ADVERTISEMENT

ಬಿಡಿಸಿಸಿ ಬ್ಯಾಂಕ್ ಅವ್ಯವಹಾರ ನಾಗಮಾರಪಳ್ಳಿ ದೋಷಿ

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2011, 16:50 IST
Last Updated 26 ಫೆಬ್ರುವರಿ 2011, 16:50 IST

ಕುಷ್ಟಗಿ: ಬೀದರ್ ಜಿಲ್ಲಾ ಮಧ್ಯವರ್ತಿ ಬ್ಯಾಂಕ್ ಅವ್ಯವಹಾರ ಪ್ರಕರಣದ ತನಿಖೆ ಪೂರ್ಣಗೊಂಡಿದ್ದು, ಬ್ಯಾಂಕಿನ ಮಾಜಿ ಅಧ್ಯಕ್ಷ ಗುರುಪಾದಪ್ಪ ನಾಗಮಾರಪಳ್ಳಿ ಸೇರಿದಂತೆ ಹಲವು ಜನರಿಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಹೇಳಿದರು.

ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, “ಈ ಅವ್ಯವಹಾರದಲ್ಲಿ ಬ್ಯಾಂಕ್‌ನ ಮಾಜಿ ಅಧ್ಯಕ್ಷ ಗುರುಪಾದಪ್ಪ ನಾಗಮಾರಪಳ್ಳಿ ಹಾಗೂ ಆಡಳಿತ ಮಂಡಳಿಯ ಕೆಲವು ಸದಸ್ಯರು ಲೋಪವೆಸಗಿದ್ದಾರೆ ಎಂಬುದು ಗೊತ್ತಾಗಿದೆ. ಈ ಹಿನ್ನೆಲೆಯಲ್ಲಿ ಲೆಕ್ಕಪತ್ರ ಸರಿಪಡಿಸಲು ಮೂರು ತಿಂಗಳು ಅವಕಾಶ ನೀಡಲಾಗಿದೆ. ಇದಕ್ಕೆ ವಿಫಲವಾದಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು. ತಪ್ಪಿತಸ್ಥರು ಯಾವುದೇ ಪಕ್ಷಕ್ಕೆ ಸೇರಿರಲಿ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವುದು ಖಚಿತ” ಎಂದು ಸ್ಪಷ್ಟಪಡಿಸಿದರು.

“ರಾಜ್ಯದಲ್ಲಿರುವ ಇತರ ಜಿಲ್ಲಾ ಮಧ್ಯವರ್ತಿ ಬ್ಯಾಂಕ್‌ಗಳು, ಸಹಕಾರ ಕ್ಷೇತ್ರದಲ್ಲಿನ ರಾಜ್ಯ ಮಟ್ಟದ ಸಂಸ್ಥೆಗಳಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ಕುರಿತಂ ತನಿಖೆ ಆರಂಭಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ಕಾನೂನು ಚೌಕಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು” ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.