ADVERTISEMENT

ಮಡೆಸ್ನಾನ: 7ರಂದು ಸಭೆ

​ಪ್ರಜಾವಾಣಿ ವಾರ್ತೆ
Published 3 ಜನವರಿ 2012, 19:30 IST
Last Updated 3 ಜನವರಿ 2012, 19:30 IST

ಮೈಸೂರು: ನಿಡುಮಾಮಿಡಿ ಮಹಾಸಂಸ್ಥಾನಮಠ ಮತ್ತು ಮಾನವಧರ್ಮ ಪೀಠದ ನೇತೃತ್ವದಲ್ಲಿ ಮಡೆಸ್ನಾನ ನಿಷೇಧಿಸಲು ಒತ್ತಾಯಿಸಿ ಜ.7 ರಂದು ಬೆಂಗಳೂರಿನ ಕೆಂಪೇಗೌಡ ರಸ್ತೆಯಲ್ಲಿರುವ ಶಿಕ್ಷಕರ ಸದನದಲ್ಲಿ ಪ್ರಗತಿಪರ ಚಿಂತನೆಯ ಮಠಾಧೀಶರ ಸಮಾವೇಶ ನಡೆಯಲಿದೆ.

ಸಮಾವೇಶವನ್ನು ಅಂದು ಬೆಳಿಗ್ಗೆ 11 ಗಂಟೆಗೆ ಗದಗಿನ ತೋಂಟದಾರ್ಯ ಸಿದ್ದಲಿಂಗ ಸ್ವಾಮೀಜಿ ಉದ್ಘಾಟಿಸುವರು. ಆನಂದಪುರಂನ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ, ಇಳಕಲ್‌ನ ಮಹಾಂತ ಸ್ವಾಮೀಜಿ, ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಪ್ರಾಸ್ತಾವಿಕವಾಗಿ ಮಾತನಾಡಲಿದ್ದಾರೆ. ಕೆಂಗೇರಿಯ ಚಂದ್ರಶೇಖರನಾಥ ಸ್ವಾಮೀಜಿ, ನಿರಂಜನಾನಂದಪುರಿ ಸ್ವಾಮೀಜಿ ಸದ್ಭಾವನಾ ನುಡಿಗಳನ್ನು ಆಡಲಿದ್ದು, ನಿಡುಮಾಮಿಡಿ ಮಹಾಸಂಸ್ಥಾನದ ವೀರಭದ್ರಚನ್ನಮಲ್ಲ ಸ್ವಾಮೀಜಿ ಅಧ್ಯಕ್ಷತೆ ವಹಿಸಲಿದ್ದಾರೆ.

ಸಮಾವೇಶದಲ್ಲಿ ರಾಜ್ಯದ ವಿವಿಧ ಸಮುದಾಯದ 25 ಮಂದಿ ಮಠಾಧೀಶರು ಭಾಗವಹಿಸಲಿದ್ದಾರೆ ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ.ಎಸ್.ಶಿವರಾಮು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಸಂವಾದ: ಮಡೆಸ್ನಾನ ವಿಷಯವಾಗಿ ಬಹಿರಂಗ ಚರ್ಚೆಗೆ ಸಿದ್ಧವಿರುವುದಾಗಿ ಉಡುಪಿಯ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಒಪ್ಪಿಕೊಂಡಿದ್ದಾರೆ. ಆದರೆ ಅವರು ಜ. 7 ರ ಸಮಾವೇಶಕ್ಕೆ ಬರುತ್ತಿಲ್ಲ. ಹೀಗಾಗಿ ಜ. 8 ರಂದು ಗಾಂಧಿಭವನದಲ್ಲಿ ಮಧ್ಯಾಹ್ನ 3 ಗಂಟೆಗೆ ಮುಕ್ತ ಸಂವಾದ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ಅವರು  ಹೇಳಿದರು.

ಸಚಿವ ಡಾ.ವಿ.ಎಸ್.ಆಚಾರ್ಯ ಮಡೆಸ್ನಾನವನ್ನು ಸಮರ್ಥಿಸಿಕೊಂಡು ವಿಧಾನಸಭೆ ಮತ್ತು ವಿಧಾನ ಪರಿಷತ್‌ನಲ್ಲಿ ಹೇಳಿಕೆ ನೀಡಿದ್ದಾರೆ. ಅವರು ಜವಾಬ್ದಾರಿಯುತ ಸ್ಥಾನದಲ್ಲಿ ಇದ್ದುಕೊಂಡು ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ.

ಆದ್ದರಿಂದ ಮುಂದಿನ ದಿನಗಳಲ್ಲಿ ಅವರ ಮನೆ ಮುಂದೆ ಧರಣಿ ನಡೆಸಲಾಗುವುದು. ಅಲ್ಲದೇ ಮಡೆಸ್ನಾನ ನಿಷೇಧವನ್ನು ನಿಷೇಧಿಸುವಂತೆ ಆಗ್ರಹಿಸಿ ಸಾಹಿತಿ ಡಾ.ಬರಗೂರು ರಾಮಚಂದ್ರಪ್ಪ ನೇತೃತ್ವದಲ್ಲಿ ಸಾಹಿತಿಗಳ ಸಮಾವೇಶ ನಡೆಸಲಾಗುವುದು. ಮಡೆಸ್ನಾನ ನಿಷೇಧಿಸುವ ತನಕ ನಿರಂತರವಾಗಿ ಹೋರಾಟ ನಡೆಸಲಾಗುವುದು ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.