ADVERTISEMENT

ಮಹಿಳೆ ರಕ್ಷಣೆಗೆ ಹೋದ ಪೊಲೀಸರ ಮೇಲೆ ಕಲ್ಲುತೂರಾಟ

​ಪ್ರಜಾವಾಣಿ ವಾರ್ತೆ
Published 29 ಮೇ 2018, 19:30 IST
Last Updated 29 ಮೇ 2018, 19:30 IST

ಬೆಳಗಾವಿ: ತಾಲ್ಲೂಕಿನ ಬೆಳವಟ್ಟಿ ಗ್ರಾಮದಲ್ಲಿ ಸೋಮವಾರ ತಡರಾತ್ರಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಥಳಿಸುತ್ತಿದ್ದುದ್ದನ್ನು ತಡೆಯಲು ಹೋದ ಪೊಲೀಸರ ಮೇಲೆ ಗ್ರಾಮಸ್ಥರು ಕಲ್ಲು ತೂರಾಟ ನಡೆಸಿದ್ದಾರೆ. ಘಟನೆಯಲ್ಲಿ ಇನ್‌ಸ್ಪೆಕ್ಟರ್‌ ನಿತ್ಯಾನಂದ ಪಂಡಿತ್‌ ಹಾಗೂ ಕಾನ್‌ಸ್ಟೆಬಲ್‌ ಭೀಮಶಿ ಮಾದರ ಗಾಯಗೊಂಡಿದ್ದಾರೆ. ಪೊಲೀಸ್‌ ಜೀಪು ಜಖಂಗೊಂಡಿದೆ.

ಹಲ್ಲೆಗೊಳಗಾದ ರೇಷ್ಮಾ ಅಷ್ಟೇಕರ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಗ್ರಾಮಸ್ಥರ ವಿರೋಧದ ನಡುವೆಯೂ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದರು ಎನ್ನುವುದು ಸ್ಥಳೀಯರ ಆರೋಪ.

‘ವಿಧಾನಸಭೆ ಚುನಾವಣೆಗೂ ಮೊದಲೇ ಮಹಿಳೆಗೆ ಗ್ರಾಮದಲ್ಲಿ ಸಾಮಾಜಿಕ ಬಹಿಷ್ಕಾರ ಹಾಕಿದ್ದರು. ನೀರು ಪಡೆಯುವುದಕ್ಕೂ ಬಿಡುತ್ತಿರಲಿಲ್ಲ. ಈ ವಿಷಯ ಗಮನಕ್ಕೆ ಬಂದಾಗ, ಸಮಸ್ಯೆ ಬಗೆಹರಿಸಿದ್ದೆ. ಅದರ ಮುಂದುವರಿದ ಭಾಗವಾಗಿ ಆಕೆಯನ್ನು ಮರಕ್ಕೆ ಕಟ್ಟಿ ಥಳಿಸಿದ್ದಾರೆ. ಅದನ್ನು ತಡೆಯಲು ಹೋದ ನಮ್ಮತ್ತ ಕಲ್ಲು ತೂರಿದರು. ನಂತರ ಮಹಿಳೆಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದೇವೆ. ಘಟನೆಗೆ ಸಂಬಂಧಿಸಿದಂತೆ 150 ಮಂದಿ ವಿರುದ್ಧ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿದೆ. ಯಾರನ್ನೂ ಬಂಧಿಸಿಲ್ಲ’ ಎಂದು ಇನ್‌ಸ್ಪೆಕ್ಟರ್‌ ನಿತ್ಯಾನಂದ ಪಂಡಿತ್‌ ‘ಪ್ರಜಾವಾಣಿ’ಗೆ ತಿಳಿಸಿದರು.

ADVERTISEMENT

‘ಹಿಂದೆ ಮದ್ಯ ಮಾರುತ್ತಿದ್ದದ್ದು ನಿಜ. ಎರಡು ತಿಂಗಳ ಹಿಂದೆ ನಿಲ್ಲಿಸಿದ್ದೇನೆ. ದಂಡವಾಗಿ ₹ 50 ಸಾವಿರ ಕಟ್ಟಬೇಕು ಎಂದು ಗ್ರಾಮಸ್ಥರು ಪಟ್ಟು ಹಿಡಿದಿದ್ದರು. ಅಷ್ಟೊಂದು ಹಣ ಎಲ್ಲಿಂದ ತರುವುದು ಎಂದು ಪ್ರಶ್ನಿಸಿದ್ದಕ್ಕೆ ಅಮಾನವೀಯವಾಗಿ ಥಳಿಸಿದ್ದಾರೆ’ ಎಂದು ರೇಷ್ಮಾ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.