಿಯನ್ನು ಖರೀದಿ ಮಾಡಿದರು. ಮಂಡ್ಯದಲ್ಲಿ ನಮ್ಮ ಬಲ ವೃದ್ಧಿಯಾಗಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 22 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುತ್ತೇವೆ. ಅದಕ್ಕಾಗಿ ಈಗಾಗಲೇ ರಾಜ್ಯ ಪ್ರವಾಸ ಆರಂಭಿಸಿದ್ದೇನೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.