ADVERTISEMENT

ಭ್ರಷ್ಟಾಚಾರ ತಡೆಗೆ ಕಟ್ಟುನಿಟ್ಟಿನ ಕ್ರಮ: ಶೆಟ್ಟರ್ ಸ್ಪಷ್ಟನೆ

​ಪ್ರಜಾವಾಣಿ ವಾರ್ತೆ
Published 12 ಫೆಬ್ರುವರಿ 2011, 19:30 IST
Last Updated 12 ಫೆಬ್ರುವರಿ 2011, 19:30 IST

ಬೆಂಗಳೂರು: ‘ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯಲ್ಲಿನ ಭ್ರಷ್ಟಾಚಾರ ಮತ್ತು ಅಕ್ರಮವನ್ನು ತಡೆಯುವಲ್ಲಿ ನಾನು ಅಸಹಾಯಕನಾಗಿದ್ದೇನೆಂದು ಎಲ್ಲಿಯೂ ಹೇಳಿಲ್ಲ’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಜಗದೀಶ್ ಶೆಟ್ಟರ್ ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಇದೇ 11ರಂದು ‘ಪ್ರಜಾವಾಣಿ’ಯಲ್ಲಿ ಪ್ರಕಟವಾಗಿದ್ದ ಸಂಪಾದಕೀಯಕ್ಕೆ ಸ್ಪಷ್ಟನೆ ನೀಡಿರುವ ಅವರು ‘ನಾನು ಯಾವುದೇ ಸಂದರ್ಭದಲ್ಲೂ ಈ ರೀತಿ ಹೇಳಿಕೆಯನ್ನಾಗಲಿ ಅಥವಾ ಅಭಿಪ್ರಾಯವನ್ನಾಗಲಿ ವ್ಯಕ್ತಪಡಿಸಿಲ್ಲ’ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

‘ನಾನು ಗ್ರಾಮೀಣಾಭಿವೃದ್ಧಿ ಸಚಿವನಾದ ನಂತರ ರಾಜ್ಯದ ಎಲ್ಲೆಡೆ ಪ್ರವಾಸ ಮಾಡುತ್ತಿದ್ದೇನೆ. ಈ ಯೋಜನೆಯಡಿ ಆಗುತ್ತಿರುವ ಅವ್ಯವಹಾರ ಮತ್ತು ಭ್ರಷ್ಟಾಚಾರವನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದೇನೆ’ ಎಂದು ಅವರು ಪತ್ರದಲ್ಲಿ ವಿವರಿಸಿದ್ದಾರೆ.

ADVERTISEMENT

‘ಓಂಬುಡ್ಸ್‌ಮನ್‌ಗಳ ನೇಮಕ ಪ್ರಗತಿಯಲ್ಲಿದೆ. ಅವ್ಯವಹಾರ ನಡೆದಿದೆ ಎನ್ನಲಾದ 402 ಪ್ರಕರಣಗಳಲ್ಲಿ ಅಧಿಕಾರಿ ಮತ್ತು ನೌಕರರ ವಿರುದ್ಧ ಇಲಾಖಾ ವಿಚಾರಣೆಗೆ ಆದೇಶಿಸಲಾಗಿದೆ. 337 ಮಂದಿ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. 102 ಅಧಿಕಾರಿಗಳು ಮತ್ತು ಚುನಾಯಿತ ಪ್ರತಿನಿಧಿಗಳ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಸೂಚಿಸಿದ್ದೇನೆ’ ಎಂದು ತಿಳಿಸಿದ್ದಾರೆ.

‘ಇಂತಹ ಕಟ್ಟುನಿಟ್ಟಿನ ಕ್ರಮಗಳಿಗೆ ಜನತೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದೂ ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.