ADVERTISEMENT

ಮೇಲ್ಜಾತಿ ಬಡವರಿಗೆ ಮೀಸಲಾತಿ ಕೊಡಲು ಹಿಂದೇಟು: ಮಾಯಾವತಿ

ಬಿಜೆಪಿ, ಕಾಂಗ್ರೆಸ್ ವಿರುದ್ಧ ಮಾಯಾವತಿ ವಾಗ್ದಾಳಿ

​ಪ್ರಜಾವಾಣಿ ವಾರ್ತೆ
Published 6 ಮೇ 2018, 19:30 IST
Last Updated 6 ಮೇ 2018, 19:30 IST
ಬೀದರ್‌ನ ನೆಹರೂ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಜೆಡಿಎಸ್– ಬಿಎಸ್‌ಪಿ ಮೈತ್ರಿಕೂಟದ ಅಭ್ಯರ್ಥಿಗಳ ಚುನಾವಣಾ ಪ್ರಚಾರ ಸಭೆಯಲ್ಲಿ ಬಿಎಸ್‌ಪಿ ರಾಷ್ಟ್ರೀಯ ಅಧ್ಯಕ್ಷೆ ಮಾಯಾವತಿ ಕಾರ್ಯಕರ್ತರತ್ತ ಕೈಬೀಸಿದರು.
ಬೀದರ್‌ನ ನೆಹರೂ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಜೆಡಿಎಸ್– ಬಿಎಸ್‌ಪಿ ಮೈತ್ರಿಕೂಟದ ಅಭ್ಯರ್ಥಿಗಳ ಚುನಾವಣಾ ಪ್ರಚಾರ ಸಭೆಯಲ್ಲಿ ಬಿಎಸ್‌ಪಿ ರಾಷ್ಟ್ರೀಯ ಅಧ್ಯಕ್ಷೆ ಮಾಯಾವತಿ ಕಾರ್ಯಕರ್ತರತ್ತ ಕೈಬೀಸಿದರು.   

ಬೀದರ್‌: ‘ಮೇಲ್ಜಾತಿಯಲ್ಲಿರುವ ಬಡವರಿಗೆ ಮೀಸಲಾತಿ ಕಲ್ಪಿಸಲು ಬಿಜೆಪಿ ಹಾಗೂ ಕಾಂಗ್ರೆಸ್‌ ಹಿಂದೇಟು ಹಾಕುತ್ತಿವೆ’ ಎಂದು ಬಿಎಸ್‌ಪಿ ರಾಷ್ಟ್ರೀಯ ಅಧ್ಯಕ್ಷೆ ಮಾಯಾವತಿ ವಾಗ್ದಾಳಿ ನಡೆಸಿದರು.

ನಗರದ ನೆಹರೂ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಜೆಡಿಎಸ್–ಬಿಎಸ್‌ಪಿ ಮೈತ್ರಿಕೂಟದ ಅಭ್ಯರ್ಥಿಗಳ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

‘ಮೇಲ್ಜಾತಿಯಲ್ಲಿ ಆರ್ಥಿಕವಾಗಿ ಹಿಂದುಳಿದ ಬಡವರಿಗೆ ಆದಾಯ ಆಧಾರದ ಮೇಲೆ ಮೀಸಲಾತಿ ಕೊಡುವಂತೆ ಕೇಂದ್ರ ಸರ್ಕಾರಕ್ಕೆ ಅನೇಕ ಬಾರಿ ಪತ್ರ ಬರೆದಿದ್ದೇನೆ. ಸಂಸತ್ತಿನಲ್ಲೂ ಈ ವಿಷಯ ಪ್ರಸ್ತಾಪಿಸಿದ್ದೇನೆ. ಆದರೆ ಕೇಂದ್ರ ಸರ್ಕಾರಆಸಕ್ತಿ ತೋರುತ್ತಿಲ್ಲ’ ಎಂದು ಆರೋಪಿಸಿದರು.

ADVERTISEMENT

‘ಡಾ. ಬಿ.ಆರ್.ಅಂಬೇಡ್ಕರ್‌ ಪರಿಶ್ರಮದ ಫಲವಾಗಿ ದುರ್ಬಲರಿಗೆ ಮೀಸಲಾತಿ ಸೌಲಭ್ಯ ದೊರಕಿದೆ. ಬಿಜೆಪಿ, ಕಾಂಗ್ರೆಸ್‌ ಪಕ್ಷಗಳು ಮೀಸಲಾತಿ ಸೌಲಭ್ಯವನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿಲ್ಲ. ಖಾಸಗಿ ಕ್ಷೇತ್ರದಲ್ಲೂ ಮೀಸಲಾತಿ ದೊರೆಯುವಂತಾಗಬೇಕು’ ಎಂದು ಪ್ರತಿಪಾದಿಸಿದರು.

‘ಕೆಳ ಹಂತದ ಜಾತಿಗಳ ಮೇಲೆ ದಬ್ಬಾಳಿಕೆ ಮುಂದುವರಿದಿದೆ. ಪರಿಶಿಷ್ಟ ಜಾತಿ ಹಾಗೂ ಪಂಗಡದವರ ಸಂರಕ್ಷಣೆಗೆ ರಚಿಸಲಾಗಿರುವ ಕಾನೂನುಗಳನ್ನು ದುರ್ಬಲಗೊಳಿಸುವ ಪ್ರಯತ್ನ ನಡೆದಿದೆ’ ಎಂದು ಆಪಾದಿಸಿದರು.

‘ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಬೇಕಿದೆ. ಮಾಜಿ ಪ್ರಧಾನಿ ದೇವೇಗೌಡರ ಮಾರ್ಗದರ್ಶನದಲ್ಲಿ ಜೆಡಿಎಸ್‌ ಪಕ್ಷಕ್ಕೆ ಸರ್ಕಾರ ರಚಿಸಲು ರಾಜ್ಯದ ಜನರು ಬೆಂಬಲ ನೀಡಬೇಕು’ ಎಂದು ಅವರು ಇದೇ ವೇಳೆ ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.