ADVERTISEMENT

ಬೆಂಗಳೂರಿನಲ್ಲಿ ಕಾವೇರಿದ ಪ್ರತಿಭಟನೆಗಳು

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2012, 8:20 IST
Last Updated 5 ಅಕ್ಟೋಬರ್ 2012, 8:20 IST

ಬೆಂಗಳೂರು (ಐಎಎನ್‌ಎಸ್):  ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವುದನ್ನು ವಿರೋಧಿಸಿ ನಗರದಲ್ಲಿ ಶುಕ್ರವಾರ ವಿವಿಧ ಕನ್ನಡ ಪರ ಸಂಘಟನೆಗಳು, ಧಾರ್ಮಿಕ ಮುಖಂಡರು, ಕನ್ನಡ ಚಿತ್ರರಂಗದ ನಟರು, ಹಾಗೂ ವಿವಿಧ ಪಕ್ಷಗಳ ಕಾರ್ಯಕರ್ತರು ಸೇರಿದಂತೆ ಹಲವರು ಪ್ರತಿಭಟನೆ ನಡೆಸಿದ ಪರಿಣಾಮ ನಗರದಾದ್ಯಂತ ಎಲ್ಲೇಡೆ ಕಾವೇರಿ ಕಾವು ಹರಡಿ, ಹಲವೆಡೆ ವಾಹನ ಸವಾರರು ಪರದಾಡುವಂತಾಯಿತು.

ನ್ಯಾಷನಲ್ ಕಾಲೇಜು ಮೈದಾನದಿಂದ ಸ್ವಾತಂತ್ಯ ಉದ್ಯಾನದವರೆಗೂ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದ ಕರ್ನಾಟಕ ರಕ್ಷಣಾ ವೇದಿಕೆಯ ಸಾವಿರಾರು ಕಾರ್ಯಕರ್ತರು ದಾರಿಯುದ್ದಕ್ಕೂ ಕಾವೇರಿ ಪರ ಘೋಷಣೆಗಳನ್ನು ಕೂಗಿದರು.
 
ಕರ್ನಾಟಕ ರಕ್ಷಣಾ ವೇದಿಕೆಯ ಈ ಪ್ರತಿಭಟನೆಯಲ್ಲಿ ವಿವಿಧ ಧಾರ್ಮಿಕ ಗುರುಗಳು ಸೇರಿದಂತೆ ಹಲವು ಚಿತ್ರನಟರು ಸದ್ಯ ರಾಜ್ಯದಲ್ಲಿ ಕಳೆದ 40 ವರ್ಷಗಳಲ್ಲಿ ಕಂಡರಿಯದ ಬರ ಎದುರಾಗಿದ್ದು, ಈ ಅವಧಿಯಲ್ಲಿ ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಎಂ.ಜಿ.ರಸ್ತೆಯ ಮಹಾತ್ಮಾ ಗಾಂಧಿ ಪ್ರತಿಮೆ ಬಳಿ ಪಕ್ಷದ ನೂರಾರು ಕಾರ್ಯಕರ್ತರೊಂದಿಗೆ ಧರಣಿ ಸತ್ಯಾಗ್ರಹ ನಡೆಸಿದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಜಗದೀಶ ಶೆಟ್ಟರ್ ನೇತೃತ್ವದ ಸರ್ಕಾರ ಕಾವೇರಿ ವಿಷಯದಲ್ಲಿ ಕೇಂದ್ರದೊಂದಿಗೆ ಸರಿಯಾದ ರೀತಿಯಲ್ಲಿ ಹೋರಾಟ ನಡೆಸಿಲ್ಲ. ಅಲ್ಲದೇ ಕೇಂದ್ರದಲ್ಲಿರುವ ರಾಜ್ಯದ ಕಾಂಗ್ರೆಸ್ ಸಚಿವರು ಕೂಡ ಈ ವಿಷಯದಲ್ಲಿ ನಿಷ್ಕಾಳಜಿ ತೋರಿದ್ದಾರೆ, ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಬಿಟ್ಟು ಕರ್ನಾಟಕಕ್ಕೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.

ಇನ್ನೊಂದೆಡೆ ಪ್ರತಿಭಟನೆ ನಡೆಸಿದ ಜಾತ್ಯತೀತ ಜನತಾದಳದ ಕಾರ್ಯಕರ್ತರು ಕೂಡಲೇ ಸರ್ಕಾರ ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.