ADVERTISEMENT

ಭೀಕರ ಅಪಘಾತದಲ್ಲಿ 11 ಸಾವು

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2012, 9:53 IST
Last Updated 4 ಡಿಸೆಂಬರ್ 2012, 9:53 IST
ಭೀಕರ ಅಪಘಾತದಲ್ಲಿ 11 ಸಾವು
ಭೀಕರ ಅಪಘಾತದಲ್ಲಿ 11 ಸಾವು   

ಬೆಂಗಳೂರು: ಹೊಸಕೋಟೆ ತಾಲ್ಲೂಕಿನ ಚಿಂತಾಮಣಿ ರಸ್ತೆಯಲ್ಲಿರುವ ಕೆ.ಸತ್ಯಾವರ ಗ್ರಾಮದ ಬಳಿ ಸೋಮವಾರ ಸಂಜೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಬಸ್ ಮತ್ತು ಮಿನಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 11 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಮೃತರಲ್ಲಿ ನಾಲ್ವರು ಮಹಿಳೆಯರು ಹಾಗೂ ಆರು ಮಂದಿ ಪುರುಷರು ಸೇರಿದ್ದಾರೆ. ನಂದಗುಡಿಯ ದಿಲ್‌ಷಾದ್, ಮಹದೇವ, ಪವಿತ್ರಾ, ಶಿಡ್ಲಘಟ್ಟ ತಾಲ್ಲೂಕಿನ ಲೋಕೇಶ್, ರಾಮಪ್ಪ, ಕೆಂಪಣ್ಣ, ನಾರಾಯಣಸ್ವಾಮಿ, ಕೋಲಾರ ತಾಲ್ಲೂಕಿನ ಕುರುಗಲ್ ಗ್ರಾಮದ ಗೌರಮ್ಮ, ರಾಧಾ ಮತ್ತು ಪುಷ್ಪಾ ಮೃತಪಟ್ಟವರು.

`ಪಿಲ್ಲಗುಂಪೆ ಕೈಗಾರಿಕಾ ಪ್ರದೇಶದಿಂದ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಮಿನಿ ಬಸ್ ಮತ್ತು ಕೆಎಸ್‌ಆರ್‌ಟಿಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಮೃತರು ಮತ್ತು ಗಾಯಾಳುಗಳಲ್ಲಿ ಹೆಚ್ಚಿನವರು ಪಿಲ್ಲಗುಂಪೆ ಕೈಗಾರಿಕಾ ಪ್ರದೇಶದ ಕಾರ್ಖಾನೆಗಳಲ್ಲಿನ ಕಾರ್ಮಿಕರಾಗಿದ್ದಾರೆ. ಗಾಯಾಳುಗಳನ್ನು ಹೊಸಕೋಟೆ ಸರ್ಕಾರಿ ಆಸ್ಪತ್ರೆ, ಬೆಂಗಳೂರು ಹಾಗೂ ಸ್ಥಳೀಯ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ' ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಪ್ರಕಾಶ್ `ಪ್ರಜಾವಾಣಿ'ಗೆ ತಿಳಿಸಿದರು.

ADVERTISEMENT

ಗಾಯಾಳುಗಳಲ್ಲಿ ಮೂವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ನಂದಗುಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.