ADVERTISEMENT

ಮಂದಗತಿಯಲ್ಲಿ ಮಹಾಮಸ್ತಕಾಭಿಷೇಕ ಕಾಮಗಾರಿ

ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅಸಮಾಧಾನ

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2017, 19:30 IST
Last Updated 22 ಅಕ್ಟೋಬರ್ 2017, 19:30 IST
ಮಂದಗತಿಯಲ್ಲಿ ಮಹಾಮಸ್ತಕಾಭಿಷೇಕ ಕಾಮಗಾರಿ
ಮಂದಗತಿಯಲ್ಲಿ ಮಹಾಮಸ್ತಕಾಭಿಷೇಕ ಕಾಮಗಾರಿ   

ಶ್ರವಣಬೆಳಗೊಳ: ಫೆಬ್ರುವರಿಯಲ್ಲಿ ನಡೆಯುವ ಬಾಹುಬಲಿ ಮಹಾಮಸ್ತಕಾಭಿಷೇಕ ಮಹೋತ್ಸವದ ಅಂಗವಾಗಿ ಕೈಗೊಂಡಿರುವ ಕಾಮಗಾರಿಗಳು ಮಂದಗತಿಯಲ್ಲಿ ಸಾಗುತ್ತಿರುವುದಕ್ಕೆ ಜೈನ ಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅಸಮಾಧಾನ ವ್ಯಕ್ತಪಡಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಶಿಲಾನ್ಯಾಸ ಮಾಡಿರುವ ಪ್ರಾಕೃತ ವಿಶ್ವವಿದ್ಯಾಲಯ, ವಿದ್ಯುತ್‌ ವಿತರಣಾ ಕೇಂದ್ರದ ಕಟ್ಟಡ ನಿರ್ಮಾಣ, ಅಂತರರಾಷ್ಟ್ರೀಯ ದರ್ಜೆಯ ಪ್ರವಾಸಿ ಮಂದಿರ ಕಾಮಗಾರಿಗಳಾದರೂ ಮಹೋತ್ಸವ ಆರಂಭವಾಗುವಷ್ಟರಲ್ಲಿ ಚಾಲನೆ ಪಡೆದುಕೊಳ್ಳಬೇಕು. ಇಲ್ಲದಿದ್ದರೆ ಕೆಟ್ಟ ಹೆಸರು ಬರುತ್ತದೆ ಎಂದು ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಮಹಾಮಸ್ತಕಾಭಿಷೇಕ ಮಹೋತ್ಸವದ ಕಾಮಗಾರಿಗಳು ತ್ವರಿತವಾಗಿ ನಡೆಯುತ್ತಿಲ್ಲ. ಉಪ ನಗರ ನಿರ್ಮಾಣ, ಬಸ್‌ ನಿಲ್ದಾಣ ಮೇಲ್ದರ್ಜೆಗೇರಿಸುವುದು ಸೇರಿದಂತೆ ಇತರೆ ಕಾಮಗಾರಿಗಳು ಆರು ತಿಂಗಳ ಮೊದಲೇ ಪೂರ್ಣಗೊಳ್ಳಬೇಕಿತ್ತು. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಎ.ಮಂಜು ಅವರ ಜತೆಯೂ ಚರ್ಚಿಸಲಾಗಿದೆ. ಕಡಿಮೆ ಅವಧಿ ಇರುವುದರಿಂದ ಯೋಜನೆಗಳು ಬೇಗ ಪೂರ್ಣಗೊಳ್ಳಬೇಕು ಎಂದು ಒತ್ತಾಯಿಸಿದರು.

ADVERTISEMENT

ರಾಷ್ಟ್ರ ಮಟ್ಟದ ಕಾರ್ಯಕ್ರಮಗಳಿಗೆ ಅನುದಾನ ನೀಡುವುದು ಕೇಂದ್ರದ ಕರ್ತವ್ಯ. ಅನುದಾನ ನೀಡುವುದಿಲ್ಲವೆಂದು ಕೇಂದ್ರ ಹಣಕಾಸು ಸಚಿವರು ಹೇಳಿಲ್ಲ. ರಾಜ್ಯ ಸರ್ಕಾರ ಅನುದಾನ ಬಿಡುಗಡೆಗೆ ಕೇಂದ್ರದ ಮೇಲೆ ಒತ್ತಡ ಹೇರುವ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

ಹಣದ ಕೊರತೆಯಾದರೆ ಹೆಚ್ಚುವರಿ ಅನುದಾನ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.