ADVERTISEMENT

ರಸ್ತೆಗಿಳಿದ ತಮಿಳರು, ಸಾಹಿತಿಗಳು

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2012, 19:30 IST
Last Updated 3 ಅಕ್ಟೋಬರ್ 2012, 19:30 IST

ಮೈಸೂರು: ತಮಿಳುನಾಡಿಗೆ ಹರಿಯಬಿಟ್ಟಿರುವ ನೀರನ್ನು ಕೂಡಲೇ ನಿಲ್ಲಿಸಬೇಕು ಎಂದು ಒತ್ತಾಯಿಸಿ ಮೈಸೂರಿನಲ್ಲಿ ಹೋರಾಟ ತೀವ್ರಗೊಂಡಿದೆ. ತಮಿಳರು, ಸಾಹಿತಿಗಳು, ಕಾಲೇಜು ವಿದ್ಯಾರ್ಥಿಗಳು, ವಿವಿಧ ಸಂಘಟನೆಗಳ ಸಹಸ್ರಾರು ಮಂದಿ ಬುಧವಾರ ರಸ್ತೆಗಿಳಿದು ಪ್ರತಿಭಟನೆ ಮಾಡಿದರು.

ಕರ್ನಾಟಕ ತಮಿಳು ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಸಾವಿರಕ್ಕೂ ಹೆಚ್ಚು ತಮಿಳಿಗರು ನಗರದಲ್ಲಿ ಮೌನ ಮೆರವಣಿಗೆ ನಡೆಸಿದರು. ನಗರದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಮುಂಭಾಗದಿಂದ ಮೆರವಣಿಗೆ ಹೊರಟು ಜಿಲ್ಲಾಧಿಕಾರಿ ಕಚೇರಿ ತಲುಪಿದರು. ರಾಜ್ಯದಲ್ಲಿ ಬರಗಾಲ ಇದೆ. ನಮಗೆ ಕುಡಿಯುವ ನೀರಿಲ್ಲ. ತಮಿಳುನಾಡಿಗೆ ಹನಿ ನೀರು ಬಿಡಬಾರದು ಎಂದು ಒತ್ತಾಯಿಸಿದರು.

ನ್ಯಾಯಾಲಯ ಸಂಕೀರ್ಣ ಎದುರಿನ ಮಹಾತ್ಮ ಗಾಂಧಿ ಪ್ರತಿಮೆ ಎದುರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನೇತೃತ್ವದಲ್ಲಿ ಸಾಹಿತಿಗಳಾದ ದೇ.ಜವರೇಗೌಡ, ಸಿ.ಪಿ.ಕೃಷ್ಣಕುಮಾರ್, ಮಳಲಿ ವಸಂತಕುಮಾರ್ ಪ್ರತಿಭಟನೆ ಮಾಡಿದರು. ತಮಿಳುನಾಡಿಗೆ ಯಾವುದೇ ಕಾರಣಕ್ಕೂ ನೀರು ಬಿಡಬಾರದು. ನೀರು ಬಿಡುತ್ತಿರುವುದು ರಾಜಕೀಯ ಪಿತೂರಿ ಎಂದು ಕಿಡಿಕಾರಿದರು.

ಟೈರ್‌ಗೆ ಬೆಂಕಿ:  ವಿಧಾನ ಪರಿಷತ್ ಮಾಜಿ ಸದಸ್ಯ ಡಿ.ಮಾದೇಗೌಡ ಅವರ ನೇತೃತ್ವದಲ್ಲಿ ಸ್ಥಳೀಯರು ಕೆಆರ್‌ಎಸ್ ರಸ್ತೆಯ ಕುಂಬಾರಕೊಪ್ಪಲು ಬಳಿ ರಸ್ತೆ ತಡೆ ನಡೆಸಿ, ಟೈರ್‌ಗಳಿಗೆ ಬೆಂಕಿ ಹಚ್ಚಿದರು. ಇದರಿಂದ ರಸ್ತೆ ಸಂಚಾರ ಅಸ್ತವ್ಯಸ್ತವಾಯಿತು.

ಜೆಎಸ್‌ಎಸ್ ಮಹಿಳಾ ಕಾಲೇಜು, ಲಕ್ಷ್ಮಿಪುರಂ ಸರ್ಕಾರಿ ಪದವಿಪೂರ್ವ ಕಾಲೇಜು, ವಿದ್ಯಾವರ್ಧಕ ಪ್ರಥಮ ದರ್ಜೆ, ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಬೀದಿಗಿಳಿದು ಹೋರಾಟ ಮಾಡಿದರು.

`ಕನ್ನಡಿಗರ ಹೋರಾಟಕ್ಕೆ ಬೆಂಬಲ~
`ರಾಜ್ಯದಲ್ಲಿ 50 ಲಕ್ಷ ತಮಿಳರು ಇದ್ದೇವೆ. ಮಾತೃಭಾಷೆ ತಮಿಳು ಆದರೂ ಕನ್ನಡ ನಾಡಿನಲ್ಲೇ ಹುಟ್ಟಿ ಬೆಳೆದಿದ್ದೇವೆ. ಕೆಆರ್‌ಎಸ್ ಜಲಾನಯನ ಪ್ರದೇಶದಲ್ಲಿ ರೈತರು ಸಂಕಷ್ಟದಲ್ಲಿ ಇದ್ದಾರೆ. ತಮಿಳುನಾಡಿಗೆ ನೀರು ಬಿಡುವುದನ್ನು ನಿಲ್ಲಿಸಬೇಕು. ಕನ್ನಡಿಗರ ಹೋರಾಟಕ್ಕೆ ಸಂಪೂರ್ಣ ಬೆಂಬಲ ಇದೆ`
 -ಕೆ. ಪುಗಳೆಂದಿ, ಅಧ್ಯಕ್ಷರು,
 ಕರ್ನಾಟಕ ತಮಿಳು ಸಂಘಟನೆಗಳ ಒಕ್ಕೂಟ
`ಎಲ್ಲರೂ ರಾಜೀನಾಮೆ ನೀಡಿ~
`ಕಾವೇರಿ ಹೋರಾಟಕ್ಕೆ ಮಂಡ್ಯದವರು ಮಾತ್ರವಲ್ಲ, ರಾಜ್ಯದ ಎಲ್ಲ ಸಂಸದರು, ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಕೇಂದ್ರ ಸರ್ಕಾರ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದೆ. ರೈತರ ಬಗ್ಗೆ ಕಾಳಜಿ ಇಲ್ಲ. ನೀರು ಬಿಡುವ ವಿಚಾರದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ. ಕೂಡಲೇ ನೀರು ಬಿಡುವುದನ್ನು ನಿಲ್ಲಿಸಬೇಕು` -ದೇ.ಜವರೇಗೌಡ, ಹಿರಿಯ ಸಾಹಿತಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.