ADVERTISEMENT

ಯಡಿಯೂರಪ್ಪ, ನಿರಾಣಿಗೆ ಸಮನ್ಸ್

​ಪ್ರಜಾವಾಣಿ ವಾರ್ತೆ
Published 24 ಜೂನ್ 2013, 19:59 IST
Last Updated 24 ಜೂನ್ 2013, 19:59 IST

ಬೆಂಗಳೂರು: ನಕಲಿ ದಾಖಲೆಗಳನ್ನು ಬಳಸಿ ಭೂ ಮಂಜೂರಾತಿ ರದ್ದುಪಡಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಸಚಿವ ಮುರುಗೇಶ ನಿರಾಣಿ ವಿರುದ್ಧ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಆರೋಪಪಟ್ಟಿಯನ್ನು ಲೋಕಾಯುಕ್ತ ವಿಶೇಷ ನ್ಯಾಯಾಲಯ ವಿಚಾರಣೆಗೆ ಸ್ವೀಕರಿಸಿದೆ. ಜುಲೈ 27ಕ್ಕೆ ವಿಚಾರಣೆಗೆ ಹಾಜರಾಗುವಂತೆ ಇಬ್ಬರೂ ಆರೋಪಿಗಳಿಗೆ ಸಮನ್ಸ್ ಜಾರಿ ಮಾಡಿದೆ.

2010ರ ವಿಶ್ವ ಹೂಡಿಕೆದಾರರ ಸಮಾವೇಶದಲ್ಲಿ ಭಾಗವಹಿಸಿದ್ದ ಉದ್ಯಮಿ ಆಲಂ ಪಾಷಾ ಅವರಿಗೆ ಕಡಿಮೆ ದರದ ವಸತಿ ಯೋಜನೆಗಾಗಿ ದೇವನಹಳ್ಳಿಯ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ 26 ಎಕರೆ ಜಮೀನನ್ನು ಸರ್ಕಾರ ಮಂಜೂರು ಮಾಡಿತ್ತು. ನಂತರ ತಮ್ಮದೇ ಕಂಪೆನಿಯ ನಕಲಿ `ಲೆಟರ್ ಹೆಡ್' ಸೃಷ್ಟಿಸಿ ಬರೆದ ಪತ್ರವನ್ನು ಆಧರಿಸಿ ಭೂ ಮಂಜೂರಾತಿ ರದ್ದು ಮಾಡಲಾಗಿದೆ ಎಂದು ಪಾಷಾ ಆರೋಪಿಸಿದ್ದರು. ಈ ಕುರಿತು ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು.

ದೂರಿನಲ್ಲಿರುವ ಆರೋಪಗಳ ಕುರಿತು ತನಿಖೆ ನಡೆಸುವಂತೆ ನ್ಯಾಯಾಲಯ ಬೆಂಗಳೂರು ನಗರ ಲೋಕಾಯುಕ್ತ ಪೊಲೀಸರಿಗೆ ಆದೇಶಿಸಿತ್ತು. ತನಿಖೆ ನಡೆಸಿದ ಲೋಕಾಯುಕ್ತ ಪೊಲೀಸರು, ಯಡಿಯೂರಪ್ಪ, ನಿರಾಣಿ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ್ದರು. ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಹಿಂದಿನ ಪ್ರಧಾನ ಕಾರ್ಯದರ್ಶಿ ವಿ.ಪಿ.ಬಳಿಗಾರ್, ಕರ್ನಾಟಕ ಉದ್ಯೋಗ ಮಿತ್ರದ ಹಿಂದಿನ ವ್ಯವಸ್ಥಾಪಕ ನಿರ್ದೇಶಕ ಕೆ.ಶಿವಸ್ವಾಮಿ ವಿರುದ್ಧ ಅಂತಿಮ ವರದಿ ಸಲ್ಲಿಸಿದ್ದರು.

ಯಡಿಯೂರಪ್ಪ ಮತ್ತು ನಿರಾಣಿ ವಿರುದ್ಧದ ಆರೋಪಪಟ್ಟಿಯನ್ನು ವಿಚಾರಣೆಗೆ ಸ್ವೀಕರಿಸಿದ ನ್ಯಾಯಾಧೀಶ ಎನ್.ಕೆ.ಸುಧೀಂದ್ರ ರಾವ್ ಅವರು, ಇಬ್ಬರೂ ಆರೋಪಿಗಳಿಗೆ ಜು.27ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿಗೆ ಆದೇಶಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.