ADVERTISEMENT

ಬೋಪಯ್ಯ ವಿರುದ್ಧ ಕಾಂಗ್ರೆಸ್ ದೂರು

​ಪ್ರಜಾವಾಣಿ ವಾರ್ತೆ
Published 3 ಏಪ್ರಿಲ್ 2013, 19:59 IST
Last Updated 3 ಏಪ್ರಿಲ್ 2013, 19:59 IST

ಮಡಿಕೇರಿ: ವಿಧಾನಸಭಾ ಸ್ಪೀಕರ್ ಕೆ.ಜಿ.ಬೋಪಯ್ಯ ಅವರು ದೇವಸ್ಥಾನದಲ್ಲಿ ಚುನಾವಣಾ ಪ್ರಚಾರ ಸಭೆ ನಡೆಸುವ ಮೂಲಕ ಚುನಾವಣಾ ನೀತಿಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿ ಜಿಲ್ಲಾ ಚುನಾವಣಾಧಿಕಾರಿ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಏ.3ರಂದು ಶ್ರೀಮಂಗಲ ಸಮೀಪದ ಕುಮಟೂರು ಗ್ರಾಮದ ಹೇರ್ಮಾಡು ಈಶ್ವರ ದೇವಾಲಯದಲ್ಲಿ ಬಿಜೆಪಿ ಸಭೆ ನಡೆದಿದ್ದು, ಅದರಲ್ಲಿ ಬೋಪಯ್ಯ  ಅವರು ಭಾಗವಹಿಸಿದ್ದರು ಎಂದು ಜಿಲ್ಲಾ ಕಾಂಗ್ರೆಸ್ ಘಟಕದ ವಕ್ತಾರ ಬಿ.ಎಸ್.ತಮ್ಮಯ್ಯ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಕುಟ್ಟದ ವಿಎಸ್‌ಎಸ್‌ಎನ್ ಸಭಾಂಗಣದಲ್ಲಿ ಸಭೆ ನಡೆಸುವುದಾಗಿ ಜಿಲ್ಲಾಡಳಿತದಿಂದ ಅನುಮತಿ ಪಡೆದು, ಶ್ರೀಮಂಗಲ ಬಳಿಯ ಹೇರ್ಮಾಡು ದೇವಸ್ಥಾನದಲ್ಲಿ ಸಭೆ ನಡೆಸಲಾಗಿದೆ. ಕುಟ್ಟ ಹಾಗೂ ಶ್ರೀಮಂಗಲ ನಡುವೆ ಸಾಕಷ್ಟು ಅಂತರವಿದೆ. ಅನುಮತಿ ಇಲ್ಲದೇ ಸಭೆ ನಡೆಸಿದವರ ವಿರುದ್ಧ ಜಿಲ್ಲಾಧಿಕಾರಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಅಡ್ಡಂಡ ಕಾರ್ಯಪ್ಪ ವಿರುದ್ಧ ದೂರು: ಬಿಜೆಪಿ ಸಭೆ, ಸಮಾರಂಭಗಳಲ್ಲಿ ಭಾಗವಹಿಸುತ್ತಿರುವ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅಡ್ಡಂಡ ಸಿ. ಕಾರ್ಯಪ್ಪ ವಿರುದ್ಧ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ಅವರಿಗೆ ದೂರು ನೀಡಲಿದ್ದೇವೆ ಎಂದು ಹೇಳಿದರು.

ಸರ್ಕಾರ ನೇಮಕಾತಿ ಮಾಡಿರುವ ಅಕಾಡೆಮಿ ಹುದ್ದೆಯ ಜವಾಬ್ದಾರಿಗಳನ್ನು ಬಿಟ್ಟು, ಬಿಜೆಪಿ ವಕ್ತಾರರ ರೀತಿಯಲ್ಲಿ ಅಡ್ಡಂಡ ಕಾರ್ಯಪ್ಪ ಅವರು ವರ್ತಿಸುತ್ತಿದ್ದಾರೆ. ವಿರಾಜಪೇಟೆಯಲ್ಲಿ ಕೊಡವ ಜನಾಂಗದವರನ್ನು ಕೆ.ಜಿ.ಬೋಪಯ್ಯ ಪರ ಓಲೈಸುತ್ತಿದ್ದಾರೆ. ಇವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ದೂರು ನೀಡಲಿದ್ದೇವೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.