ADVERTISEMENT

ಬಿರುಸುಗೊಂಡ ರಾಜಕೀಯ ಚಟುವಟಿಕೆ

​ಪ್ರಜಾವಾಣಿ ವಾರ್ತೆ
Published 15 ಮೇ 2018, 19:30 IST
Last Updated 15 ಮೇ 2018, 19:30 IST

ಬೆಂಗಳೂರು: ಮೈತ್ರಿ ಸರ್ಕಾರ ರಚನೆ ಹಾಗೂ ಬಿಜೆಪಿ ನೇತೃತ್ವದ ಸರ್ಕಾರ ರಚಿಸುವ ಪ್ರಯತ್ನ ಮುಂದುವರಿದಿರುವ ಬೆನ್ನಲ್ಲೇ ರಾಜಕೀಯ ಚಟುವಟಿಕೆ ಬಿರುಸುಗೊಂಡಿದೆ.

ನಗರದ ಅಶೋಕ ಹೋಟೆಲ್‌ನಲ್ಲಿ ಮಂಗಳವಾರ ತಡರಾತ್ರಿ ಜೆಡಿಎಸ್‌ ವರಿಷ್ಠ ದೇವೇಗೌಡ, ಎಚ್‌.ಡಿ. ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ಮಹತ್ವದ ಸಭೆ ನಡೆಸಿದರು.

ಈ ಸಭೆಯಲ್ಲಿ ಕಾಂಗ್ರೆಸ್‌ನ ಹಿರಿಯ ನಾಯಕರಾದ ಗುಲಾಂ ನಬಿ ಆಜಾದ್‌ ಮತ್ತು ಪಕ್ಷದ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್‌ ಕೂಡ ಭಾಗವಹಿಸಿದ್ದರು. ರಾಜ್ಯದಲ್ಲಿ ಮೈತ್ರಿ ಸರ್ಕಾರದ ರೂಪುರೇಷೆ ಕುರಿತಂತೆ ಸಭೆಯಲ್ಲಿ ಚರ್ಚೆ ನಡೆದಿದೆ.

ADVERTISEMENT

ಸಿದ್ದರಾಮಯ್ಯ ಜೆಡಿಎಸ್‌ ತ್ಯಜಿಸಿದ ಬಳಿಕ ಮೊದಲ ಬಾರಿಗೆ ದೇವೇಗೌಡರ ಜೊತೆ ಮುಖತಃ ರಾಜಕೀಯ ಚರ್ಚೆ ನಡೆಸಿದರು.

ಅಮಿತ್ ಶಾ ನಗರಕ್ಕೆ: ಈ ಮಧ್ಯೆ, ಮಂಗಳವಾರ ರಾತ್ರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನಗರಕ್ಕೆ ದೌಡಾಯಿಸಿದ್ದಾರೆ. ಅವರು ದೇವೇಗೌಡರನ್ನು ಭೇಟಿ ಮಾಡಿ ಮಾತುಕತೆ ನಡೆಸುವ ಸಾಧ್ಯತೆ ಇದೆ ಎಂದು ಗೊತ್ತಾಗಿದೆ.

ಅತಿ ದೊಡ್ಡ ಪಕ್ಷವಾಗಿರುವ ಬಿಜೆಪಿಗೆ ಜೆಡಿಎಸ್ ಬೆಂಬಲ ಕೋರಲಿರುವ ಅವರು, ಜೆಡಿಎಸ್‌ ನಾಯಕರಿಗೆ ಕೇಂದ್ರ ಸಂಪುಟದಲ್ಲಿ ಸ್ಥಾನ ನೀಡುವ ಬಗ್ಗೆಯೂ ‍ಪ್ರಸ್ತಾಪ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಬೆಳಿಗ್ಗೆ ನಡೆಯಲಿದೆ.

ಕಾಂಗ್ರೆಸ್‌ ಸಭೆ ಇಂದು: ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ಸಹ ಬೆಳಿಗ್ಗೆ ಕೆಪಿಸಿಸಿ ಕಚೇರಿಯಲ್ಲಿ ನಡೆಯಲಿದೆ.

ಎಲ್ಲ 78 ಶಾಸಕರಿಗೂ ಬೆಂಗಳೂರಿಗೆ ಬರುವಂತೆ ಸೂಚಿಸಲಾಗಿದೆ. ಸಭೆಯ ಬಳಿಕ ಅವರೆಲ್ಲರನ್ನೂ ರೆಸಾರ್ಟ್‌ಗೆ ಕರೆದುಕೊಂಡು ಹೋಗುವ ಬಗ್ಗೆಯೂ ಚರ್ಚೆ ನಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.