ADVERTISEMENT

ಬೆಳೆ ಸಾಲ ಮನ್ನಾಕ್ಕೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 18 ಜುಲೈ 2012, 19:30 IST
Last Updated 18 ಜುಲೈ 2012, 19:30 IST

ಬೆಂಗಳೂರು: ರಾಜ್ಯದ ಬಹು ಭಾಗದಲ್ಲಿ ಬರ ಪರಿಸ್ಥಿತಿ ಇರುವ ಹಿನ್ನೆಲೆಯಲ್ಲಿ ರೈತರ ಬೆಳೆ ಸಾಲವನ್ನು ಮನ್ನಾ ಮಾಡುವಂತೆ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ಮುಖಂಡರ ನಿಯೋಗ ಬುಧವಾರ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರಿಗೆ ಮನವಿ ಸಲ್ಲಿಸಿದೆ.

ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದ ನಿಯೋಗ ಮುಖ್ಯಮಂತ್ರಿ ಗೃಹ ಕಚೇರಿ `ಕೃಷ್ಣಾ~ದಲ್ಲಿ ಶೆಟ್ಟರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ರೈತರು ಎದುರಿಸುತ್ತಿರುವ ಸಮಸ್ಯೆಗಳು ಕುರಿತು ಅಧಿಕಾರಿಗಳು ಮತ್ತು ರೈತ ಮುಖಂಡರ ಸಭೆ ನಡೆಸಿ ಪರಿಹಾರ ಮಾರ್ಗ ಕಂಡುಹಿಡಿಯಬೇಕು ಎಂದು ನಿಯೋಗ ಮನವಿ ಮಾಡಿತು.

ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದ ಬಳಿಕ ಪತ್ರಕರ್ತರ ಜೊತೆ ಮಾತನಾಡಿದ ಶಾಂತಕುಮಾರ್, `ಬರದಿಂದ ರೈತರು ಸಾಲ ಮರುಪಾವತಿ ಮಾಡಲಾಗದ ಸ್ಥಿತಿ ತಲುಪಿದ್ದಾರೆ. ಈ ಕಾರಣದಿಂದ ಸಾಲ ಮನ್ನಾ ಮಾಡುವಂತೆ ಮುಖ್ಯಮಂತ್ರಿಯವರಿಗೆ ಮನವಿ ಮಾಡಿದ್ದೇವೆ. ಈ ಕುರಿತು ಪರಿಶೀಲಿಸಿ, ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ~ ಎಂದರು.

ಬೆಳೆ ಸಾಲ ಮರುಪಾವತಿಗೆ ಬ್ಯಾಂಕ್‌ಗಳು ನೋಟಿಸ್ ನೀಡುತ್ತಿವೆ. ಸಾಲ ಮರುಪಾವತಿ ಮಾಡದ ರೈತರ ಜಮೀನನ್ನು ಮುಟ್ಟುಗೋಲು ಹಾಕಿಕೊಳ್ಳಲು ದಾವೆಯನ್ನೂ ಹೂಡಲಾಗುತ್ತಿದೆ. ಈ ಕಾರಣದಿಂದ ರೈತರು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ. ತಕ್ಷಣವೇ ಬ್ಯಾಂಕ್‌ಗಳ ಮುಖ್ಯಸ್ಥರ ಸಭೆ ನಡೆಸಿ ಸಾಲ ಮರುಪಾವತಿಗೆ ರೈತರ ಮೇಲೆ ಒತ್ತಡ ಹೇರದಂತೆ ಸೂಚನೆ ನೀಡಲು ಕೋರಲಾಗಿದೆ. ಶೀಘ್ರದಲ್ಲಿ ಬ್ಯಾಂಕ್‌ಗಳ ಮುಖ್ಯಸ್ಥರ ಸಭೆ ಕರೆದು, ಸೂಕ್ತ ನಿರ್ದೇಶನ ನೀಡುವುದಾಗಿ ಮುಖ್ಯಮಂತ್ರಿಯವರು ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.

ರಾಜ್ಯದಲ್ಲಿ ವಿವಿಧ ಸಕ್ಕರೆ ಕಾರ್ಖಾನೆಗಳು ರೈತರಿಗೆ 800 ಕೋಟಿ ರೂಪಾಯಿಗೂ ಹೆಚ್ಚು ಬಾಕಿ ಉಳಿಸಿಕೊಂಡಿವೆ. ಕಬ್ಬಿನ ದರ ನಿಗದಿಯಾಗದ ಕಾರಣ ಕಳೆದ ವರ್ಷದ ಎರಡನೇ ಕಂತಿನ ಹಣವೂ ಪಾವತಿಯಾಗಿಲ್ಲ. ಈ ವರ್ಷ ಮಳೆ ಕೊರತೆ ಇರುವುದರಿಂದ ಇಳುವರಿಯಲ್ಲಿ ಶೇಕಡ 30ರಷ್ಟು ಕಡಿಮೆ ಆಗಿದೆ. ಆದ್ದರಿಂದ ಸಕ್ಕರೆ ಕಾರ್ಖಾನೆಗಳ ಮಾಲೀಕರ ಸಭೆ ನಡೆಸಿ ದರ ನಿಗದಿ ಮಾಡಬೇಕು ಎಂದು ನಿಯೋಗ ಒತ್ತಾಯಿಸಿದೆ.

ಗ್ರಾಮೀಣ ಪ್ರದೇಶದಲ್ಲಿ ಕೃಷಿ ಪಂಪ್‌ಸೆಟ್ಟುಗಳಿಗೆ ದಿನದಲ್ಲಿ ಕನಿಷ್ಠ ಹತ್ತು ಗಂಟೆಗಳ ಕಾಲ `ತ್ರಿ ಫೇಸ್~ ವಿದ್ಯುತ್ ಪೂರೈಕೆ ಮಾಡುವಂತೆಯೂ ನಿಯೋಗ ಆಗ್ರಹಿಸಿದೆ. ಬರಗಾಲ ಎದುರಿಸುತ್ತಿರುವ ಪ್ರದೇಶಗಳಲ್ಲಿ ಬೆಳೆ ವಿಮೆ ಅವಧಿಯನ್ನೂ ವಿಸ್ತರಿಸುವಂತೆ ಮನವಿ ಮಾಡಿದೆ.

ಕಬ್ಬು ಬೆಳೆಗಾರರ ಸಂಘದ ಕಾರ್ಯದರ್ಶಿ ಎನ್.ವಿ.ಗಾಡಿ, ರೈತ ಮುಖಂಡರಾದ ಎಸ್.ಬಿ.ಸಿದ್ನಾಳ್, ವಿ.ಆರ್.ಪಾಟೀಲ, ದೇವಕುಮಾರ್, ಶಿವಕುಮಾರ್, ಸೋಮಶೇಖರ್, ಕೆ.ಜವರಯ್ಯ, ರವಿಶಂಕರ್ ಮತ್ತಿತರರು ನಿಯೋಗದಲ್ಲಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.