ADVERTISEMENT

ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆ ನಿರೀಕ್ಷೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ

​ಪ್ರಜಾವಾಣಿ ವಾರ್ತೆ
Published 10 ಸೆಪ್ಟೆಂಬರ್ 2013, 19:59 IST
Last Updated 10 ಸೆಪ್ಟೆಂಬರ್ 2013, 19:59 IST

ಬೆಂಗಳೂರು: ಬಂಗಾಳಕೊಲ್ಲಿಯ ಮಧ್ಯ ಪಶ್ಚಿಮ ಭಾಗದಲ್ಲಿ ಆಂಧ್ರಪ್ರದೇಶದ ಕರಾವಳಿಗೆ ಹೊಂದಿಕೊಂಡಂತೆ ವಾಯುಭಾರ ಕುಸಿತವಾಗಿರುವುದರಿಂದ ಮುಂದಿನ 48 ಗಂಟೆಗಳಲ್ಲಿ ಕರಾವಳಿ ಸೇರಿದಂತೆ ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

‘ವಾಯುಭಾರ ಕುಸಿತದಿಂದ ರಾಜ್ಯದ ಉತ್ತರ ಭಾಗದ ಗುಲ್ಬರ್ಗ, ಯಾದಗಿರಿ, ರಾಯಚೂರು, ಬೆಳಗಾವಿ, ವಿಜಾಪುರ ಸುತ್ತಮುತ್ತ, ಕರಾವಳಿ ಭಾಗದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಮತ್ತು ದಕ್ಷಿಣ ಭಾಗದ ಮಂಡ್ಯ, ಮೈಸೂರು, ತುಮಕೂರು, ದಾವಣಗೆರೆ, ಚಿತ್ರದುರ್ಗ, ಕೋಲಾರ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ 7ರಿಂದ 12 ಸೆಂ.ಮೀ ವರೆಗೆ ಮಳೆಯಾಗುವ ಸಾಧ್ಯತೆ ಇದೆ’ ಎಂದು ಹವಾಮಾನ ಇಲಾಖೆಯ ಬೆಂಗಳೂರು ವಿಭಾಗದ ನಿರ್ದೇಶಕ ಬಿ.ಪುಟ್ಟಣ್ಣ ತಿಳಿಸಿದರು.

‘ಎರಡು ಮೂರು ದಿನಗಳ ಹಿಂದೆಯೂ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿತ್ತು. ಹೀಗಾಗಿ ರಾಜ್ಯದ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ರಾಜ್ಯದಲ್ಲಿ ಸೆಪ್ಟೆಂಬರ್‌ ಮೊದಲ ವಾರದ ವಾಡಿಕೆ ಮಳೆ 692 ಮಿ.ಮೀ. ಆದರೆ, ಈ ಬಾರಿ 794 ಮಿ.ಮೀ ಮಳೆಯಾಗಿದೆ. ಈ ತಿಂಗಳ ಅಂತ್ಯದವರೆಗೂ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಈಗಿನಂತೇ ಮುಂದುವರಿಯುವ ಸಾಧ್ಯತೆ ಇದ್ದು, ಈ ತಿಂಗಳು ರಾಜ್ಯದಲ್ಲಿ ಭಾರೀ ಮಳೆ­ಯಾಗುವ ನಿರೀಕ್ಷೆ ಇದೆ’ ಎಂದು ಅವರು ಹೇಳಿದರು.

‘ಈವರೆಗೆ ಸಾಧಾರಣ ಮಳೆ­ಯಾಗಿರುವ ಪ್ರದೇಶಗಳಲ್ಲೂ ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ. ರಾಜ್ಯದ ಉತ್ತರ ಭಾಗಕ್ಕೆ ಪೂರ್ವದಿಂದ ಹಾಗೂ ದಕ್ಷಿಣ ಭಾಗಕ್ಕೆ ಪಶ್ಚಿಮದಿಂದ ಗಾಳಿ ಬೀಸುತ್ತಿರುವು­ದರಿಂದ ಮುಂದಿನ ದಿನಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿಯೇ ಇರಲಿದೆ. ಕೆಲವು ಪ್ರದೇಶಗಳಲ್ಲಿ 13 ಸೆಂ.ಮೀಗಿಂತ ಹೆಚ್ಚಿನ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ’ ಎಂದು ಅವರು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.