ADVERTISEMENT

ಯಾವ ಪಕ್ಷದ ಬಾಗಿಲಿಗೂ ಹೋಗುವುದಿಲ್ಲ : ಕುಮಾರಸ್ವಾಮಿ

​ಪ್ರಜಾವಾಣಿ ವಾರ್ತೆ
Published 12 ಮೇ 2018, 12:06 IST
Last Updated 12 ಮೇ 2018, 12:06 IST
ಎಚ್.ಡಿ. ಕುಮಾರಸ್ವಾಮಿ
ಎಚ್.ಡಿ. ಕುಮಾರಸ್ವಾಮಿ   

ರಾಮನಗರ: ‘ಈ ಬಾರಿಯ ಚುನಾವಣೆಯಲ್ಲಿ ಜೆಡಿಎಸ್ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರುವುದು ನಿಶ್ಚಿತ. ರಾಜ್ಯದಲ್ಲಿ ಅತಂತ್ರ ಪರಿಸ್ಥಿತಿ ಉದ್ಬವಿಸುವ ಪ್ರಶ್ನೆಯೇ ಇಲ್ಲ’ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

ಮಾಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೇತಗಾನಹಳ್ಳಿಯಲ್ಲಿ ಶನಿವಾರ ಮತದಾನ ಮಾಡಿದ ಸಂದರ್ಭದಲ್ಲಿ ಅವರು ಪತ್ರಕರ್ತರ ಜೊತೆಗೆ ಮಾತನಾಡಿದರು. ‘ಕಳೆದ ನಾಲ್ಕು ತಿಂಗಳಿನಿಂದ ರಾಜ್ಯದಾದ್ಯಂತ ಪ್ರವಾಸ ಮಾಡಿ ನಾಡಿನ ಜನರ ಭಾವನೆ ಅರ್ಥಮಾಡಿಕೊಂಡಿದ್ದೇನೆ. ರಾಷ್ಟ್ರೀಯ ಪಕ್ಷಗಳು ಹೊರ ರಾಜ್ಯಗಳಿಂದ ನಾಯಕರನ್ನು ಕರೆತಂದು ಭಾಷಣ ಮಾಡಿಸಿದರೂ ಜನರ ಒಲವು ಜೆಡಿಎಸ್ ಕಡೆಗೆ ಇದೆ. ಅದರಲ್ಲೂ ಮಹಿಳೆಯರು, ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಬೆಂಬಲ ನೀಡಿದ್ದಾರೆ’ ಎಂದರು.

‘ಈ ಬಾರಿ ಯಾವುದೇ ಕಾರಣಕ್ಕೂ ಬಿಜೆಪಿ, ಕಾಂಗ್ರೆಸ್ ಜೊತೆ ಕೈ ಜೋಡಿಸುವುದಿಲ್ಲ. ಯಾರ ಮನೆಯ ಬಾಗಿಲಿಗೂ ನಾನು ಹೋಗುವುದಿಲ್ಲ. ಅವರೂ ನನ್ನ ಮನೆ ಬಾಗಿಲಿಗೆ ಬರುವುದು ಬೇಡ’ ಎಂದರು.

ADVERTISEMENT

‘ಉತ್ತರ ಕರ್ನಾಟಕ ಭಾಗದಲ್ಲಿಯೂ ಪಕ್ಷವು ಕನಿಷ್ಠ 26–32 ಸ್ಥಾನ ಗೆಲ್ಲಲಿದೆ. ರಾಮನಗರ, -ಚನ್ನಪಟ್ಟಣ ಎರಡೂ ಕ್ಷೇತ್ರದಲ್ಲೂ ನಾನು ಗೆಲ್ಲುತ್ತೇನೆ. ಬಂಡಾಯ ಶಾಸಕರ ಏಳೂ ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳೇ ಗೆಲುವು ಸಾಧಿಸಲಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜರಾಜೇಶ್ವರಿ ನಗರ ಕ್ಷೇತ್ರದ ಚುನಾವಣೆ ಮುಂದೂಡಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅದಕ್ಕಾಗಿ ಸೂಕ್ತ ತಯಾರಿ ಮಾಡಿಕೊಳ್ಳುವುದಾಗಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.